Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 11,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ
Teachers Recruitment: ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸುವುದು ಹಾಗೂ ಅತಿಥಿ ಶಿಕ್ಷಕರ ನೇಮಕಾತಿಗೆ ಸ್ವೀಕೃತವಾದ ಅರ್ಜಿಗಳಲ್ಲಿ ಹೆಚ್ಚು ಮೆರಿಟ್ ಹೊಂದಿರುವ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಸೂಚಿಸಲಾಗಿದೆ.


ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ನೇರ ನೇಮಕಾತಿ (Teachers Recruitment) ಮೂಲಕ ಭರ್ತಿ ಮಾಡುವವರೆಗೆ ಒಟ್ಟು 11,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದು, 2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ.
ನೇರ ನೇಮಕಾತಿ/ ಬಡ್ತಿ/ವರ್ಗಾವಣೆ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026 ರ ಅಂತ್ಯದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 11000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ.
2025-26ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಪ್ರಸ್ತುತ ಖಾಲಿ ಇರುವ 9499 ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026 ರ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 9499 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಷರತ್ತುಗಳಿಗೊಳಪಟ್ಟು ಜೂನ್ 1ರಿಂದ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.
ಅತಿಥಿ ಶಿಕ್ಷಕರ ನೇಮಕಾತಿಗೆ ಷರತ್ತುಗಳು
- ಸರ್ಕಾರಿ ಪ್ರೌಢ ಶಾಲೆಗಳಿಗೆ ಶಾಲಾವಾರು/ತಾಲೂಕುವಾರು ಖಾಲಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ಅತಿಥಿ ಶಿಕ್ಷಕರನ್ನು ತ್ವರಿತವಾಗಿ ನೇಮಕಾತಿ ಮಾಡಲು ತಾಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿರುತ್ತದೆ.
- ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ನೇಮಕ ಮಾಡುವುದು.
- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು/ಬೆಂಗಳೂರು ಪಬ್ಲಿಕ್ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳ ಶೇಕಡ 100 ರಷ್ಟು ಅತಿಥಿ ಶಿಕ್ಷಕರನ್ನು ಮೊದಲ ಆದ್ಯತೆ ನೀಡಿ ನೇಮಕ ಮಾಡಿಕೊಳ್ಳಲು ಕ್ರಮವಹಿಸುವುದು.
- ಸರ್ಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕಠಿಣ ವಿಷಯಗಳಾದ ಗಣಿತ, ವಿಜ್ಞಾನ, ಆಂಗ್ಲ ವಿಷಯದ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆದ್ಯತೆ ನೀಡಲು ತಿಳಿಸಿದೆ. ನಂತರ ಇತರೆ ವಿಷಯಗಳಿಗೆ ಆದ್ಯತೆ ನೀಡುವುದು.
- ಸದರಿ ವಿಷಯಗಳಿಗೆ ಹೆಚ್ಚುವರಿ ಶಿಕ್ಷಕರು ಇರುವ ಶಾಲೆಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡುವಂತಿಲ್ಲ.
- ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗೆ ವರ್ಗಾವಣೆ/ನೇಮಕಾತಿ ಮುಖಾಂತರ ಕಾಯಂ ಶಿಕ್ಷಕರು ಸ್ಥಳನಿಯುಕ್ತಿಗೊಂಡಲ್ಲಿ ಸದರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಅದೇ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿಯೇ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಅತಿಥಿ ಶಿಕ್ಷಕರನ್ನು ಹಂಚಿಕೆ ಮಾಡುವುದು.
- ಅತಿಥಿ ಶಿಕ್ಷಕರನ್ನು ಅತೀ ಹೆಚ್ಚು ಮಕ್ಕಳಿರುವ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇರುವ ಪ್ರೌಢ ಶಾಲೆಗಳಿಗೆ ಆದ್ಯತೆ ಮೇರೆಗೆ ಒದಗಿಸುವುದು.
- ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸುವುದು ಹಾಗೂ ಅತಿಥಿ ಶಿಕ್ಷಕರ ನೇಮಕಾತಿಗೆ ಸ್ವೀಕೃತವಾದ ಅರ್ಜಿಗಳಲ್ಲಿ ಹೆಚ್ಚು ಮೆರಿಟ್ ಹೊಂದಿರುವ ಅಭ್ಯರ್ಥಿಯನ್ನು ಆಯ್ಕೆ ಮಾಡತಕ್ಕದ್ದು.
- ಅತಿಥಿ ಶಿಕ್ಷಕರ ಹಾಜರಾತಿ ವಹಿಯನ್ನು ಪ್ರತ್ಯೇಕವಾಗಿ ನಿರ್ವಹಿಸುವುದು.
- ಸರ್ಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆ ದರವನ್ನು ಉಲ್ಲೇಖ(2) ರ ಸರ್ಕಾರಿ ಆದೇಶದಲ್ಲಿ ನಿಗದಿಪಡಿಸಿರುವ ಮಾಹೆಯಾನ ರೂ.12500/- ಆಗಿರುತ್ತದೆ. ಈ ಗೌರವ ಧನ ಪಾವತಿಯನ್ನು ಅತಿಥಿ ಶಿಕ್ಷಕರು ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ಪಾವತಿಸುವುದು.
- ದಿನಾಂಕ:28.04.2025 ರಂದು ವರ್ಗಾವಣೆ ತಂತ್ರಾಂಶದಲ್ಲಿ ಇರುವ ಒಟ್ಟು 9499 ಖಾಲಿ ಹುದ್ದೆಗಳ ಅನುಸಾರ ತಾಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು ಸದರಿ ಅತಿಥಿ ಶಿಕ್ಷಕರ ಹುದ್ದೆಗಳನ್ನು ತಾಲೂಕು ಪಂಚಾಯಿತಿವಾರು ಮರುಹಂಚಿಕೆ ಮಾಡಿ ಅನುದಾನದ ವಿವರಗಳನ್ನು ಈ ಕಚೇರಿಗೆ ಸಲ್ಲಿಸಿದ ನಂತರ ತಾಲೂಕಿನಿಂದ ತಾಲೂಕಿಗೆ ಅತಿಥಿ ಶಿಕ್ಷಕರ ಮರುಹಂಚಿಕೆ ಮಾಡುವಂತಿಲ್ಲ.
- ನಿಯೋಜನೆ ಮೇಲೆ ತೆರವಾದ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡುವಂತಿಲ್ಲ.
- ಇನ್ನೂ ಹೆಚ್ಚಿನ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಅವಶ್ಯಕತೆ ಇದ್ದಲ್ಲಿ ಮಾಹಿತಿಯನ್ನು ಉಪನಿರ್ದೇಶಕರು(ಆಡಳಿತ) ರವರ ಮೂಲಕ ಮಾಹಿತಿಯನ್ನು ಸಲ್ಲಿಸುವುದು.
- ಈ ಮೇಲಿನ ಎಲ್ಲಾ ಅಂಶಗಳನ್ನು ಪರಿಗಣಿಸಿ, ಇಲಾಖೆಯ ನಿಯಮಗಳು ಹಾಗೂ ಸುತ್ತೋಲೆಗಳ ಮಾರ್ಗದರ್ಶನದಡಿ ಒಟ್ಟು 11000 ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಸಹಮತಿಯಂತೆ ಷರತ್ತುಗಳನ್ನೊಳಗೊಂಡಂತೆ, 2025-26 ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಪ್ರಸ್ತುತ ಖಾಲಿ ಇರುವ ಒಟ್ಟು 9499 ಹುದ್ದೆಗಳಿಗೆ ಜಿಲ್ಲಾವಾರು/ತಾಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಿ ಅನುಮತಿ ನೀಡಿದೆ.
ಈ ಸುದ್ದಿಯನ್ನೂ ಓದಿ | ISRO Recruitment 2025: ಇಸ್ರೋದಲ್ಲಿದೆ 320 ಹುದ್ದೆ; ಇಂದೇ ಅಪ್ಲೈ ಮಾಡಿ