#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Microfinance Ordinance: ಸಾಲಗಾರರ ಕಿರುಕುಳಕ್ಕೆ ಬ್ರೇಕ್‌; ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

Microfinance Ordinance: ರಾಜ್ಯಪಾಲರು ವಾಪಸ್ಸು ಕಳುಹಿಸಿದ್ದ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ಎಲ್ಲಾ ಆಕ್ಷೇಪಣೆಗಳಿಗೆ ಕಾನೂನು ಇಲಾಖೆಯಿಂದ ಸೂಕ್ತ ಸ್ಪಷ್ಟೀಕರಣ ನೀಡಲಾಗಿತ್ತು. ಹೀಗಾಗಿ ಇದೀಗ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಸಹಿ ಹಾಕಿದ್ದಾರೆ.

ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆಗೆ ರಾಜ್ಯಪಾಲ ಅಂಕಿತ

Profile Prabhakara R Feb 12, 2025 5:41 PM

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಂಪನಿಗಳ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ರೂಪಿಸಿರುವ ಸುಗ್ರೀವಾಜ್ಞೆಗೆ (Microfinance Ordinance) ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸಹಿ ಹಾಕಿದ್ದಾರೆ. ರಾಜ್ಯಪಾಲರು ಇತ್ತೀಚೆಗೆ ಹಲವು ಸ್ಪಷ್ಟನೆ ಕೇಳಿ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಸಹಿ ಹಾಕದೇ ವಾಪಸ್ ಕಳುಹಿಸಿದ್ದರು. ನಂತರ ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಮೈಕ್ರೋ ಫೈನಾನ್ಸ್‌ಗೆ ಸಂಬಂಧಿಸಿದ ಸುಗ್ರೀವಾಜ್ಞೆಯನ್ನು ಸರ್ಕಾರ ರಾಜಭವನಕ್ಕೆ ಕಳುಹಿಸಿತ್ತು.‌ಇದೀಗ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ಇನ್ನು ಈ ಮಸೂದೆಯನ್ನು ಮಂಡಿಸಲು ರಾಜ್ಯ ಸರ್ಕಾರಕ್ಕೆ ಆರು ತಿಂಗಳ ಕಾಲಾವಕಾಶವನ್ನು ರಾಜ್ಯಪಾಲರು ನೀಡಿದ್ದು, ಇದೇ ವೇಳೆ ʼಮೈಕ್ರೋಫೈನಾನ್ಸ್‌ ಕಿರುಕುಳ ತಪ್ಪಿಸಲು ಈ ಸುಗ್ರೀವಾಜ್ಞೆ ಒಂದು ಉತ್ತಮ ಹೆಜ್ಜೆ ಎಂದು ರಾಜ್ಯಪಾಲರು ಹೇಳಿದ್ದಾರೆ.

ಮೈಕ್ರೋ ಫೈನಾನ್ಸ್ ಕಂಪನಿಗಳು ಹಾಗೂ ಖಾಸಗಿ ವ್ಯಕ್ತಿಗಳಿಂದ ಬಲವಂತದ ಸಾಲ ವಸೂಲಿ ಹಾಗೂ ಕಿರುಕುಳ ತಪ್ಪಿಸುವ "ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ್ರಗಳ ನಿಷೇಧ) ಸುಗ್ರೀವಾಜ್ಞೆʼಯು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಸಹಜ ಹಾಗೂ ಸಾಲ ನೀಡುವವರ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ, ಫೆ.7ರಂದು ವಾಪಸ್‌ ಕಳುಹಿಸಿದ್ದರು. ಬಳಿಕ ರಾಜ್ಯಪಾಲರು ವಾಪಸ್ಸು ಕಳುಹಿಸಿದ್ದ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ಎಲ್ಲಾ ಆಕ್ಷೇಪಣೆಗಳಿಗೆ ರಾಜ್ಯ ಕಾನೂನು ಇಲಾಖೆಯಿಂದ ಸೂಕ್ತ ಸ್ಪಷ್ಟೀಕರಣ ನೀಡಲಾಗಿತ್ತು. ಹೀಗಾಗಿ ಸದ್ಯ ಕೆಲವು ಉಪಯುಕ್ತ ಬದಲಾವಣೆಗಳನ್ನು ಸೂಚಿಸುವ ಮೂಲಕ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಮ್ಮತಿ ಸೂಚಿಸಿದ್ದಾರೆ.

ರಾಜ್ಯಪಾಲರ ಆಕ್ಷೇಪಗಳಿಗೆ ಸ್ಪಷ್ಟನೆ ನೀಡಿದ್ದ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು, ನೋಂದಾಯಿತವಲ್ಲದ ಮತ್ತು ಸಾಲ ನೀಡಲು ಲೈಸೆನ್ಸ್ ಹೊಂದಿರದ ಯಾವುದೇ ವ್ಯಕ್ತಿಯು ಯಾರಿಗೇ ಸಾಲ ಕೊಡಲು ಮತ್ತು ಹೆಚ್ಚಿನ ಬಡ್ಡಿ ಮತ್ತು ಚಕ್ರಬಡ್ಡಿ ಅಥವಾ ದಂಡದ ಬಡ್ಡಿ ವಿಧಿಸಲು ಕಾನೂನಾತ್ಮಕವಾಗಿ ಅಧಿಕಾರ ಹೊಂದಿರುವುದಿಲ್ಲ. ಸಾಲವನ್ನು ಖಾಸಗಿಯಾಗಿ, ಲೈಸೆನ್ಸ್ ಇಲ್ಲದೇ ನೀಡಿ ಹೆಚ್ಚಿನ ಬಡ್ಡಿ ವಸೂಲಿ ಮಾಡಿದರೆ ಅದು ಕಾನೂನು ವಿರೋಧಿ ಕ್ರಮವಾಗಿದೆ. ಅಂತಹ ಸಾಲವು ವಸೂಲಿಗೆ ಅರ್ಹವೂ ಅಲ್ಲ, ಯೋಗ್ಯವೂ ಅಲ್ಲ ಎಂದು ಹೇಳಿದ್ದರು.

ನೈಸರ್ಗಿಕ ನ್ಯಾಯ ಮತ್ತು ಯಾವುದೇ ವ್ಯಕ್ತಿಯ ಹಕ್ಕುಗಳಿಗೆ ಮತ್ತು ಕಾನೂನಾತ್ಮಕ ಹೋರಾಟಕ್ಕೆ ಮೂಲಭೂತ ಹಕ್ಕುಗಳಿಗೆ ಧಕ್ಕೆತರುವಂತಹ ಯಾವುದೇ ಕ್ರಮ ಸುಗ್ರೀವಾಜ್ಞೆಯಲ್ಲಿ ಪ್ರಸ್ತಾಪಿಸಿಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಆಕ್ಷೇಪ ವ್ಯಕ್ತಪಡಿಸಿದ 5 ಲಕ್ಷ ರೂ. ದಂಡವನ್ನು ಸಚಿವರು ಸಮರ್ಥಿಸಿಕೊಂಡಿದ್ದರು.

ಈ ಸುದ್ದಿಯನ್ನೂ ಓದಿ | Invest Karnataka 2025: ಇನ್ವೆಸ್ಟ್‌ ಕರ್ನಾಟಕದಲ್ಲಿ 5.10 ಲಕ್ಷ ಕೋಟಿ ರೂಪಾಯಿ ಮೌಲ್ಯದ ಹೂಡಿಕೆ ಪ್ರಸ್ತಾವ

ಸಾಲ ಕೊಟ್ಟಿರುವ ಮೊತ್ತ ಪರಿಗಣಿಸಿ ದಂಡ ಅಥವಾ ದಂಡನೆ ವಿಧಿಸಿಲ್ಲ. ಸಾಲ ವಸೂಲಾತಿ ಪ್ರಕ್ರಿಯೆ ಸಂದರ್ಭದಲ್ಲಿ ಕಿರುಕುಳ/ಒತ್ತಡ ತಂತ್ರ, ಹಿಂಸೆ, ಕಿರುಕುಳ ನೀಡುವ ಮೂಲಕ ವಸೂಲಾತಿಯ ಕ್ರಮಗಳಿಗೆ ದಂಡ ಮತ್ತು ದಂಡನೆಯನ್ನು ಪ್ರಸ್ತಾಪಿಸಲಾಗಿದೆ ಎಂದು ಹೇಳಿದ್ದರು.