Cylinder Blast: ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಸಾವಿಗೀಡಾದವರ ಸಂಖ್ಯೆ 6ಕ್ಕೆ ಏರಿಕೆ
Cylinder Blast: ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಸಾವಿಗೀಡಾದವರ ಸಂಖ್ಯೆ 6ಕ್ಕೆ ಏರಿಕೆ
ಹರೀಶ್ ಕೇರ
December 30, 2024
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ (Hubballi news) ಗ್ಯಾಸ್ ಸಿಲಿಂಡರ್ (Gas Cylinder Blast) ಸ್ಫೋಟಗೊಂಡು ತೀವ್ರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದಾರೆ. ಮಂಜುನಾಥ ವಾಗ್ಮೋಡೆ ಮೃತ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಈ ಮೂಲಕ ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ನಿನ್ನೆ ಇನ್ನೊಬ್ಬ ಮಾಲಾಧಾರಿ ಶಂಕರ್ ಚವ್ಹಾಣ್ ಎಂಬವರು ಮೃತಪಟ್ಟಿದ್ದರು. ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದ ಶಂಕರ್ ಚವ್ಹಾಣ್, ಅವರು ಇದೇ ಮೊದಲ ಬಾರಿ ಅಯ್ಯಪ್ಪನ ಮಾಲೆ ಧರಿಸಿದ್ದರು. ಡಿಸೆಂಬರ್ 22ರಂದು ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಶನಿವಾರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.
ಗಾಯಗೊಂಡಿರುವ ಇನ್ನೂ ಮೂವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಘಟನೆಯಲ್ಲಿ ಗಾಯಗೊಂಡ 9 ಮಾಲಾಧಾರಿಗಳಿಗೆ ಕಳೆದ ಏಳು ದಿನಗಳಿಂದ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಾಯಿನಗರದ ಅಚ್ಚವ್ವಳ ಕಾಲೋನಿಯಲ್ಲಿ ಕಳೆದ ಭಾನುವಾರ ರಾತ್ರಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ಒಟ್ಟು 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಮಂದಿಯಲ್ಲಿ ಆರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (20), ರಾಜು ಮೂಗೇರಿ (21), ಲಿಂಗಾರಾಜು ಬೀರನೂರ (24), ಶಂಕರ್ ಚವ್ಹಾಣ್ (29), ಮೃತ ದುರ್ದೈವಿಗಳಾಗಿದ್ದು, 6ನೇ ಅಯ್ಯಪ್ಪ ಭಕ್ತ ಮಂಜುನಾಥ ವಾಗ್ಮೋಡೆ ಮೃತಪಟ್ಟಿದ್ದಾರೆ.
ಮುಖ್ಯಮಂತ್ರಿಗಳಿಂದ ಪರಿಹಾರ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಎರಡು ಮಂದಿ ಮೃತಪಟ್ಟಾಗ ಅವರು ಪರಿಹಾರ ಘೋಷಿಸಿದ್ದರು. ಈ ಘೋಷಣೆಯ ಬಳಿಕ ನಾಲ್ವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: Cylinder Blast: ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ