ವಿಶ್ವವಾಣಿ ಸುದ್ದಿಮನೆ, ಕಲಬುರಗಿ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)ನ ಸಂಭಾವ್ಯ ಪರಿಣಾಮ, ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಜಾರಿಯಲ್ಲಿ ಆಗುತ್ತಿರುವ ವಿಳಂಬ ಸೇರಿದಂತೆ ಪ್ರಮುಖ ರಾಜಕೀಯ ವಿಚಾರಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ನಾಳೆ ಚರ್ಚಿಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದರು.
ಕಲಬುರಗಿ ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎಲ್ಲ ವಿಚಾರಗಳ ಕುರಿತು ಪ್ರಧಾನಿಗೆ ವೈಯಕ್ತಿಕವಾಗಿ ಈಗಾಗಲೇ ಎರಡು ಪತ್ರಗಳನ್ನು ಬರೆದಿದ್ದೇನೆ. ಆ ಪತ್ರಗಳು ಪ್ರಧಾನಿಯವರ ಬಳಿಯಿವೆ. ನಾಳೆ ನಡೆಯುವ ಚರ್ಚೆಯಲ್ಲಿ ಪತ್ರಗಳಲ್ಲಿ ಪ್ರಸ್ತಾಪಿಸಿರುವ ವಿಷಯಗಳ ಕುರಿತು ವಿವರವಾಗಿ ಮಾತನಾಡಲಾಗುವುದು ಎಂದು ತಿಳಿಸಿದರು.
SIR ಜಾರಿಯಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಆತಂಕವಿದೆ. ಮತದಾರರ ಹಕ್ಕುಗಳಿಗೆ ಧಕ್ಕೆಯಾಗದಂತೆ ಚುನಾವಣಾ ಪ್ರಕ್ರಿಯೆ ನಡೆಯಬೇಕು. ಇದೇ ವೇಳೆ ದೇಶದಲ್ಲಿ ಪ್ರಸ್ತಾಪವಾಗಿರುವ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ಬಗ್ಗೆಯೂ ಚರ್ಚೆ ಅಗತ್ಯವಿದೆ ಎಂದರು.
ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದ ವಿಚಾರವೂ ಚರ್ಚೆಯ ಪ್ರಮುಖ ವಿಷಯವಾಗಲಿದೆ. ಮಹಿಳೆಯರಿಗೆ ಸಂಸತ್ತು ಹಾಗೂ ವಿಧಾನಸಭೆಗಳಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆಯಬೇಕಿದ್ದು, ಮೀಸಲಾತಿ ಜಾರಿ ಕುರಿತು ಸ್ಪಷ್ಟತೆ ಅಗತ್ಯವಾಗಿದೆ ಎಂದು ಹೇಳಿದರು.
ದಸರಾ ಹಬ್ಬದ ಹಿನ್ನೆಲೆ ದೇಶದ ಜನತೆಗೆ ಶುಭಾಶಯ ಕೋರಿದ ಖರ್ಗೆ, ರಾಜ್ಯದಲ್ಲಿ ಶೇ.40ಕ್ಕೂ ಹೆಚ್ಚು ಮಳೆ ಕೊರತೆಯಾಗಿರುವುದರಿಂದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಅಗತ್ಯ ಎಂದರು.
ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮೂರನೇ ಮನವಿ ಪತ್ರ ಸಲ್ಲಿಸಲು ಸಿದ್ಧತೆ: ಡಾ.ಜಿ. ಪರಮೇಶ್ವರ್
ಮೈಸೂರು ದಸರಾ ಮಾದರಿಯಲ್ಲಿ ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲೂ ದೊಡ್ಡ ಮಟ್ಟದ ದಸರಾ ಆಚರಣೆ ನಡೆಯಬೇಕು ಎಂಬುದು ತಮ್ಮ ಆಶಯ. ಈ ನಿಟ್ಟಿನಲ್ಲಿ ಅಗತ್ಯ ಪ್ರಯತ್ನಗಳನ್ನು ನಡೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.