ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ (Hasanamba Jatra Mahotsava 2026) ಗುರುವಾರ ಚಾಲನೆ ದೊರೆಯಿತು. ಆಶ್ವಯುಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12:28ಕ್ಕೆ ಅರಸು ವಂಶಸ್ಥ ನಂಜರಾಜೆ ಅರಸ್ ಸಂಪ್ರದಾಯದಂತೆ ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಹಲವು ಗಣ್ಯರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲನ್ನು ತೆರೆಯಲಾಯಿತು.
ಹಾಸನಾಂಬ ಗರ್ಭಗುಡಿ ಬಾಗಿಲು ತೆರೆದ ವೇಳೆ ನಂದಾದೀಪ ಉರಿಯುತ್ತಿತ್ತು. ಹೂವುಗಳು ಬಾಡಿರಲಿಲ್ಲ. ಅಲ್ಲದೇ ನೈವೇದ್ಯ ಹಳಸದೇ ಹಾಗೆ ಇತ್ತು. ಈ ಪವಾಡಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಬಳಿಕ ದೇವಾಲಯದಲ್ಲಿ 20 ಅರ್ಚಕರ ತಂಡದಿಂದ ವಿಶೇಷ ಪೂಜೆ ನೆರವೇರಿತು.
ಗರ್ಭಗುಡಿ ಬಾಗಿಲು ತೆರೆಯುವ ವೇಳೆ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರಿನ ಸಿದ್ದಲಿಂಗಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ, ಮುಜರಾಯಿ ಖಾತೆ ಸಚಿವ ಬಸಂತಪ್ಪ, ಜಿಲ್ಲಾಧಿಕಾರಿ ಲತಾಕುಮಾರಿ ಸೇರಿದಂತೆ ಅಧಿಕಾರಿಗಳು ಹಾಗೂ ಗಣ್ಯರು ಇದ್ದರು.
ಹಾಸನಾಂಬ ದೇವಿಯ ದೇವಾಲಯದ ಬಾಗಿಲನ್ನು ಇಂದು (ಅ.29) ರಂದು ತೆರೆದಿದ್ದು, ನವೆಂಬರ್ 11 ರಂದು ಬಾಗಿಲು ಮುಚ್ಚಲಾಗುವುದು. ಸಾರ್ವಜನಿಕರಿಗೆ ಮೊದಲ ದಿನ ಮತ್ತು ಕೊನೆಯ ದಿನ ದೇವಿ ದರ್ಶನಕ್ಕೆ ಅವಕಾಶ ಇರುವುದಿಲ್ಲ. ನಾಳೆ ಬೆಳಿಗ್ಗೆ 6 ಗಂಟೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ದರ್ಶನಕ್ಕೆ ಅವಕಾಶವಿರುತ್ತದೆ.