ಸೋನಿಯಾ ಗಾಂಧಿ ಕಾರ್ಯಕ್ರಮದಲ್ಲಿ 5ನೇ ಸಾಲಲ್ಲಿ ಕುಳಿತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
Former CM Siddaramaiah: ನನಗೀಗ 80 ವರ್ಷ ವಯಸ್ಸಾಗಿದೆ, ಅಭಿಮಾನಿಗಳು ಚುನಾವಣೆಯಲ್ಲಿ ಸ್ಪರ್ಧಿಸಿ ಎಂದು ಹೇಳುತ್ತಾರೆ, ಆದರೆ ಹಿಂದಿನಂತೆ ಓಡಾಟ ನಡೆಸುವುದು ಕಷ್ಟವಾಗುತ್ತದೆ ಎನ್ನುವ ಕಾರಣಕ್ಕಾಗಿ ತಾವು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) -
ಮೈಸೂರು, ನ.19: ನನಗೀಗ 80 ವರ್ಷ, ವಯೋಸಹಜ ಕಾರಣದಿಂದಾಗಿ ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Former CM Siddaramaiah) ತಿಳಿಸಿದರು. ಮೈಸೂರಿನಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ತಮಗೀಗ 80 ವರ್ಷ ವಯಸ್ಸಾಗಿದೆ, ಅಭಿಮಾನಿಗಳು ಚುನಾವಣೆಯಲ್ಲಿ ಸ್ಪರ್ಧಿಸಿ ಎಂದು ಹೇಳುತ್ತಾರೆ, ಆದರೆ ಹಿಂದಿನಂತೆ ಓಡಾಟ ನಡೆಸುವುದು ಕಷ್ಟವಾಗುತ್ತದೆ ಎನ್ನುವ ಕಾರಣಕ್ಕಾಗಿ ತಾವು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು ನಾನು ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ತಡವಾಗಿ ಆಗಮಿಸಿದ್ದೆ, ಹಾಗಾಗಿ ಖಾಲಿಯಿದ್ದ ಖುರ್ಚಿಯಲ್ಲಿ ಕೂತಿದ್ದೆ. ಇದರಲ್ಲಿ ಯಾವ ಕಡೆಗಣನೆ ಇಲ್ಲ, ಈ ಬಗ್ಗೆ ಈಗಾಗಲೇ ಸ್ಪಷ್ಟನೆಯನ್ನು ಸಹ ನೀಡಿದ್ದೇನೆ ಎಂದು ಅವರು ಪ್ರತಿಕ್ರಿಯೆ ನೀಡಿದರು.