ಕಲಬುರಗಿ: ಕಳೆದ ವರ್ಷದ ಬಾಕಿ ಬೆಳೆ ವಿಮೆ ಹಾಗೂ ಈ ವರ್ಷದ ಮಳೆ ಹಾನಿ ಪರಿಹಾರ ಘೋಷಣೆಗೆ ಆಗ್ರಹಿಸಿ ಸಿಎಂಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ ರೈತ ಮುಖಂಡರನ್ನು (Farmers Protest) ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷದ 321 ಕೋಟಿ ರೂಪಾಯಿ ಬಾಕಿ ವಿಮೆ ಇನ್ನೂ ಬಿಡುಗಡೆಗೊಳಿಸಿಲ್ಲ. ಕೂಡಲೇ ಮುಖ್ಯಮಂತ್ರಿಗಳು ಪರಿಹಾರ ನೀಡಬೇಕು ಎಂದು ಕಲಬುರಗಿಯಲ್ಲಿ ರೈತ ಮುಖಂಡರು ಬುಧವಾರ ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದರು.
ಸ್ಥಳಕ್ಕೆ ಯಾವ ಸಚಿವ ಪ್ರತಿನಿಧಿಗಳು ಭೇಟಿ ನೀಡದ ಹಿನ್ನೆಲೆ ರೊಚ್ಚಿಗೆದ್ದ ರೈತರು, ಅಲ್ಲಿಂದ ಮುಂದೆ ಹೋಗಲು ಶುರು ಮಾಡಿದರು. ಈ ವೇಳೆ ರ‍್ಯಾಪಿಡ್ ಆಕ್ಷನ್ ಫೋರ್ಸ್ ಕೆಲ ಕಾಲ ಅವರನ್ನು ತಡೆಯುವ ಪ್ರಯತ್ನ ಮಾಡಿತು. ಹೋರಾಟಗಾರರು ಯಾವುದಕ್ಕೂ ಮಣಿಯದ ಕಾರಣ ಅವರನ್ನು ಬಂಧಿಸಲಾಗಿದೆ.
ನಗರದಲ್ಲಿನ ಕಾರ್ಯಕ್ರಮಗಳಿಗೆ ಸಿಎಂ ಬಂದಿದ್ದಾರೆ. ಆದರೆ ರೈತರ ಬಳಿ ಬರಲು ಅವರಿಗೆ ಸಮಯವಿಲ್ಲ ಎಂಬುದು ನಾಚಿಕೆ ಗೇಡಿನ ಸಂಗತಿಯಾಗಿದೆ. ಇದೊಂದು ರೈತ ವಿರೋಧಿ ಸರ್ಕಾರವಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತ ಹೋರಾಟಗಾರರ ದಯಾನಂದ ಪಾಟೀಲ್ ಸೇರಿದಂತೆ ಹತ್ತಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.
ಶೀಘ್ರ ಸಮೀಕ್ಷೆ ಮುಗಿಸಿ, ಪರಿಹಾರ ವಿತರಣೆ : ಸಿಎಂ
ಅತಿವೃಷ್ಟಿ ಪೀಡಿತ ಪ್ರದೇಶಗಳ ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ, ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಬೇಕು. ಮಾನವ- ಜಾನುವಾರು ಜೀವ ಹಾನಿಗಳಿಗೆ ಶೇ.100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಂದು ಕಲಬುರಗಿ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ, ಅತಿವೃಷ್ಟಿಯಿಂದ ಸಂಭವಿಸಿದ ಬೆಳೆ ಹಾನಿ ಕುರಿತಂತೆ ಮಾಹಿತಿ ಪಡೆದು, ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಸಿಎಂ ಸಲಹೆ ಸೂಚನೆ ನೀಡಿದ್ದಾರೆ.
ಕಳೆದ ಬಾರಿಗಿಂತ ಈ ಬಾರಿ ಉತ್ತಮ ಮಳೆ ಆಗಿದೆ. ವಾಡಿಕೆಗಿಂತ ಶೇ17 ರಷ್ಟು ಮಳೆ ಹೆಚ್ಚಾಗಿದೆ. 37 ಜನರ ಜೀವ ಹಾನಿ ಪ್ರಕರಣಗಳು ವರದಿಯಾಗಿದ್ದು, ಎಲ್ಲಾ ಪರಿಹಾರ ನೀಡಲಾಗಿದೆ.
175 ಜಾನುವಾರುಗಳ ಪ್ರಾಣ ಹಾನಿ ಪ್ರಕರಣಗಳು ವರದಿಯಾಗಿದ್ದು, ಎಲ್ಲದಕ್ಕೂ ಪರಿಹಾರ ನೀಡಲಾಗಿದೆ. ಸಂಪೂರ್ಣ ಮನೆ ಹಾನಿ, ಭಾಗಶಃ ಹಾನಿ ಆಗಿರುವ ಎಲ್ಲಾ ಪ್ರಕರಣಗಳಲ್ಲೂ ಪರಿಹಾರ ನೀಡಲಾಗಿದೆ.
ಈ ಸುದ್ದಿಯನ್ನೂ ಓದಿ | ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆ, ಸರ್ದಾರ್ ವಲ್ಲಭಭಾಯ್ ಪಟೇಲ್ ಪುತ್ಥಳಿಗೆ ಸಿಎಂ ಮಾಲಾರ್ಪಣೆ
ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಿಂದ ಹೆಚ್ಚು ಹಾನಿ ಸಂಭವಿಸಿದೆ. ನಿರಂತರ ಜೋಳು ಮಳೆ ಇರುವುದರಿಂದ ಬೆಳೆ ಹಾನಿಯ ಸಂಪೂರ್ಣ ಜಂಟಿ ಸಮೀಕ್ಷೆಗೆ ಅಡ್ಡಿ ಆಗುತ್ತಿದೆ. ಹೀಗಾಗಿ ನಿಗಧಿತ ಅವಧಿಯೊಳಗೆ ಜಂಟಿ ಸಮೀಕ್ಷೆ ಪೂರ್ಣಗೊಂಡಿಲ್ಲ. ಆದಷ್ಟು ಶೀಘ್ರ ಸಮೀಕ್ಷೆ ಮುಗಿಸಿ, ಪರಿಹಾರ ವಿತರಣೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.