ಹಾವೇರಿ, ನ.04: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಹಾಗೂ ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸಜ್ಜುಗೊಳಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸಂಘಟನಾ ಸೃಜನಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಹಾವೇರಿ ಜಿಲ್ಲೆಯ (Haveri News) 12 ಬ್ಲಾಕ್ಗಳಲ್ಲಿ ಸಭೆ ನಡೆಸಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ನೂತನ ಪದಾಧಿಕಾರಿಗಳ ಆಯ್ಕೆಗೆ ಕೆಪಿಸಿಸಿಗೆ ಶಿಫಾರಸು ಮಾಡಲಾಗುವುದು ಎಂದು ಜಿಲ್ಲಾ ವೀಕ್ಷಕ ಬಿ. ಮಂಜುನಾಥ ತಿಳಿಸಿದರು.
ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಮತ್ತು ಕೆಪಿಸಿಸಿ ನಿರ್ಣಯದಂತೆ ಪ್ರತಿ ಜಿಲ್ಲೆಯಲ್ಲಿ ವೀಕ್ಷಕರು ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಬ್ಲಾಕ್ ಅಧ್ಯಕ್ಷರ ಆಯ್ಕೆಯಲ್ಲಿ ಶಾಸಕರು, ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಅಭಿಪ್ರಾಯಕ್ಕೆ ಆದ್ಯತೆ ನೀಡಲಾಗುವುದು. ಪ್ರತಿ ಬ್ಲಾಕ್ನಿಂದ 3ರಿಂದ 5 ಆಕಾಂಕ್ಷಿಗಳ ಹೆಸರನ್ನು ಶಿಫಾರಸು ಮಾಡಲಾಗುತ್ತದೆ. ಪಕ್ಷದಲ್ಲಿ ಹೊಸಬರಿಗೆ ಅವಕಾಶ ಕಲ್ಪಿಸುವುದರ ಜತೆಗೆ ಕಾರ್ಯಕರ್ತರನ್ನು ಹುರಿದುಂಬಿಸಿ ಸಂಘಟನೆ ಬಲಪಡಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದರು.
ಕೆಪಿಸಿಸಿ ಕಾರ್ಯದರ್ಶಿ ಹಾಗೂ ಜಿಲ್ಲಾ ವೀಕ್ಷಕ ಡಿ. ಬಸವರಾಜ ಮಾತನಾಡಿ, ರಾಜ್ಯದ 450 ಬ್ಲಾಕ್ ಕಾಂಗ್ರೆಸ್ ಘಟಕಗಳಲ್ಲಿ ಹಲವು ವರ್ಷಗಳಿಂದ ಬದಲಾವಣೆ ಆಗಿಲ್ಲ. ಸಂಘಟನೆಯ ಎರಡನೇ ಹಂತದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ. 40ರಿಂದ 60 ವರ್ಷದವರಿಗೆ ಆದ್ಯತೆ ನೀಡಲಾಗುವುದು. ಐವರು ಸದಸ್ಯರ ತಂಡದಲ್ಲಿ ಒಬ್ಬ ಮಹಿಳೆಗೆ ಕಡ್ಡಾಯವಾಗಿ ಅವಕಾಶ ನೀಡುವುದರ ಜತೆಗೆ ಎಲ್ಲ ಸಮುದಾಯಗಳಿಗೂ ಪ್ರಾತಿನಿಧ್ಯ ಕಲ್ಪಿಸಲಾಗುವುದು. ಹಾವೇರಿ ಜಿಲ್ಲೆಯ 12 ಬ್ಲಾಕ್ಗಳಲ್ಲಿ ಸಭೆ ನಡೆಸಿ ಅರ್ಜಿಗಳನ್ನು ಪಡೆದು ಕೆಪಿಸಿಸಿಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ನಾಳೆ ಹಾವೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ಆಡಳಿತ ನೀತಿಗಳ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ. ನಾಳೆ ಹಾವೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಿಜೆಪಿಯ ಪ್ರಜಾಪ್ರಭುತ್ವ ಉಳಿಸಿ ಅಭಿಯಾನ ಹಾಸ್ಯಾಸ್ಪದವಾಗಿದ್ದು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಬಿಜೆಪಿಗೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೆಪಿಸಿಸಿ ವೀಕ್ಷಕರಾದ ಪುಷ್ಪಾ ನಾಯಕ, ಟಿ.ಎಂ. ಶಾಹೀದ್, ಮಾಜಿ ಜಿಪಂ ಅಧ್ಯಕ್ಷ ಕೋಟ್ರೇಶಪ್ಪ ಬಸೇಗಣ್ಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುಡ್ಡನಗೌಡ ಅಂದಾನಿಗೌಡ್ರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ಎಂ.ಎಂ. ಮೈದೂರ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.