ಬೆಂಗಳೂರು: ಧಾರವಾಡದ ಯೋಗೇಶ್‌ಗೌಡ ಕೊಲೆ ಪ್ರಕರಣದಲ್ಲಿ (Yogesh Gowda murder case) ಶಿಕ್ಷೆಗೆ ಒಳಗಾಗಿರುವ ಏಳು ಅಪರಾಧಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಏಳು ಜನ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯಲ್ಲಿನ ಮಧ್ಯಂತರ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮದ್ ನವಾಜ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಅಮಾನತಿನಲ್ಲಿ ಇರಿಸಿದೆ.
ಎ-2 ವಿಕ್ರಂ ಬಳ್ಳಾರಿ (37), ಎ-3 ಕೀರ್ತಿಕುಮಾರ ಬಸವರಾಜ ಕುರುಹಟ್ಟಿ (37), ಎ-4 ಸಂದೀಪ್ ಸೌದತ್ತಿ ಅಲಿಯಾಸ್ ಸ್ಯಾಂಡಿ (37), ಎ-5 ವಿನಾಯಕ ಕಟಗಿ (44), ಎ-6 ಮಹಾಬಲೇಶ್ವರ ಹೊಂಗಲ್ ಅಲಿಯಾಸ್ ಮುದುಕ (42), ಎ-7 ಸಂತೋಷ ಸವದತ್ತಿ (37) ಮತ್ತು ಎ-18 ವಿಕಾಸ ಕಲಬುರಗಿ (33) ಸೇರಿ ಏಳು ಮಂದಿಗೆ ಜಾಮೀನು ಮಂಜೂರಾಗಿದೆ.
ಶಿಕ್ಷೆ ರದ್ದು ಕೋರಿ ಅರ್ಜಿದಾರರು ಸಲ್ಲಿಸಿರುವ ಮೇಲ್ಮನವಿಗಳು ತೀರ್ಮಾನವಾಗುವ ತನಕ ವಿಚಾರಣಾ ನ್ಯಾಯಾಲಯದ ಆದೇಶವನ್ನು ಅಮಾನತಿನಲ್ಲಿರಿಸಲಾಗಿದೆ ಮತ್ತು ಷರತ್ತುಗಳಿಗೆ ಒಳಪಟ್ಟಂತೆ ಮೇಲ್ಮನವಿದಾರರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ನ್ಯಾಯಪೀಠ ಆದೇಶಿಸಿದೆ.
ಅರ್ಜಿದಾರರು ತಲಾ 5 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ಒದಗಿಸಬೇಕು. ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ದೇಶ ಬಿಟ್ಟು ಹೋಗಬಾರದು. ಹೈಕೋರ್ಟ್ ಹಾಗೂ ವಿಶೇಷ ನ್ಯಾಯಾಲಯ ನಿರ್ದೇಶಿಸಿದಾಗ ಖುದ್ದು ಹಾಜರಾಗಬೇಕು ಎಂಬ ಷರತ್ತುಗಳನ್ನು ವಿಧಿಸಿದೆ.
ಏನಿದು ಪ್ರಕರಣ?
ಧಾರವಾಡದ ಬಿಜೆಪಿ ಮುಖಂಡ ಯೋಗೀಶಗೌಡ ಗೌಡರ ಅವರನ್ನು 2016ರಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು 21 ಆರೋಪಿಗಳ ಪೈಕಿ 17 ಜನರನ್ನು ಅಪರಾಧಿಗಳು ಎಂದು ತೀರ್ಮಾನಿಸಿದ್ದ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ 16 ಜನರಿಗೆ 2026ರ ಏಪ್ರಿಲ್ 17ರಂದು ಜೀವಾವಧಿ ಶಿಕ್ಷೆ ಪ್ರಕಟಿಸಿದ್ದರು.
ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ವಿರುದ್ಧದ ಆದೇಶವನ್ನು ಅಮಾನತ್ತಿನಲ್ಲಿಟ್ಟು ಇತ್ತೀಚೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅದೇ ಆದೇಶದಂತೆ ಇತರ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.