ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಹಾವೇರಿಯಲ್ಲಿ ನ.27ರಂದು ಕನಕದಾಸರ 539ನೇ ಜಯಂತಿ; ಕಾಗಿನೆಲೆ ಕ್ರಾಸ್‌ನಲ್ಲಿ 8.5 ಅಡಿ ಎತ್ತರದ ಕನಕದಾಸರ ಕಂಚಿನ ಮೂರ್ತಿ ಸಿಎಂರಿಂದ ಅನಾವರಣ

Haveri News: ಹಾವೇರಿಯಲ್ಲಿ ನ.27ರಂದು ಆಯೋಜಿಸಿರುವ ಸಂತ ಕನಕದಾಸರ 539ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದು, ಕಾಗಿನೆಲೆ ಕ್ರಾಸ್‌ನಲ್ಲಿ 8.5 ಅಡಿ ಎತ್ತರದ ಕನಕದಾಸರ ಕಂಚಿನ ಮೂರ್ತಿಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ತಿಳಿಸಿದ್ದಾರೆ.

ಹಾವೇರಿ, ನ.25: ಸಂತ ಕನಕದಾಸರ 539ನೇ ಜಯಂತಿ ಅಂಗವಾಗಿ ನ.27ರಂದು ಹಾವೇರಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದು, ಕಾಗಿನೆಲೆ ಕ್ರಾಸ್‌ನಲ್ಲಿ 8.5 ಅಡಿ ಎತ್ತರದ ಕನಕದಾಸರ ಕಂಚಿನ ಮೂರ್ತಿಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ತಿಳಿಸಿದರು.

ನಗರದ ಜಿಲ್ಲಾ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ₹10ರಿಂದ ₹11 ಲಕ್ಷ ವೆಚ್ಚದಲ್ಲಿ ಮೂರ್ತಿ ನಿರ್ಮಿಸಲಾಗಿದೆ. ನ.26ರಂದು ರೊಟ್ಟಿ ಜಾತ್ರೆ ಆಯೋಜಿಸಲಾಗಿದ್ದು, 6 ಲಕ್ಷಕ್ಕೂ ಅಧಿಕ ರೊಟ್ಟಿಗಳನ್ನು ಸಂಗ್ರಹಿಸುವ ಗುರಿ ಹೊಂದಲಾಗಿದೆ. ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಸಾರ್ವಜನಿಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದರು.

ಕಾಗಿನೆಲೆ ಅಭಿವೃದ್ಧಿಗೆ 34 ಕೋಟಿ ರೂ. ಅನುದಾನ

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ 2025-26ನೇ ಸಾಲಿನ ಬಜೆಟ್‌ನಲ್ಲಿ ಸುಮಾರು 34 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈಗಾಗಲೇ ಕ್ರಿಯಾಯೋಜನೆ ರೂಪಿಸಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಅನುಮೋದನೆ ಪಡೆಯಲಾಗಿದೆ. ಕಾಗಿನೆಲೆಯ ಉದ್ಯಾನವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವಂತೆ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.

ಸ್ವಾಮೀಜಿಗಳ ನೇತೃತ್ವದಲ್ಲಿ ಕಳೆದ ಹತ್ತು ದಿನಗಳಿಂದ ವಿವಿಧ ಗ್ರಾಮಗಳಲ್ಲಿ ವ್ಯಸನಮುಕ್ತ ಜಾಗೃತಿ ಅಭಿಯಾನ ನಡೆಸಲಾಗಿದೆ. ಮದ್ಯಪಾನ, ತಂಬಾಕು, ಗುಟ್ಕಾ ಸೇರಿದಂತೆ ದುಶ್ಚಟಗಳನ್ನು ತ್ಯಜಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ದುಶ್ಚಟಗಳ ವಸ್ತುಗಳನ್ನು 'ರೇವಣಸಿದ್ದೇಶ್ವರ ಜೋಳಿಗೆ' ಗೆ ಹಾಕುವ ಮೂಲಕ ಜನರು ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ನ.25ರಂದು ಎತ್ತಿನಹಳ್ಳಿ ಗ್ರಾಮದಲ್ಲಿ ಅಭಿಯಾನ ಮುಕ್ತಾಯಗೊಳ್ಳಲಿದೆ ಎಂದರು.

ನ.27ರಂದು ಬೆಳಿಗ್ಗೆ 11 ಗಂಟೆಗೆ ಕೆಎಲ್‌ಇ ಮೈದಾನದ ಹೆಲಿಪ್ಯಾಡ್‌ಗೆ ಆಗಮಿಸಲಿರುವ ಮುಖ್ಯಮಂತ್ರಿ, 11.15ರಿಂದ 11.30ರ ಸುಮಾರಿಗೆ ಕಾಗಿನೆಲೆ ಕ್ರಾಸ್‌ನಲ್ಲಿ ಕನಕದಾಸರ ಮೂರ್ತಿ ಅನಾವರಣಗೊಳಿಸಲಿದ್ದಾರೆ. ನಂತರ ಕಾಗಿನೆಲೆಗೆ ತೆರಳಿ ಮಠದ ಆವರಣದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ 2.30ರಿಂದ 3 ಗಂಟೆಯೊಳಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಅವರು ವಿವರಿಸಿದರು. ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಯಂತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.