ಕಬ್ಬು ದರ ನಿಗದಿ ವಿಫಲ; ಹಾವೇರಿಯಲ್ಲಿ ಸಕ್ಕರೆ ಸಚಿವರ ಮನೆ ಮುತ್ತಿಗೆಗೆ ಪೊಲೀಸರ ಬ್ರೇಕ್!
Haveri News: ರೈತರ ಮುತ್ತಿಗೆ ಹೋರಾಟದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾವೇರಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಸಚಿವರ ನಿವಾಸಕ್ಕೆ ತೆರಳುವ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಸಚಿವರ ಮನೆಗೆ ಪ್ರತಿಭಟನಾಕಾರರು ಪ್ರವೇಶಿಸದಂತೆ ಪೊಲೀಸ್ ಇಲಾಖೆಯಿಂದ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ.
-
Siddalinga Swamy
Nov 18, 2026 4:45 PM
ಹಾವೇರಿ, ನ.18: ಕಬ್ಬಿಗೆ ಪ್ರತಿ ಟನ್ಗೆ 3,600 ರೂ. ದರ ನಿಗದಿಪಡಿಸಬೇಕೆಂಬ ರೈತರ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸರ್ಕಾರದ ಗಮನ ಸೆಳೆಯಲು ಹೋರಾಟಗಾರರು ಬುಧವಾರ ಸಕ್ಕರೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರ ಹಾವೇರಿ ತಾಲೂಕಿನ (Haveri News) ಇಜಾರಿ ಲಕ್ಮಾಪುರದಲ್ಲಿರುವ ನಿವಾಸಕ್ಕೆ ಮುತ್ತಿಗೆ ಹಾಕಲು ಕರೆ ನೀಡಿದ್ದರು.
ರೈತರ ಮುತ್ತಿಗೆ ಹೋರಾಟದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಸಚಿವರ ನಿವಾಸಕ್ಕೆ ತೆರಳುವ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಸಚಿವರ ಮನೆಗೆ ಪ್ರತಿಭಟನಾಕಾರರು ಪ್ರವೇಶಿಸದಂತೆ ಪೊಲೀಸ್ ಇಲಾಖೆಯಿಂದ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ.
ಇತ್ತ ರಾಣೇಬೆನ್ನೂರಿನಲ್ಲಿಯೂ ರೈತರು ಸಚಿವರ ನಿವಾಸದತ್ತ ತೆರಳಿ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.