ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Coldrif cough syrup: ಕಾಫ್‌ ಸಿರಪ್‌ ದುರಂತ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

Dinesh Gundu Rao: ರಾಜ್ಯ ಆರೋಗ್ಯ ಇಲಾಖೆಯಿಂದ ಕಾಫ್‌ ಸಿರಪ್‌ ಬಳಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಬೇರೆ ಬೇರೆ ಕಂಪನಿಗಳ ಎಲ್ಲಾ ಕಾಫ್‌ ಸಿರಪ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕಾಫ್‌ ಸಿರಪ್‌ ದುರಂತ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ

-

Profile Siddalinga Swamy Oct 6, 2025 1:57 PM

ಹಾಸನ: ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಪ್‌ ದುರಂತ (Cough Syrup Tragedy) ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ. ಹಾಸನದ ಚನ್ನರಾಯಪಟ್ಟಣದಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕಳಪೆ ಕಾಫ್ ಸಿರಪ್‌ ಕರ್ನಾಟಕ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ಮುನ್ನೆಚ್ವರಿಕೆ ಕ್ರಮವಾಗಿ ಎಲ್ಲಾ ಕಂಪನಿಗಳ ಕಾಫ್‌ ಸಿರಪ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯದಲ್ಲಿಯ ಕಾಫ್‌ ಸಿರಪ್‌ಗಳ ಟೆಸ್ಟ್‌ಗೆ ಇಲಾಖೆ ಮುಂಜಾಗ್ರತ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಈ ಮೊದಲಿನಿಂದಲು ಔಷಧ ನಿಯಂತ್ರಣ ಇಲಾಖೆ ಎಚ್ಚರಿಕೆ ವಹಿಸಿದೆ. ಹೆಚ್ಚಿನ ಔಷಧಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದು, ಇದರಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.

ರಾಜ್ಯ ಆರೋಗ್ಯ ಇಲಾಖೆಯಿಂದ ಕಾಫ್‌ ಸಿರಪ್‌ ಬಳಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಬೇರೆ ಬೇರೆ ಕಂಪನಿಗಳ ಎಲ್ಲಾ ಕಾಫ್‌ ಸಿರಪ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಕರ್ನಾಟಕದಲ್ಲಿ ಸರಬರಾಜು ಆಗಿಲ್ಲ

ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಕಾಫ್‌ ಸಿರಪ್‌ ಕರ್ನಾಟಕದಲ್ಲಿ ಸರಬರಾಜು ಆಗಿಲ್ಲ. ಹಾಗಾಗಿ ಇಲ್ಲಿ ಯಾವುದೇ ಅನಾಹುತ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು, ಔಷಧ ತಯಾರಿಕಾ ಘಟಕಗಳ ಬೇಜವಾಬ್ದಾರಿಯಿಂದಾಗಿ ತಮಿಳುನಾಡು, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ಪುದುಚೆರಿ ಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಿದರು.

ಪೋಷಕರು ಎಚ್ಚರಿಕೆ ವಹಿಸಬೇಕು

ರಾಜ್ಯದಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಯಾವುದೇ ಸಿರಪ್‌ ಕುಡಿಸುವಾಗಲೂ ಪೋಷಕರು ಬಹಳ ಎಚ್ಚರಿಕೆ ವಹಿಸಬೇಕು. ಕಾಫ್‌ ಸಿರಪ್‌ ಸೇವನೆ ಕಡಿಮೆ ಮಾಡಬೇಕು ಎಂದು ಸಲಹೆ ನೀಡಿದರು.‌

ಈ ಸುದ್ದಿಯನ್ನೂ ಓದಿ | CM Siddaramaiah: ಮುಂದಿನ ವರ್ಷ ವಚನ ವಿಶ್ವವಿದ್ಯಾಲಯ ಸ್ಥಾಪನೆ, ʼಬಸವ ಮೆಟ್ರೋʼ ಹೆಸರಿಗೆ ಶಿಫಾರಸು: ಸಿಎಂ ಸಿದ್ದರಾಮಯ್ಯ

ಕೇಂದ್ರಕ್ಕೆ ಪತ್ರ ಬರೆದಿದ್ದೆ

ಕೆಲ ಔಷಧಗಳ ಕಲಬೆರಕೆ, ನಕಲಿ ಔಷಧ ಮತ್ತು ತಪಾಸಣೆ ಕುರಿತಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಯಾವುದೇ ಡ್ರಗ್ಸ್‌ ಕಲಬೆರಕೆ ಎಂದು ಗೊತ್ತಾದಲ್ಲಿ ತ್ವರಿತವಾಗಿ ದೇಶಾದ್ಯಂತ ಮಾಹಿತಿ ರವಾನೆ-ವಿನಿಮಯಕ್ಕೆ ಪ್ರತ್ಯೇಕ ʼವೆಬ್‌ಸೈಟ್‌ʼ ರಚಿಸುವಂತೆ ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದಿದ್ದೆ. ಔಷಧಗಳ ಕಲಬೆರಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತರುವ ಅವಶ್ಯಕತೆ ಇದೆ. ಅಲ್ಲದೇ ರಾಜ್ಯ ರಾಜ್ಯಗಳ ನಡುವೆ ಮಾಹಿತಿ ಸಿಗುವಂತಹ ವ್ಯವಸ್ಥೆ ಜಾರಿಗೆ ತರುವತ್ತ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಇದೇ ವೇಳೆ ಹೇಳಿದರು.