ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ED Raid: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ ರೇಡ್

Satish Sail: 24ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಸತೀಶ್ ಸೈಲ್ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಕಾರಣ ಶಾಸಕ ಸೈಲ್ ಬೆಂಗಳೂರಿನಲ್ಲಿದ್ದಾರೆ. ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ ಸೈಲ್ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.

ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ ರೇಡ್

ಶಾಸಕ ಸತೀಶ್‌ ಸೈಲ್

ಹರೀಶ್‌ ಕೇರ ಹರೀಶ್‌ ಕೇರ Aug 13, 2025 9:57 AM

ಕಾರವಾರ: ಉತ್ತರ ಕನ್ನಡ ಜಿಲ್ಲೆ (Uttara Kannada) ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Krishna Sail) ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ (ED Raid) ಮಾಡಿದ್ದಾರೆ. 6 ಕಾರುಗಳಲ್ಲಿ ಬಂದಿರುವ 24ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಸತೀಶ್ ಸೈಲ್ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಕಾರಣ ಶಾಸಕ ಸೈಲ್ ಬೆಂಗಳೂರಿನಲ್ಲಿದ್ದಾರೆ. ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ ಸೈಲ್ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.

ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ದೆ ಅವರ ತಂಡ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಸತೀಶ್ ಸೈಲ್​ಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಹೈಕೋರ್ಟ್​​ನಲ್ಲಿ ಜಾಮೀನು ಪಡೆದುಕೊಂಡಿದ್ದರು.

ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಸತೀಶ್ ಸೈಲ್ ಅವರನ್ನು ದೋಷಿ ಎಂದು ಕಳೆದ ವರ್ಷ ಅಕ್ಟೋಬರ್​​ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ನಂತರ ಬೇಲೆಕೇರಿ ಅದಿರು ಸಾಗಾಟ ಪ್ರಕರಣ ಸಂಬಂಧಿತ 6 ಪ್ರಕರಣಗಳಲ್ಲಿ ಅವರಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 44 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿತ್ತು. ಆನಂತರ ಜೈಲು ಪಾಲಾಗಿದ್ದ ಅವರು ಶಾಸಕ ಸ್ಥಾನದಿಂದ ಅನರ್ಹರಾಗುವ ಭೀತಿ ಎದುರಿಸುತ್ತಿದ್ದರು.

ನಂತರ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ವಿರುದ್ಧ ಸೈಲ್ ಹೈಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನವೆಂಬರ್​​​ನಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, ಸೈಲ್​​​ಗೆ ವಿಧಿಸಿರುವ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಡಲು ಸೂಚಿಸಿತ್ತು. ದಂಡ ಮೊತ್ತದ ಶೇ. 25ರಷ್ಟನ್ನು ಠೇವಣಿ ಇಡುವಂತೆ ಸೂಚನೆ ನೀಡಿದ್ದ ಹೈಕೋರ್ಟ್ ಸೈಲ್​ಗೆ ಜಾಮೀನು ನೀಡಿತ್ತು.

ಇದನ್ನೂ ಓದಿ: ED Raid: ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ ಮೇಲೆ ಇಡಿ ದಾಳಿ