Karnataka Budget 2025: 'ಬೊಗಳೆರಾಮಯ್ಯ ಬಜೆಟ್': ಅಶೋಕ್ ಟೀಕೆ
ರಾಷ್ಟ್ರಕವಿ ಕುವೆಂಪು ಹಾಗೂ ಗೋಪಾಲಕೃಷ್ಣ ಅಡಿಗರ ಕವನಗಳ ಸಾಲುಗಳನ್ನು ಉಲ್ಲೇಖಿಸುತ್ತಲೇ ಬಜೆಟ್ ಮಂಡನೆ ಆರಂಭಿಸಿದ ಸಿದ್ದರಾಮಯ್ಯ, "ನಮ್ಮ ಕೈಬುಟ್ಟಿಯಲಿ ಸಿಡಿಲ ಗೂಡಿಹುದು, ಹುಡುಕಿ ನೋಡಿದರಲ್ಲಿ ಸುಮದ ಬೀಡಿಹುದು" ಎಂಬ ಕುವೆಂಪು ಸಾಲನ್ನು ವಾಚಿಸಿದರು. ಜೊತೆಗೆ "ಇರುವೆಲ್ಲವನು ಎಲ್ಲ ಜನಕೆ ತೆರವಾಗಿಸುವ, ಸಮಬಗೆಯ ಸಮಸುಖದ ಸಮದುಃಖದ ಸಾಮರಸ್ಯದ ಸಾಮಗಾನ ಲಹರಿಯ ಮೇಲೆ, ತೇಲಿ ಬರಲಿದೆ ನೋಡು ನಮ್ಮ ನಾಡು" ಎಂಬ ಗೋಪಾಲಕೃಷ್ಣ ಅಡಿಗರ ಸಾಲುಗಳನ್ನು ಅವರು ನೆನಪಿಸಿಕೊಂಡರು.


ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ(Karnataka Budget 2025) ಮಾಡಿದ್ದಾರೆ. ಇದು ಅವರು ಮಂಡಿಸಿದ ದಾಖಲೆಯ 16ನೇ ಬಜೆಟ್ ಆಗಿದೆ. ಕಳೆದ ಬಾರಿಯ ಬಜೆಟ್ ಗಾತ್ರ 3.71 ಲಕ್ಷ ಕೋಟಿ ರುಪಾಯಿಗಳಾಗಿತ್ತು. ಈ ಸಲ 4,09,549 ಕೋಟಿ ರುಪಾಯಿಗೆ ವೃದ್ಧಿಸಿದೆ. ಆದರೆ, ಬಜೆಟ್ ಅತ್ಯಂತ ನಿರಾಶಾದಾಯಕ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ರಹಿತ ಅಡ್ಡ ಕಸುಬಿ ಬಜೆಟ್, ಒಟ್ಟಾರೆಯಾಗಿ 'ಬೊಗಳೆರಾಮಯ್ಯ ಬಜೆಟ್' ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್(R. Ashoka) ಟೀಕಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅಶೋಕ್, ಸಿದ್ದರಾಮಯ್ಯನವರು
ನಿರ್ಗಮಿಸುವ ಸಿಎಂ(Outgoing CM) ಎಂದು ಜನಸಾಮಾನ್ಯರ ಮನಸ್ಸಿನಲ್ಲಿ ಗಟ್ಟಿಯಾದ ಅಭಿಪ್ರಾಯ ಮೂಡಿರುವುದರಿಂದ, ಈ ಬಜೆಟ್ ನಿಂದ ಕನ್ನಡಿಗರಿಗೆ ಹೆಚ್ಚಿನ ನಿರೀಕ್ಷೆಗಳೇನೂ ಇರಲಿಲ್ಲ. ಆದರೂ ತಮ್ಮ ಕಡೆಯ ಬಜೆಟ್‌ನಲ್ಲಿ ಒಂದಿಷ್ಟಾದರೂ ಜನಪರ ಯೋಜನೆಗಳನ್ನು ಘೋಷಿಸುತ್ತಾರೆ ಎಂದು ಎದುರು ನೋಡುತ್ತಿದ್ದ ಜನರಿಗೆ ಈ ಬಜೆಟ್ ಸಂಪೂರ್ಣ ನಿರಾಸೆ ಮೂಡಿಸಿದೆ. ಇದು ಕೇವಲ 'ಬೊಗಳೆರಾಮಯ್ಯ ಬಜೆಟ್' ಎಂದು ಟೀಕಿಸಿದ್ದಾರೆ.
ಸಾಧನೆಯ ಬಲದಿಂದಾಗಲಿ, ದಿಟ್ಟ ನಾಯಕತ್ವದಿಂದಾಗಲಿ, ಅಹಿಂದ ನಾಮ ಜಪದಿಂದಾಗಲಿ ಚುನಾವಣೆಯನ್ನು ಎದುರಿಸಲು ಅಸಾಧ್ಯವೆಂದು ಗೊತ್ತಾದಾಗ ಅವಸರದಲ್ಲಿ ಐದು ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂತು. ಈ ಗ್ಯಾರೆಂಟಿಗಳು ಬಡವರ ಮೇಲಿನ ಪ್ರೀತಿ ಇಲ್ಲವೇ ಕಾಳಜಿಯಿಂದ ಘೋಷಿಸಿದ್ದಲ್ಲ, ಇದರ ಹಿಂದಿನ ದುರುದ್ದೇಶ ಜನರನ್ನ ದಿಕ್ಕು ತಪ್ಪಿಸಿ, ಮತಗಳಿಸಿ ಅಧಿಕಾರಕ್ಕೆ ಏರುವುದು ಮಾತ್ರ ಆಗಿತ್ತು ಎಂದಿದ್ದಾರೆ.
ಮುಖ್ಯಮಂತ್ರಿ @siddaramaiah ಅವರು ಇಂದು ಮಂಡಿಸಿದ ರಾಜ್ಯ ಬಜೆಟ್ ಅತ್ಯಂತ ನಿರಾಶಾದಾಯಕ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ರಹಿತ ಅಡ್ಡಕಸುಬಿ ಬಜೆಟ್.
— R. Ashoka (@RAshokaBJP) March 7, 2025
ಸಿದ್ದರಾಮಯ್ಯನವರು Outgoing CM ಎಂದು ಜನಸಾಮಾನ್ಯರ ಮನಸ್ಸಿನಲ್ಲಿ ಗಟ್ಟಿಯಾದ ಅಭಿಪ್ರಾಯ ಮೂಡಿರುವುದರಿಂದ, ಈ ಬಜೆಟ್ ನಿಂದ ಕನ್ನಡಿಗರಿಗೆ ಹೆಚ್ಚಿನ ನಿರೀಕ್ಷೆಗಳೇನೂ ಇರಲಿಲ್ಲ. ಆದರೂ ತಮ್ಮ… pic.twitter.com/wzu0KQEo3f
ಆದರೆ ಅಧಿಕಾರಕ್ಕೆ ಬಂದ ಮೇಲೆ ಬಿಸಿ ತುಪ್ಪದಂತಾಗಿರುವ ಗ್ಯಾರೆಂಟಿಗಳನ್ನು ಮುಂದುವರೆಸಲು ಆಗದೆ ನಿಲ್ಲಿಸಲೂ ಆಗದೆ ಕಾಂಗ್ರೆಸ್ ಸರ್ಕಾರ ಅಡಕತ್ತರಿಯಲ್ಲಿ ಸಿಕ್ಕಿಹಾಕಿಕೊಂಡಿದೆ. ಕೆಡಿಪಿ ಅಂಕಿ-ಅಂಶದ ಪ್ರಕಾರ, ಕಳೆದ ವರ್ಷದ ಅಂದರೆ 2024-25 ನೇ ಬಜೆಟ್ ವರ್ಷದ 10 ತಿಂಗಳಲ್ಲಿ ಶೇ.62% ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ. ಕಳೆದ ವರ್ಷದ ಅನುದಾನವೇ ಖರ್ಚು ಆಗದೆ ಇರುವಾಗ ಈಗ ಇನ್ನೊಂದು ಬಜೆಟ್ ಮಂಡಿಸಿದರೆ ಪ್ರಯೋಜನವೇನು? ಐದನೇ ಕ್ಲಾಸು ಪಾಸಾಗದ ವಿದ್ಯಾರ್ಥಿ ಆರನೇ ಕ್ಲಾಸಿನ ಪರೀಕ್ಷೆಗೆ ಕಟ್ಟಿದರೆ ಏನು ಪ್ರಯೋಜನ? ಹಾಗಾಗಿದೆ ಸಿದ್ದರಾಮಯ್ಯ ನವರ ಬಜೆಟ್ ನ ಕಥೆ-ವ್ಯಥೆ ಎಂದು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ Karnataka Budget 2025: ಸಿಎಂ ಸಿದ್ದರಾಮಯ್ಯ ಮಂಡಿಸಿದ 16ನೇ ಬಜೆಟ್‌ನ ಮುಖ್ಯಾಂಶಗಳು ಹೀಗಿವೆ
ಇದು ಕೇವಲ ನಾಮಕಾವಸ್ತೆ ಬಜೆಟ್. ಶೀಘ್ರದಲ್ಲೇ ನಿವೃತ್ತಿ ಆಗುತ್ತಿರುವ ಮುಖ್ಯಮಂತ್ರಿಗಳ ನಿರ್ಗಮನದ ಬಜೆಟ್. ಇದರಿಂದ ಕರ್ನಾಟಕಕ್ಕೆ, ಕನ್ನಡಿಗರಿಗೆ ನಯಾಪೈಸೆ ಉಪಯೋಗವಿಲ್ಲ ಎಂದು ಅಶೋಕ್ ಸುದೀರ್ಘ ಬರವಣಿಗೆಯ ಮೂಲಕ ಟೀಕಿಸಿದ್ದಾರೆ.