ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕಲಬುರಗಿ ಜಿಲ್ಲೆ ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹ; ಡಿಸಿ ಕಚೇರಿ ಮುಂದೆ ರೈತರಿಂದ ರಸ್ತೆ ತಡೆ

Kalaburagi News: ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ 1,000 ಕೋಟಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು. ಪ್ರತಿ ಎಕರೆಗೆ 50 ಸಾವಿರ ಬರ ಪರಿಹಾರ ನೀಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಬೇಕು ಅಥವಾ ಸಾಲ ಮರುಪಾವತಿಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಒತ್ತಾಯಿಸಿ, ಸಂಯುಕ್ತ ಹೋರಾಟ ಕರ್ನಾಟಕ (SKM) ನೇತೃತ್ವದಲ್ಲಿ ರೈತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕಲಬುರಗಿ, ಆ.28: ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು, ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೂ ಕಲಬುರಗಿ ಜಿಲ್ಲೆಯನ್ನು (Kalaburagi News) ಬರಪೀಡಿತ ಪ್ರದೇಶವೆಂದು ಘೋಷಿಸದಿರುವುದನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ (SKM) ನೇತೃತ್ವದಲ್ಲಿ ರೈತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮುಂಗಾರು ಹಂಗಾಮಿನಲ್ಲಿ ಹೆಸರು, ಉದ್ದು, ಸೋಯಾಬಿನ್, ಎಳ್ಳು ಸೇರಿದಂತೆ ಹಲವು ಬೆಳೆಗಳು ಮಳೆ ಕೊರತೆಯಿಂದ ಹಾನಿಗೀಡಾಗಿವೆ. ಕೆಲ ರೈತರು ಎರಡು ಬಾರಿ ಬಿತ್ತನೆ ಮಾಡಿದರೂ ನಿರೀಕ್ಷಿತ ಮಳೆಯಾಗದೆ ಬೆಳೆ ಕೈಕೊಟ್ಟಿದೆ. ಆಗಸ್ಟ್‌ನಲ್ಲಿ ಸುರಿದ ಅಲ್ಪ ಮಳೆಗೆ ಕೆಲವೆಡೆ ತೊಗರಿ ಬಿತ್ತನೆ ಮಾಡಲಾಗಿದ್ದು, ಸದ್ಯದ ಉರಿ ಬಿಸಿಲಿನಿಂದ ಬೆಳೆಗಳು ಬಾಡುತ್ತಿವೆ ಎಂದು ರೈತ ಮುಖಂಡರು ದೂರಿದರು.

ಹಳ್ಳ, ಕೊಳ್ಳ, ನಾಲೆಗಳು ಬತ್ತಿದ್ದು, ಬಾವಿ ಹಾಗೂ ಕೊಳವೆಬಾವಿಗಳಲ್ಲಿಯೂ ನೀರಿನ ಮಟ್ಟ ಕುಸಿದಿದೆ. ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಎದುರಾಗಿದೆ. ಹೀಗಾಗಿ ಜಿಲ್ಲೆಯನ್ನು ಮರುಪರಿಶೀಲಿಸಿ ತಕ್ಷಣ ಬರಪೀಡಿತವೆಂದು ಘೋಷಿಸಬೇಕು ಎಂದು ಆಗ್ರಹಿಸಿದರು. ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ 1,000 ಕೋಟಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು. ಪ್ರತಿ ಎಕರೆಗೆ 50 ಸಾವಿರ ಬರ ಪರಿಹಾರ ನೀಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಬೇಕು ಅಥವಾ ಸಾಲ ಮರುಪಾವತಿಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಕರ್ನಾಟಕದ ಪಾಲಿನ 15 ಟಿಎಂಸಿ ನೀರು ಬಿಡುಗಡೆ ಮಾಡಿ ಭೀಮಾ ನದಿಗೆ ಹರಿಸಬೇಕು. ಬರ ಕಾಮಗಾರಿ ಆರಂಭಿಸಿ ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸಬೇಕು. ಜಾನುವಾರುಗಳಿಗಾಗಿ ಗೋಶಾಲೆ ಹಾಗೂ ಮೇವಿನ ವ್ಯವಸ್ಥೆ ಮಾಡಬೇಕು. ಕಲಬುರಗಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಿಸಬೇಕು ಎಂದು ಆಗ್ರಹಿಸಿದರು.

ಬೆಳೆ ವಿಮೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ ರೈತ ಮುಖಂಡರು, ವಿಮೆ ಪಡೆಯಲು ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲದ ದೃಢೀಕರಣ ಕಡ್ಡಾಯಗೊಳಿಸಬಾರದು. ಬೆಳೆ ಹಾನಿಗೊಳಗಾದ ಎಲ್ಲ ರೈತರಿಗೆ ವಿಮೆ ಪರಿಹಾರ ನೀಡಬೇಕು. ಎರಡನೇ ಕಂತಿನ ವಿಮೆ ಹಣದಿಂದ ವಂಚಿತರಾದ ರೈತರಿಗೂ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ರೈತರ ಸಮಸ್ಯೆಗಳನ್ನು ಸರ್ಕಾರ ನಿರ್ಲಕ್ಷಿಸಿದರೆ ಜಿಲ್ಲೆಯ ಸಚಿವರು ಹಾಗೂ ಶಾಸಕರ ಮನೆಗಳ ಎದುರು ಧರಣಿ ನಡೆಸಲಾಗುವುದು. ತಹಸೀಲ್ದಾರ್ ಕಚೇರಿಗಳ ಮುಂದೆ ಪಿಕೆಟಿಂಗ್ ನಡೆಸುವುದರ ಜತೆಗೆ ಜಿಲ್ಲೆಗೆ ಆಗಮಿಸುವ ಸಚಿವರಿಗೆ ಕಪ್ಪುಪಟ್ಟಿ ಪ್ರದರ್ಶಿಸುವ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜಿಲ್ಲೆಯ ಸಚಿವರು ಹಾಗೂ ಶಾಸಕರು ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ರೈತ ಮುಖಂಡರು, ರೈತರ ಪರವಾಗಿ ಧ್ವನಿ ಎತ್ತಲು ಸಾಧ್ಯವಾಗದಿದ್ದರೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಕೇಂದ್ರದ ಬರ ಅಧ್ಯಯನ ತಂಡವನ್ನು ತಕ್ಷಣ ಜಿಲ್ಲೆಗೆ ಕಳುಹಿಸಿ, ವಾಸ್ತವ ಪರಿಸ್ಥಿತಿಯ ಅಧ್ಯಯನ ನಡೆಸಬೇಕು ಎಂದು ಒತ್ತಾಯಿಸಿದರು.

ಹೋರಾಟದಲ್ಲಿ SKM ಜಿಲ್ಲಾ ಸಂಚಾಲಕ ಶರಣಬಸಪ್ಪ ಮಮಶೆಟ್ಟಿ, ಭೀಮಾಶಂಕರ ಮಾಡಿಯಾಳ, ಕರೆಪ್ಪ ಕರಗುಂದ, ಎಂ.ಬಿ. ಸಜ್ಜನ, ಮೌಲಾ ಮುಲ್ಲಾ ಸೇರಿದಂತೆ ಸಿದ್ದಪ್ಪ ಕಲಶೆಟ್ಟಿ, ಭೀಮಶಾ ಬಡದಾಳ, ದಿಲೀಪ್ ನಾಗೂರ, ಉಮಾಪತಿ ಪಾಟೀಲ, ನಾಗಯ್ಯ ಸ್ವಾಮಿ, ಚಂದ್ರಕಾಂತ ಪಾಟೀಲ, ವೀರಣ್ಣ ಗೌಡ ಮತ್ತಿತರ ರೈತ ಮುಖಂಡರು ಪಾಲ್ಗೊಂಡಿದ್ದರು.

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ರಸ್ತೆ ತಡೆ ಹೋರಾಟದ ವೇಳೆ ರೈತ ಭೀಮಶಾ ನೀಲೂರ್ ಎಂಬ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತು. ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಮಧ್ಯಪ್ರವೇಶಿಸಿ ರೈತನನ್ನು ತಡೆದು ಪರಿಸ್ಥಿತಿ ನಿಯಂತ್ರಿಸಿದರು. ಬರಗಾಲ ಘೋಷಣೆ ಮಾಡದೆ ಸರ್ಕಾರ ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರರು, ರೈತರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಹೋರಾಟಗಾರರು ಪೊಲೀಸ್ ವಶಕ್ಕೆ

ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮುಂದುವರಿಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು. ಬರ ಘೋಷಣೆ, ಬೆಳೆ ವಿಮೆ ಪರಿಹಾರ ಹಾಗೂ ರೈತರ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನಾಕಾರರು ಘೋಷಣೆ ಕೂಗಿದರು. ರಸ್ತೆ ತಡೆ ತೆರವುಗೊಳಿಸುವಂತೆ ಪೊಲೀಸರು ಮನವಿ ಮಾಡಿದರೂ ಹೋರಾಟ ಮುಂದುವರಿಸಿದ ಹಿನ್ನೆಲೆಯಲ್ಲಿ ಕೆಲವರನ್ನು ವಶಕ್ಕೆ ಪಡೆಯಲಾಯಿತು.

ಸಚಿವರು, ಶಾಸಕರ ರಾಜೀನಾಮೆಗೆ ಆಗ್ರಹ

ಕಲಬುರಗಿ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದರೂ ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಜಿಲ್ಲೆಯ ಸಚಿವರು ಹಾಗೂ ಶಾಸಕರು ವಿಫಲರಾಗಿದ್ದಾರೆ ಎಂದು ರೈತ ಮುಖಂಡರು ಆರೋಪಿಸಿದರು. ರೈತರ ಸಂಕಷ್ಟದ ಸಂದರ್ಭದಲ್ಲಿ ಜನರ ಪರವಾಗಿ ಧ್ವನಿ ಎತ್ತಲು ಸಾಧ್ಯವಾಗದ ಸಚಿವರು ಹಾಗೂ ಶಾಸಕರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಜನಪ್ರತಿನಿಧಿಗಳ ಮನೆಗಳ ಎದುರು ಧರಣಿ ನಡೆಸುವುದಾಗಿ ಎಚ್ಚರಿಸಿದರು.