ಪ್ರಜ್ವಲ್ ರೇವಣ್ಣ ವಿರುದ್ಧ ನಂಬಲರ್ಹ ಸಾಕ್ಷಿಗಳಿವೆ ಎಂದ ಹೈಕೋರ್ಟ್; ಜಾಮೀನು ಅರ್ಜಿ ವಿಚಾರಣೆ ಏ.15ಕ್ಕೆ ಮುಂದೂಡಿಕೆ
Prajwal Revanna case: ಮೊದಲನೇ ಅತ್ಯಾಚಾರ ಪ್ರಕರಣದಲ್ಲಿ ಎರಡನೇ ಬಾರಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಸೋಮವಾರ ನಡೆದಿದೆ. ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದೆ.


ಬೆಂಗಳೂರು: ಮನೆಗೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ (Prajwal Revanna case) ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು, ಇತರೆ ಆರೋಪಿಗಳ ಮೇಲಿನ ವಿಚಾರಣೆಗೆ ತಡೆ ನೀಡಲಾಗಿದೆ ಎನ್ನುವ ಆಧಾರದಲ್ಲಿ ಜಾಮೀನು ಕೋರಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸೋಮವಾರ ಹೇಳಿದೆ. ಅಲ್ಲದೆ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿದೆ. ಮೊದಲನೇ ಅತ್ಯಾಚಾರ ಪ್ರಕರಣದಲ್ಲಿ ಎರಡನೇ ಬಾರಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕಸದಸ್ಯ ಪೀಠ ನಡೆಸಿತು.
ಪ್ರಜ್ವಲ್ ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು, 2021ರಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು ನಾಲ್ಕೂವರೆ ವರ್ಷಗಳ ಬಳಿಕ ದೂರು ದಾಖಲಿಸಲಾಗಿದೆ. ಇದಕ್ಕೆ ಯಾವುದೇ ವಿವರಣೆ ನೀಡಲಾಗಿಲ್ಲ ಎಂದರು.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮೊದಲ ಬಾರಿ ಪ್ರಜ್ವಲ್ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್‌ನಲ್ಲೂ ತಿರಸ್ಕೃತವಾಗಿತ್ತು. ಆನಂತರ ಯಾವುದೇ ಬದಲಾವಣೆಯಾಗಿಲ್ಲ. ಇತರೆ ಆರೋಪಿಗಳ ವಿರುದ್ಧದ ಪ್ರಕರಣ ತಡೆಯಾಜ್ಞೆಯಾಗಿದೆ. ಪ್ರಜ್ವಲ್ ವಿರುದ್ದ ನಾಲ್ಕು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ ಎಂದರು.
ಆಗ ಪೀಠವು, ಇತರೆ ಆರೋಪಿಗಳ ವಿರುದ್ಧದ ವಿಚಾರಣೆಗೆ ತಡೆಯಾಜ್ಞೆ ಇದ್ದರೂ ಪ್ರಜ್ವಲ್ ವಿರುದ್ಧ ನಂಬಲರ್ಹ ಸಾಕ್ಷಿಗಳಿವೆ. ವಿಶೇಷವಾದ ಕಾರಣ ತೋರದ ಹೊರತು ಜಾಮೀನು ಹೇಗೆ ನೀಡಲು ಸಾಧ್ಯ? ಎಂದಿದೆ. ಅಲ್ಲದೇ, ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ, ವಿಚಾರಣೆಯನ್ನು ನ್ಯಾಯಾಲಯವು ಏಪ್ರಿಲ್ 15ಕ್ಕೆ ಮುಂದೂಡಿತು.
ಈ ಸುದ್ದಿಯನ್ನೂ ಓದಿ | Pourakarmikas: ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್: ಮೇ 1ರಂದು ಪೌರ ಕಾರ್ಮಿಕರ ಸೇವೆ ಕಾಯಂ: ಸಿಎಂ ಘೋಷಣೆ
ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಹೈಕೋರ್ಟ್ ಪ್ರಜ್ವಲ್ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಆನಂತರ ಸುಪ್ರೀಂ ಕೋರ್ಟ್‌ನಲ್ಲಿಯೂ ಪ್ರಜ್ವಲ್ ಅರ್ಜಿ ತಿರಸ್ಕೃತಗೊಂಡಿತ್ತು. ಈಗ ಕಳೆದ ಮಾರ್ಚ್‌ನಲ್ಲಿ ಪ್ರಜ್ವಲ್ ಮತ್ತೆ ಎರಡನೇ ಬಾರಿಗೆ ಜಾಮೀನು ಕೋರಿದ್ದಾರೆ. ಇತ್ತೀಚೆಗಷ್ಟೆ ಮೊದಲ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ರನ್ನು ಆರೋಪ ಮುಕ್ತಗೊಳಿಸಲು ನಿರಾಕರಿಸಿದ್ದ ವಿಚಾರಣಾಧೀನ ನ್ಯಾಯಾಲಯವು, ಆರೋಪ ನಿಗದಿ ಮಾಡಿ ಆದೇಶಿಸಿತ್ತು.