ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಹಾವೇರಿ ಅನ್ನದಾತರಿಗೆ‌ ಕೊಂಚ ರಿಲೀಫ್; ಬರಪೀಡಿತ ಜಿಲ್ಲೆಯಾಗಿ ಘೋಷಣೆ: ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ರುದ್ರಪ್ಪ ಲಮಾಣಿ

Haveri News: ಹಾವೇರಿ ಜಿಲ್ಲೆಯನ್ನು ಅಧಿಕೃತವಾಗಿ ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಜಿಲ್ಲೆಯ ರೈತರ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಸಕ್ಕರೆ ಮತ್ತು ಜವಳಿ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.

ಸಚಿವ ರುದ್ರಪ್ಪ ಲಮಾಣಿ (ಸಂಗ್ರಹ ಚಿತ್ರ)

ಹಾವೇರಿ, ಸೆ. 17: ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಿಲ್ಲೆಯಾದ್ಯಂತ ಬೆಳೆಗಳು ಒಣಗಿ ಕಂಗಾಲಾಗಿದ್ದ ಅನ್ನದಾತರ ನೋವಿಗೆ ಸ್ಪಂದಿಸಿ, ಹಾವೇರಿ ಜಿಲ್ಲೆಯನ್ನು ಅಧಿಕೃತವಾಗಿ ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ರೈತರ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಸಕ್ಕರೆ ಮತ್ತು ಜವಳಿ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ (Rudrappa Lamani) ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾನಗಲ್ಲ, ಶಿಗ್ಗಾಂವ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಹಾಗೂ ಹಾವೇರಿ ರಾಣೇಬೆನ್ನೂರ, ಸವಣೂರು ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿದೆ. ಹಲವು ದಿನಗಳಿಂದ ಜಿಲ್ಲೆಯಾದ್ಯಂತ ಮಳೆಯಿಲ್ಲದೆ ಕೃಷಿ ಚಟುವಟಿಕೆಗಳು ಸಂಪೂರ್ಣ ಕುಸಿದುಬಿದ್ದಿದ್ದವು. ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಹತ್ತಿ, ಮೆಕ್ಕೆಜೋಳ, ಬ್ಯಾಡಗಿ ಮೆಣಸಿನಕಾಯಿ ಹಾಗೂ ಶೇಂಗಾ ಬೆಳೆಗಳು ಮಳೆಯಿಲ್ಲದೆ ನೆಲಕಚ್ಚಿದ್ದರಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ರೈತರು ಜಿಲ್ಲೆಯನ್ನು ತಕ್ಷಣ ಬರಪೀಡಿತ ಎಂದು ಘೋಷಿಸುವಂತೆ ನಿರಂತರವಾಗಿ ಮನವಿ ಮಾಡುತ್ತಿದ್ದರು.

ʼʼರೈತರ ಸಂಕಷ್ಟಕ್ಕೆ ತಕ್ಷಣ ಧಾವಿಸಿ, ನಾನೇ ಖುದ್ದು ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮಗಳಿಗೆ ಭೇಟಿ ನೀಡಿ ಹೊಲ-ಗದ್ದೆಗಳಲ್ಲಿ ಒಣಗಿದ ಬೆಳೆಗಳ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದ್ದೆ. ಬಳಿಕ ವಸ್ತುಸ್ಥಿತಿಯ ಸಮಗ್ರ ವಿವರವನ್ನು ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ಗಮನಕ್ಕೆ ತಂದು, ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಹಾವೇರಿಯನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸಲು ನಿರಂತರವಾಗಿ ಒತ್ತಡ ತಂದು ಸತತ ಪ್ರಯತ್ನ ನಡೆಸಲಾಗಿತ್ತುʼʼ ಎಂದಿದ್ದಾರೆ.

ಕಲಬುರಗಿಗೆ ಐಟಿ ಪಾರ್ಕ್, 50 ಸಾವಿರ ನಿವೇಶನ

ʼʼನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳು ಇಂದು ಹಾವೇರಿ ಜಿಲ್ಲೆಯನ್ನು ಅಧಿಕೃತವಾಗಿ ಬರಪೀಡಿತ ಎಂದು ಘೋಷಿಸಿ ರೈತರ ಕೈಹಿಡಿದಿದ್ದಾರೆ. ಸರ್ಕಾರದ ಈ ನಿರ್ಧಾರದಿಂದಾಗಿ ಜಿಲ್ಲೆಯ ರೈತರಿಗೆ ಬರ ಪರಿಹಾರ, ಬೆಳೆ ನಷ್ಟ ಪರಿಹಾರ (ಇನ್ಪುಟ್ ಸಬ್ಸಿಡಿ), ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಹಾಗೂ ಉದ್ಯೋಗ ಖಾತರಿ ಯೋಜನೆಗಳು ಶೀಘ್ರವಾಗಿ ತಲುಪಲು ಅನುಕೂಲವಾಗಲಿದೆʼʼ ಎಂದು ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.