ಹಾವೇರಿ, ನ.07: ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವಾ ಆಂದೋಲನ ಜಾರಿಗೆ ತಂದಿದೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಮಾನವೀಯತೆಯಿಂದ ಸ್ಪಂದಿಸಿ, ತ್ವರಿತ ಪರಿಹಾರ ಒದಗಿಸಬೇಕು ಎಂದು ಸಕ್ಕರೆ ಮತ್ತು ಜವಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಸೂಚಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ (Haveri News) ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಆಡಳಿತದ ಸಹಯೋಗದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈಗಾಗಲೇ ಸುಮಾರು 1,500 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 1,200 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಬಾಕಿ ಇರುವ 300 ಅರ್ಜಿಗಳನ್ನು ಶೀಘ್ರ ಇತ್ಯರ್ಥಪಡಿಸಬೇಕು. ಯಾವುದೇ ಅರ್ಜಿಯನ್ನು ಕಾರಣವಿಲ್ಲದೆ ಬಾಕಿ ಉಳಿಸಿಕೊಳ್ಳಬಾರದು. ಪರಿಹಾರ ಸಾಧ್ಯವಾಗದಿದ್ದರೆ ಸೂಕ್ತ ಕಾರಣ ತಿಳಿಸಿ, ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಬೇಕು ಎಂದರು.
ಶಾಸಕ ಹಾಗೂ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ಮಾತನಾಡಿ, ಜನರ ಅಹವಾಲುಗಳನ್ನು ಮಾನವೀಯ ದೃಷ್ಟಿಯಿಂದ ಆಲಿಸಿ, ಸೌಜನ್ಯದಿಂದ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ. ಸಾಮಾನ್ಯ ಜನರ ಸಮಸ್ಯೆಗಳಿಗೂ ಆದ್ಯತೆ ನೀಡಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಪ್ರತಿ ಶನಿವಾರ ಪ್ರಜಾಸೇವಾ ಆಂದೋಲನ ಆಯೋಜಿಸಲಾಗುತ್ತಿದ್ದು, ಬಾಕಿ ಅರ್ಜಿಗಳ ವಿಲೇವಾರಿಗೆ ಪ್ರತಿ ಬುಧವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗುತ್ತಿದೆ ಎಂದರು.
ಮೂಲಸೌಕರ್ಯ ಸಮಸ್ಯೆಗಳ ಅಹವಾಲು
ಕಾರ್ಯಕ್ರಮದಲ್ಲಿ ಸ್ಮಶಾನಕ್ಕೆ ಜಮೀನು ಮತ್ತು ರಸ್ತೆ, ಕುಡಿಯುವ ನೀರು, ರಸ್ತೆ, ಚರಂಡಿ, ಸಾರಿಗೆ, ವಸತಿ, ಜೆಜೆಎಂ ಕಾಮಗಾರಿ, ಕೂಲಿ ಹಣ ಪಾವತಿ, ಆಸ್ಪತ್ರೆ ಹಾಗೂ ಹಾಸ್ಟೆಲ್ ಸೌಲಭ್ಯ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸಾರ್ವಜನಿಕರು ಮನವಿ ಸಲ್ಲಿಸಿದರು. ಗೃಹಲಕ್ಷ್ಮಿ ಹಣ ಜಮೆ, ಕಾರ್ಮಿಕ ಕಾರ್ಡ್ ರದ್ದು, ಮದುವೆ ಸಹಾಯಧನ ವಿಳಂಬದ ಬಗ್ಗೆಯೂ ದೂರು ನೀಡಿದರು.
ಹಾವೇರಿ ನಗರದ 45 ಬಡಾವಣೆಗಳಿಗೆ ಎನ್ಒಸಿ ನೀಡಿದ್ದರೂ ವಿದ್ಯುತ್, ರಸ್ತೆ ಮತ್ತು ಚರಂಡಿ ಸೌಲಭ್ಯಗಳ ಕೊರತೆಯಿದೆ ಎಂಬ ಅಹವಾಲಿಗೆ ಸ್ಪಂದಿಸಿದ ಸಚಿವರು, ನೀರಿನ ಸೌಲಭ್ಯ ಕಲ್ಪಿಸಲು ಸರ್ಕಾರದಿಂದ ₹11.80 ಕೋಟಿ ಮಂಜೂರಾಗಿದ್ದು, ಕೆ.ಯು.ಐ.ಡಿ.ಎಫ್.ಸಿ. ಮೂಲಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಸ್ಮಶಾನ ಭೂಮಿ ಹಾಗೂ ಹಕ್ಕುಪತ್ರ, ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಶಿವರಾಜ ಅರಳಿ ಅವರ ʼಕಣ್ಣ ಬಾನಲ್ಲಿ ಬೆಂಕಿಯ ಚಿತ್ರʼ ಕೃತಿಗೆ ಜನ್ನಾ-ಸನದಿ ಸಾಹಿತ್ಯ ಪ್ರಶಸ್ತಿ
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ 15 ಮಳಿಗೆಗಳನ್ನು ಸ್ಥಾಪಿಸಿ ಅರ್ಜಿ ಸ್ವೀಕರಿಸಲಾಯಿತು. ಫಲಾನುಭವಿಗಳಿಗೆ ಜಾಬ್ ಕಾರ್ಡ್ ಹಾಗೂ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಿಸಲಾಯಿತು. ಹಲವು ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.