ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಹಾಗೂ ಈಶಾನ್ಯ ಮುಂಗಾರು ಮಾರುತಗಳ ಪ್ರಭಾವ ತಗ್ಗಿದ್ದು, ಇಂದು ಕರಾವಳಿ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ (Karnataka Weather) ಮುಂದುವರಿಯಲಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಚಳಿಯ ತೀವ್ರತೆ ಗಮನಾರ್ಹವಾಗಿ ಹೆಚ್ಚಾಗಿದ್ದು, ಬೆಳಗಿನ ಜಾವ ತಂಪಾದ ಗಾಳಿ ಮತ್ತು ಮಂಜು ಕವಿದ ವಾತಾವರಣ ಕಂಡುಬರಲಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆ ಸಂಪೂರ್ಣವಾಗಿ ಒಣಹವೆ ಇರಲಿದ್ದು, ಮಳೆಯಾಗುವ ಯಾವುದೇ ಸಾಧ್ಯತೆಗಳಿಲ್ಲ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡಿನಾದ್ಯಂತ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುತ್ತಿದ್ದು, ರಾತ್ರಿ ಮತ್ತು ಮುಂಜಾನೆಯ ವೇಳೆ ಚಳಿಯ ಪ್ರಮಾಣ ಹೆಚ್ಚಾಗಿರಲಿದೆ. ಕಲಬುರಗಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಗರಿಷ್ಠ ತಾಪಮಾನ ಸುಮಾರು 31°C–32°C ಹಾಗೂ ಕನಿಷ್ಠ ತಾಪಮಾನ 16°C–17°C ಆಸುಪಾಸಿನಲ್ಲಿ ದಾಖಲಾಗುವ ನಿರೀಕ್ಷೆಯಿದೆ.
ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಇರಲಿದೆ. ಮಲೆನಾಡು ಮತ್ತು ಬಯಲುಸೀಮೆಯ ಜಿಲ್ಲೆಗಳಲ್ಲಿ ಮುಂಜಾನೆ ದಟ್ಟ ಮಂಜು ಹಾಗೂ ತೀವ್ರ ಚಳಿಯ ಅನುಭವವಾಗಲಿದ್ದು, ದಾವಣಗೆರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾಜ್ಯದಲ್ಲೇ ಅತ್ಯಂತ ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಗರಿಷ್ಠ 28°C ಮತ್ತು ಕನಿಷ್ಠ 16°C ತಾಪಮಾನ ಇರಲಿದೆ.
ರಾಜ್ಯಾದ್ಯಂತ ಇಂದು ಭಾರೀ ಮಳೆ ಸಾಧ್ಯತೆ; ಬೆಂಗಳೂರಿನ ಹವಾಮಾನ ಹೇಗಿದೆ?
ಹವಾಮಾನ ಇಲಾಖೆಯ ಪ್ರಕಾರ ನಾಳೆ ರಾಜ್ಯಾದ್ಯಂತ ಒಣಹವೆ ಇದ್ದರೂ, ನವೆಂಬರ್ 20ರ ನಂತರ ಬಂಗಾಳಕೊಲ್ಲಿಯಲ್ಲಿನ ಹವಾಮಾನ ಬದಲಾವಣೆಯಿಂದಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ.