ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದ್ದು, ಅಫಿಡವಿಟ್ ಸಲ್ಲಿಕೆಗೆ ಸೂಚನೆ ನೀಡಿದೆ.
ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ಗೆ ಅಕ್ಟೋಬರ್ 27 ಕ್ಕೆ ವಿಚಾರಣೆ ಮುಂದೂಡಿದೆ. ಯಾವುದೇ ಮಧ್ಯಂತರ ಆದೇಶ ನೀಡದೇ ವಿಚಾರಣೆ ಮುಂದೂಡಿದ ಹಿನ್ನೆಲೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಹೈಕೋರ್ಟ್ ನೀಡಿದ ಜಾಮೀನು ರದ್ದು ಮಾಡಬೇಕು ಎಂದು ಕೋರಿ ಸಿಬಿಐ ಮತ್ತು ಗುರುನಾಥಗೌಡ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲಾಯಿತು. ವಿಚಾರಣೆ ವೇಳೆ ಸರ್ಕಾರ ಪರವಾಗಿ ವಾದ ಮಂಡಿಸಿದ ವಕೀಲರು, ವಿನಯ್ ಕುಲಕರ್ಣಿ ಅವರಿಗೆ ಹಿಂದೆ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿತ್ತು. ಸಾಕ್ಷ್ಯಗಳ ಮೇಲೆ ಪರಿಣಾಮ ಬೀರಿದ ಕಾರಣ ಮತ್ತೊಂದು ಪ್ರಕರಣ ದಾಖಲಾಗಿದ್ದು, ಅದರ ವಿಚಾರಣೆ ಕೂಡ ನಡೆಯುತ್ತಿದೆ. ಈ ಹಿನ್ನೆಲೆ ಅವರಿಗೆ ಹೈಕೋರ್ಟ್ ನೀಡಿದ ಜಾಮೀನು ರದ್ದು ಮಾಡಬೇಕು ಎಂದು ಮನವಿ ಮಾಡಿದರು.