ಹುಬ್ಬಳ್ಳಿ: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಆರೋಪಿಯಾಗಿದ್ದ ಗಿರೀಶ್ ಅಲಿಯಾಸ್ ವಿಶ್ವನಾಥ್ ಎಸ್.ಸಾವಂತ್ನನ್ನು ದೋಷಿ ಎಂದು ನ್ಯಾಯಾಲಯ ಘೋಷಿಸಿದೆ. ಹುಬ್ಬಳ್ಳಿಯ ಪ್ರಥಮ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಶನಿವಾರ ತೀರ್ಪು ಪ್ರಕಟಿಸಿದ್ದಾರೆ.
ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 451, 302 ಹಾಗೂ 201ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಲ್ಲಿ ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಲಾಗಿದೆ. ನ.25ಕ್ಕೆ ಶಿಕ್ಷೆಯ ಪ್ರಮಾಣದ ಕುರಿತು ವಾದ-ಪ್ರತಿವಾದ ಆಲಿಸಲು ನ್ಯಾಯಾಲಯವು ದಿನಾಂಕ ನಿಗದಿಪಡಿಸಿದೆ.
ಏನಿದು ಪ್ರಕರಣ?:
2024ರ ಮೇ 15ರಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ತನ್ನ ನಿವಾಸದಲ್ಲಿ 20 ವರ್ಷದ ಅಂಜಲಿ ಅಂಬಿಗೇರ ಬರ್ಬರವಾಗಿ ಹತ್ಯೆಯಾಗಿದ್ದಳು. ಮನೆಯಲ್ಲಿದ್ದ ಅಂಜಲಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಗಿರೀಶ್ ಅಲಿಯಾಸ್ ವಿಶ್ವನಾಥ್ ಎಸ್.ಸಾವಂತ್ ಆರೋಪಿಯಾಗಿದ್ದ.
ಅಂಜಲಿ ಮತ್ತು ಆರೋಪಿಯ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿದ್ದೇ ಕೊಲೆಗೆ ಕಾರಣ ಎಂಬ ಅಂಶ ತನಿಖೆಯಲ್ಲಿ ತಿಳಿದುಬಂದಿತ್ತು. ಅಂಜಲಿ ಸಂಪರ್ಕ ಕಡಿದುಕೊಂಡಿದ್ದ ಹಿನ್ನೆಲೆಯಲ್ಲಿ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು.
ಆರೋಪಿಯ ಬಂಧನ, ಸಿಐಡಿ ತನಿಖೆ: ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಾವಣಗೆರೆ ಸಮೀಪ ರೈಲ್ವೆ ಪೊಲೀಸರ ನೆರವಿನಿಂದ ವಶಕ್ಕೆ ಪಡೆಯಲಾಗಿತ್ತು. ಚಲಿಸುವ ರೈಲಿನಿಂದ ಬಿದ್ದು ಗಾಯಗೊಂಡಿದ್ದ ಆತನಿಗೆ ಚಿಕಿತ್ಸೆ ಕೊಡಿಸಿದ ಬಳಿಕ ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದರು. ಅಂಜಲಿ ಕೊಲೆಗೂ ಮುನ್ನ ಆರೋಪಿಯಿಂದ ಬಂದಿದ್ದ ಬೆದರಿಕೆಗಳ ಕುರಿತು ನೀಡಿದ್ದ ದೂರನ್ನು ನಿರ್ಲಕ್ಷಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು.
Kodagu News: ಸೂರ್ಲಬ್ಬಿ ವಿದ್ಯಾರ್ಥಿನಿ ಕೊಲೆ ಪ್ರಕರಣ; ಅಪರಾಧಿಗೆ ಮರಣದಂಡನೆ ವಿಧಿಸಿದ ಕೊಡಗು ಜಿಲ್ಲಾ ಕೋರ್ಟ್
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ (CID) ವಹಿಸಿತ್ತು. ತನಿಖೆ ಪೂರ್ಣಗೊಳಿಸಿದ ಸಿಐಡಿ ಅಧಿಕಾರಿಗಳು, 2024ರ ಆಗಸ್ಟ್ನಲ್ಲಿ ನ್ಯಾಯಾಲಯಕ್ಕೆ 494 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ವಾದ-ಪ್ರತಿವಾದ, ಸಾಕ್ಷಿಗಳ ಹೇಳಿಕೆ ಹಾಗೂ ಲಭ್ಯವಿದ್ದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನ್ಯಾಯಾಲಯ ಇದೀಗ ಆರೋಪಿಯನ್ನು ದೋಷಿ ಎಂದು ಘೋಷಿಸಿದೆ.