ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ-2026ರ ಅಂಗವಾಗಿ ಇದೇ ಸೆಪ್ಟೆಂಬರ್ 16 ಮತ್ತು 17 ರಂದು ಕಲಬುರಗಿ ನಗರದಲ್ಲಿ ಆಯೋಜಿಸಲಾಗಿರುವ ವೈವಿಧ್ಯಮಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಮನರಂಜನಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು, ಯುವಜನರು, ವಿದ್ಯಾರ್ಥಿಗಳು ಹಾಗೂ ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉತ್ಸವವನ್ನು ಯಶಸ್ವಿ ಗೊಳಿಸಬೇಕೆಂದು ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಕರೆ ನೀಡಿದ್ದಾರೆ.
ಕಲ್ಯಾಣ ಕರ್ನಾಟಕದ ಇತಿಹಾಸ, ಕಲೆ, ಸಂಸ್ಕೃತಿ, ಪರಂಪರೆ ಹಾಗೂ ಸ್ಥಳೀಯ ಪ್ರತಿಭೆಗಳನ್ನು ಜನರೊಂದಿಗೆ ಸಂಭ್ರಮಿಸುವ ಉದ್ದೇಶದಿಂದ ಕಲಬುರಗಿ ನಗರದ ವಿವಿಧ ವೇದಿಕೆಗಳಲ್ಲಿ ಎರಡು ದಿನಗಳ ಕಾಲ ಹಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
79ನೇ ಕಲ್ಯಾಣ ಕರ್ನಾಟಕ ಉತ್ಸವ ನಮ್ಮ ಭಾಗದ ಇತಿಹಾಸ, ಕಲೆ, ಸಂಸ್ಕೃತಿ, ಪರಂಪರೆ ಮತ್ತು ಪ್ರತಿಭೆಯನ್ನು ಒಟ್ಟಾಗಿ ಸಂಭ್ರಮಿಸುವ ಜನರ ಉತ್ಸವಾಗಿರಲಿದೆ. ಕಲಬುರಗಿ ನಗರದ ಹಾಗೂ ಜಿಲ್ಲೆಯ ಜನರು ತಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಎರಡು ದಿನಗಳ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಉತ್ಸವವನ್ನು ಯಶಸ್ವಿ ಗೊಳಿಸಬೇಕು” ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಮನವಿ ಮಾಡಿದ್ದಾರೆ.
ವಿಶೇಷವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿವಿಧ ಕಾರ್ಯಕ್ರಮಗಳನ್ನು ವೀಕ್ಷಿಸಿ, ನಮ್ಮ ಕಲಾವಿದರು ಮತ್ತು ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕು. ಸೆ.16 ಮತ್ತು 17ರಂದು ಕಲಬುರಗಿ ನಗರವೇ ಉತ್ಸವದ ಸಂಭ್ರಮದಲ್ಲಿ ಕಂಗೊಳಿಸಲಿದ್ದು, ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆಯೇ ಈ ಉತ್ಸವದ ಯಶಸ್ಸು ಎಂದು ಸಚಿವರು ತಿಳಿಸಿದ್ದಾರೆ.