ಹಾವೇರಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯ(Karnataka Folklore University)ದಲ್ಲಿ 2018–19ನೇ ಸಾಲಿನಿಂದ ಆರಂಭಿಸಲಾಗಿದ್ದ ಎಂಟು ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಸರ್ಕಾರ ಹಾಗೂ ರಾಜ್ಯಪಾಲರ ಅನುಮೋದನೆ ಇಲ್ಲದಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಆ ಕೋರ್ಸ್‌ಗಳನ್ನು ರದ್ದುಪಡಿಸಿದೆ.
ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾಗಿದ್ದ ಎಂಟು ಸ್ನಾತಕೋತ್ತರ ಕೋರ್ಸ್‌ಗಳಿಗೆ ವಿದ್ಯಾರ್ಥಿ ಗಳನ್ನು ಪ್ರವೇಶ ಮಾಡಿಸಿಕೊಂಡು ಹಲವು ವರ್ಷಗಳಿಂದ ತರಗತಿಗಳನ್ನು ನಡೆಸಲಾಗುತ್ತಿತ್ತು. ಆದರೆ, ಈ ಕೋರ್ಸ್‌ಗಳಿಗೆ ಅಗತ್ಯವಾದ ಸರ್ಕಾರದ ಅನುಮೋದನೆ ಪಡೆಯದಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
ಉನ್ನತ ಶಿಕ್ಷಣ ಇಲಾಖೆ ಆದೇಶದ ಹಿನ್ನೆಲೆಯಲ್ಲಿ 25ಕ್ಕೂ ಹೆಚ್ಚು ಬೋಧಕರ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಹಲವು ವರ್ಷ ಗಳಿಂದ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಏಕಾಏಕಿ ಕೋರ್ಸ್‌ಗಳನ್ನು ರದ್ದುಪಡಿಸಿರುವುದು ಆಘಾತ ತಂದಿದೆ.
ಸರ್ಕಾರದ ಸ್ಪಷ್ಟನೆ ಅಗತ್ಯ
ವಿಶ್ವವಿದ್ಯಾಲಯದಲ್ಲಿ ಅನುಮೋದನೆ ಇಲ್ಲದ ಕೋರ್ಸ್‌ಗಳನ್ನು ಆರಂಭಿಸಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದ ವಿಚಾರದಲ್ಲಿ ಆಡಳಿತ ಮಂಡಳಿಯ ಹೊಣೆಗಾರಿಕೆ ಏನು ಎಂಬ ಪ್ರಶ್ನೆ ಎದುರಾ ಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಧಕ್ಕೆಯಾಗದಂತೆ ಸರ್ಕಾರ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
ಕೋರ್ಸ್‌ಗಳಿಗೆ ಅನುಮೋದನೆ ಇಲ್ಲದಿದ್ದರೆ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದ್ದು ಏಕೆ? ಹಲವು ವರ್ಷಗಳ ನಂತರ ಏಕಾಏಕಿ ಕೋರ್ಸ್‌ಗಳನ್ನು ರದ್ದುಪಡಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದ್ದು ಯಾರು? ಎಂಬ ಪ್ರಶ್ನೆಗಳು ಈಗ ಮುನ್ನೆಲೆಗೆ ಬಂದಿವೆ.
ವಿದ್ಯಾರ್ಥಿಗಳ ಹಿತ ಕಾಪಾಡಲು ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ, ವ್ಯಾಸಂಗ ಪೂರ್ಣಗೊಳಿಸಲು ಅವಕಾಶ ಕಲ್ಪಿಸಬೇಕು ಎಂಬುದು ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಾಯವಾಗಿದೆ.