ಹಾವೇರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ನೀಡಿ: ಜಿಲ್ಲಾ ಉಪಾಧ್ಯಕ್ಷ ಬಸವರಾಜ ಹೆಡಿಗ್ಗೊಂಡ ಮನವಿ
Haveri News: ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನವನ್ನು ಈ ಬಾರಿ ಎಸ್.ಸಿ, ಎಸ್.ಟಿ ಸಮುದಾಯಕ್ಕೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಸವರಾಜ ಹೆಡಿಗ್ಗೊಂಡ ಅವರು, ಹಾವೇರಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ, ಮಾಜಿ ಶಾಸಕ ಶೇಖ್ ಮುಸ್ತಾನವಲಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಮಾಜಿ ಶಾಸಕ ಶೇಖ್ ಮುಸ್ತಾನವಲಿಗೆ ಬಸವರಾಜ ಹೆಡಿಗ್ಗೊಂಡ ಮನವಿ ಪತ್ರ ಸಲ್ಲಿಕೆ. -
ಬ್ಯಾಡಗಿ, ಜು.28: ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನವನ್ನು ಈ ಬಾರಿ ಎಸ್.ಸಿ, ಎಸ್.ಟಿ ಸಮುದಾಯಕ್ಕೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಸವರಾಜ ಹೆಡಿಗ್ಗೊಂಡ ಅವರು ಪಕ್ಷದ ಹೈಕಮಾಂಡ್‌ಗೆ ಮನವಿ ಸಲ್ಲಿಸಿದ್ದಾರೆ. ಬ್ಯಾಡಗಿಯಲ್ಲಿ ನಡೆದ ಸಂಘಟನಾ ಸೃಜನ್ ಅಭಿಯಾನ ಕಾರ್ಯಕ್ರಮದಲ್ಲಿ ಹಾವೇರಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ, ಮಾಜಿ ಶಾಸಕ ಶೇಖ್ ಮುಸ್ತಾನವಲಿ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.
ಹಾವೇರಿ ಜಿಲ್ಲೆಯಲ್ಲಿ (Haveri News) ಕಾಂಗ್ರೆಸ್ ಪಕ್ಷವು ಇಲ್ಲಿಯವರೆಗೆ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ಬಾರಿ ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಬೇಕು ಎಂದು ಬಸವರಾಜ ಹೆಡಿಗ್ಗೊಂಡ ಮನವಿ ಮಾಡಿದರು.
ತಾವು ಕಳೆದ ಮೂರು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಪಕ್ಷದ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಪಕ್ಷದ ತಳಮಟ್ಟದ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕ ಹೊಂದಿರುವ ತಮ್ಮನ್ನು ಪರಿಗಣಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಶಿಫಾರಸು ಮಾಡಬೇಕು ಎಂದು ಹಾವೇರಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ, ಮಾಜಿ ಶಾಸಕ ಶೇಖ್ ಮುಸ್ತಾನವಲಿ ಅವರಿಗೆ ಮನವಿ ಮಾಡಿದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸಂಘಟನಾತ್ಮಕವಾಗಿ ಬಲಪಡಿಸಲು ಸಾಮಾಜಿಕ ನ್ಯಾಯದ ಆಶಯದಂತೆ ಎಲ್ಲ ಸಮುದಾಯಗಳಿಗೂ ಸೂಕ್ತ ಪ್ರಾತಿನಿಧ್ಯ ದೊರೆಯಬೇಕಿದೆ. ಈ ನಿಟ್ಟಿನಲ್ಲಿ ಎಸ್‌ಸಿ ಸಮುದಾಯದ ಪಕ್ಷದ ಹಿರಿಯ ಹಾಗೂ ನಿಷ್ಠಾವಂತ ಕಾರ್ಯಕರ್ತರಿಗೆ ಜಿಲ್ಲಾ ಅಧ್ಯಕ್ಷ ಸ್ಥಾನ ನೀಡುವುದರಿಂದ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ಬರಲಿದೆ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಹಾಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಗ್ಯಾರಂಟಿ ಸಮಿತಿ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ್, ಬ್ಯಾಡಗಿ ಬ್ಲಾಕ್ ಅಧ್ಯಕ್ಷ ದಾನಪ್ಪ ಚೂರಿ, ಕಾಗಿನೆಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವನಗೌಡ ಪಾಟೀಲ್, ಕಾಂಗ್ರೆಸ್ ಮುಖಂಡ ಷಣ್ಮುಖ ಶಿವಳ್ಳಿ ಸೇರಿದಂತೆ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.