ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆ (Ganesha visarjan) ಮೆರವಣಿಗೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ (Hassan tragedy) ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು (Krishna Byregowda) ನೀಡಿದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ತೀವ್ರ ನಿಗಾ ವಹಿಸಿದ್ದಾರೆ. ಮೃತರ ಕುಟುಂಬಗಳ ಜೊತೆ ಸತತ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮೃತರ ಮರಣೋತ್ತರ ಪರೀಕ್ಷೆ ರಾತ್ರಿಯೇ ನಡೆಯಲು ಬೇಕಾದ ಅಗತ್ಯ ಕ್ರಮ ಕೈಗೊಂಡರು. ವೈದ್ಯರ ತಂಡ ಬೆಳಗಾಗುವವರೆಗೂ ಕಾಯದೇ ರಾತ್ರಿಯೇ ಮರಣೋತ್ತರ ಪರೀಕ್ಷೆ ಮತ್ತು ಕಾನೂನು ಪ್ರಕ್ರಿಯೆ ಮುಗಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದೆ.
ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಜಿಲ್ಲಾ ವೈದ್ಯಾಧಿಕಾರಿಗಳೇ ಉಸ್ತುವಾರಿ ವಹಿಸಿದ್ದು, ಅಗತ್ಯ ವೈದ್ಯರ ತಂಡವನ್ನು ರಚಿಸಿದ್ದಾರೆ. ಅಗತ್ಯವಾದ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಯವರ ಜೊತೆ ನಿರಂತರ ಸಂಪರ್ಕದಲ್ಲಿರುವ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದು, ಮೃತರ ಕುಟುಂಬದವರ ಜೊತೆಗೂ ಮಾತನಾಡುತ್ತಿದ್ದಾರೆ.
ದುರಂತದಲ್ಲಿ ಮೃತರ ಸಂಖ್ಯೆ 9ಕ್ಕೇರಿದ್ದು, ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರದ ಹಣವನ್ನು ನಿನ್ನೆಯೇ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಘಟನೆಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ 50,000 ರೂ ಘೋಷಿಸಿದ್ದಾರೆ.
ಇದನ್ನೂ ಓದಿ: Hassan Tragedy: ಹಾಸನ ದುರಂತಕ್ಕೆ ಸಿಎಂ ಸಂತಾಪ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ