ಹಾವೇರಿ, ನ.18: ಜಿಲ್ಲೆಯ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿರುವ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕಬ್ಬಿಗೆ ಪ್ರತಿ ಟನ್‌ಗೆ 3,600 ರೂ. ದರವನ್ನು ತಕ್ಷಣವೇ ನಿಗದಿಪಡಿಸಬೇಕು ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಚುನ್ನಪ್ಪ ಪೂಜಾರಿ ಆಗ್ರಹಿಸಿದರು.
ಕಬ್ಬಿನ ದರ ನಿಗದಿಯಾಗದ ಹಿನ್ನೆಲೆಯಲ್ಲಿ ಬುಧವಾರ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ರೈತರು ಸಿದ್ಧತೆ ನಡೆಸಿದ್ದರು. ಆದರೆ, ಪ್ರತಿಭಟನೆ ತಡೆಯುವ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಮಂಗಳವಾರವೇ ನಿಷೇಧಾಜ್ಞೆ ಜಾರಿಗೊಳಿಸಿ, ಸಚಿವರ ನಿವಾಸದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು. ಇದರಿಂದ ಆಕ್ರೋಶಗೊಂಡ ರೈತರು ಬಂಕಾಪುರ ಟೋಲ್‌ಗೇಟ್ ಬಂದ್ ಮಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಚುನ್ನಪ್ಪ ಪೂಜಾರಿ, ಹಾವೇರಿ ಜಿಲ್ಲೆಯವರೇ ಆಗಿರುವ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರು ರೈತರ ಸಮಸ್ಯೆ ಬಗೆಹರಿಸಲು ಅಸಮರ್ಥರಾಗಿದ್ದಾರೆ. ರೈತರಿಗೆ ನ್ಯಾಯ ಕೊಡಿಸಲು ಸಾಧ್ಯವಾಗದಿದ್ದರೆ ಸಚಿವ ಸ್ಥಾನದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ. ತಕ್ಷಣ ರಾಜೀನಾಮೆ ನೀಡಿ ಮಾಜಿ ಸಚಿವ ಶಿವಾನಂದ ಪಾಟೀಲರಿಗೆ ಅವಕಾಶ ಮಾಡಿಕೊಡಲಿ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಕಬ್ಬು ಒಣಗುವುದನ್ನು ತಪ್ಪಿಸುವ ಉದ್ದೇಶದಿಂದ ತಾತ್ಕಾಲಿಕವಾಗಿ ಜಿ.ಎಂ. ಸಿದ್ದೇಶ್ವರ ಮತ್ತು ಹೆಬ್ಬಾರ ಅವರ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಲಾಗಿದೆ. ಆದರೆ, ಇದು ರೈತರ ಮೂಲ ಸಮಸ್ಯೆಗೆ ಪರಿಹಾರವಲ್ಲ. ಕಬ್ಬಿಗೆ ನ್ಯಾಯಯುತ ದರ ನಿಗದಿಪಡಿಸುವ ಮೂಲಕ ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸಬೇಕು. ₹3,600 ದರ ನಿಗದಿಯಾಗುವವರೆಗೂ ರೈತರ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಶೋಕ ಮರ್ಚರೆಡ್ಡಿ, ಹನುಮಂತಪ್ಪ ಪೂಜಾರಿ, ಸಂಗೂರು ಕಾರ್ಖಾನೆ ಅಧ್ಯಕ್ಷ ಭುವನೇಶ್ವರ ಶಿಡ್ಲಾಪುರ, ಮಾಲತೇಶ ಪೂಜಾರಿ, ಹನುಮಂತಪ್ಪ ಕಬ್ಬಾರ, ಮಲ್ಲಿಕಾರ್ಜುನ ಬಳ್ಳಾರಿ ಬಾಗವಹಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಈ ವೇಳೆ ನೂರಾರು ರೈತರು ಪಾಲ್ಗೊಂಡಿದ್ದರು.