ಹಾವೇರಿ: ಜಿಲ್ಲೆಯಲ್ಲಿ ನಡೆದಿರುವ ವಿಎಒ ಪರೀಕ್ಷೆ ಅಕ್ರಮ ಪ್ರಕರಣಕ್ಕೆ (VAO Exam Scam) ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಡಿ ನಾಲ್ವರು ಪೊಲೀಸ್ ಅಧಿಕಾರಿಗಳು ಹಾಗೂ ಆರು ಹೋಮ್ಗಾರ್ಡ್ಗಳನ್ನು ಅಮಾನತುಗೊಳಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಮಾಹಿತಿ ನೀಡಿದ್ದಾರೆ.
ಪರೀಕ್ಷಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದವರ ವಿರುದ್ಧ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಪರೀಕ್ಷಾ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆ ತರುವ ಯಾವುದೇ ಕೃತ್ಯವನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಜಿಲ್ಲಾಡಳಿತ ನೀಡಿದೆ. ಅಕ್ರಮದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.