ಬೆಂಗಳೂರು: ವಿಧಾನಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಆರ್‌ಎಸ್‌ಎಸ್ ಪ್ರಾರ್ಥನಾ ಗೀತೆಯನ್ನು ಹಾಡಿ ಗಮನ ಸೆಳೆದದ್ದು, ಈ ವಿಡಿಯೊ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಧಾನಸಭೆಯಲ್ಲಿ ಮಾತನಾಡುತ್ತಾ ‘ನಮಸ್ತೇ ಸದಾ ವತ್ಸಲೇ ಮಾತೃಭೂಮಿ’ ಗೀತೆ ಎಂದು ಪಠಿಸಿದ್ದಾರೆ.
ವಿಧಾನಸಭೆಯಲ್ಲಿ ಗುರುವಾರ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಶಿವಕುಮಾರ್ ಅವರು ಹಿಂದೆ ಆರ್‌ಎಸ್ಎಸ್ ಸಮವಸ್ತ್ರ ಧರಿಸಿದ್ದರು ಎಂದು ಹೇಳಿದಾಗ, ಶಿವಕುಮಾರ್ ಅವರು, ನನಗೂ ಆರ್‌ಎಸ್‌ಎಸ್ ಬಗ್ಗೆ ಗೊತ್ತು, ತಮಾಷೆಯಾಗಿ ಆರ್‌ಎಸ್‌ಎಸ್ ಗೀತೆ ಹಾಡಿದ್ದಾರೆ.
ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ಏನು?
ಸದನದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿರುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ, ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ ಎಂದು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು, “ನಾನು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಯಾವುದೇ ರೀತಿಯಲ್ಲೂ ಆರ್‌ಎಸ್‌ಎಸ್ ಅವರ ಜತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ. ನಾನು ಅಪ್ಪಟ ಕಾಂಗ್ರೆಸ್ಸಿಗ. ಜನತಾದಳ, ಬಿಜೆಪಿ ಬಗ್ಗೆ ಸಂಶೋಧನೆ ಮಾಡುತ್ತಿರುತ್ತೇನೆ. ಅದೇ ರೀತಿ ಆರ್‌ಎಸ್‌ಎಸ್ ಬಗ್ಗೆಯೂ ತಿಳಿದುಕೊಂಡಿದ್ದೇನೆ” ಎಂದರು.
“ನಾನು ಪ್ರತಿಯೊಂದು ರಾಜಕೀಯ ಪಕ್ಷಗಳ ಬಗ್ಗೆಯೂ ನನ್ನದೇ ಆದ ಸಂಶೋಧನೆ ನಡೆಸಿದ್ದೇನೆ. ಆರ್‌ಎಸ್‌ಎಸ್ ರಾಜ್ಯದಲ್ಲಿ ಹೇಗೆ ತನ್ನ ಸಂಘಟನೆ ಕಟ್ಟಿತು ಎಂಬುದು ನನಗೆ ತಿಳಿದಿದೆ. ಆರ್‌ಎಸ್‌ಎಸ್ ಪ್ರತಿ ತಾಲೂಕು, ಜಿಲ್ಲೆ ಸೇರಿದಂತೆ ಎಲ್ಲಾ ಕಡೆ ಶಿಕ್ಷಣ ಸಂಸ್ಥೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿದೆ. ಸಾಕಷ್ಟು ಹಣ ಹೂಡಿಕೆ ಮಾಡುತ್ತಿದೆ. ಮಕ್ಕಳನ್ನು ತಲುಪುವ ಕೆಲಸ ಮಾಡುತ್ತಿದೆ” ಎಂದರು.
“ರಾಜಕೀಯವಾಗಿ ನಾವು ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ರಾಜಕೀಯ ವ್ಯಕ್ತಿಯಾದ ನಾನು ರಾಜಕೀಯ ಎದುರಾಳಿಗಳಲ್ಲಿ ಯಾರು ಸ್ನೇಹಿತರಿದ್ದಾರೆ, ಯಾರು ಶತ್ರುಗಳಿದ್ದಾರೆ ಎನ್ನುವುದನ್ನು ತಿಳಿಯಬೇಕಲ್ಲವೇ? ಆದ ಕಾರಣಕ್ಕೆ ಆರ್‌ಎಸ್‌ಎಸ್ ಇತಿಹಾಸ ತಿಳಿದುಕೊಂಡಿದ್ದೇನೆ” ಎಂದರು.