ಕಲಬುರಗಿಯಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಶಾಸಕ, ಮುಖಂಡರು ವಶಕ್ಕೆ
Kalaburagi News: ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಬಳಿಕ ಕಾಂಗ್ರೆಸ್ ಕಚೇರಿಯತ್ತ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿ, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.
-
ಕಲಬುರಗಿ, ಜು.24: ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ, ಹಲ್ಲೆ ಹಾಗೂ ಪ್ರಧಾನಿ ಮೋದಿ ಅವರ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ ಮಾಡಿದ ಘಟನೆಯನ್ನು ಖಂಡಿಸಿ ನಗರದಲ್ಲಿ ಬಿಜೆಪಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ವೇಳೆ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಬಿಜೆಪಿ ಶಾಸಕ ಡಾ. ಅವಿನಾಶ್ ಜಾಧವ್, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಅಮರನಾಥ್ ಪಾಟೀಲ್, ಶರಣಪ್ಪ ತಳವಾರ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಸ್ಟೇಷನ್ ಬಜಾರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿ, ಬಳಿಕ ಕಾಂಗ್ರೆಸ್ ಕಚೇರಿಯತ್ತ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ತಡೆದರು. ನಂತರ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪೊಲೀಸ್ ವಾಹನಗಳಲ್ಲಿ ಕರೆದೊಯ್ದರು. ಬಳಿಕ ಬಿಡುಗಡೆಗೊಳಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ತಮ್ಮ ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕಿನ ಭಾಗವಾಗಿದ್ದು, ಸರ್ಕಾರ ವಿರೋಧದ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ʼʼಕೆಪಿಎಸ್‌ಸಿ ಕರ್ಮಕಾಂಡದ ಬಗ್ಗೆ ರಾಹುಲ್ ಗಾಂಧಿ ಮಾತನಾಡುತ್ತಿಲ್ಲವೇಕೆ?ʼʼ ಪ್ರಲ್ಹಾದ್ ಜೋಶಿ ವಾಗ್ದಾಳಿ
ಪ್ರತಿಭಟನೆಯ ಹಿನ್ನೆಲೆ ಕಾಂಗ್ರೆಸ್ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೆಲಕಾಲ ಆ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದರೂ, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟರು.