Karnataka Budget: ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಬಜೆಟ್‌ನಲ್ಲಿ ಬಂಪರ್ ಕೊಡುಗೆ
ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಬಜೆಟ್‌ನಲ್ಲಿ ಬಂಪರ್ ಕೊಡುಗೆ ಸಿಕ್ಕಿದೆ. 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಲಾಗಿದೆ.
ಸಂಗ್ರಹ ಚಿತ್ರ -
Vishakha Bhat Heggar
Mar 6, 2026 1:18 PM
ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಬಜೆಟ್‌ನಲ್ಲಿ ಬಂಪರ್ ಕೊಡುಗೆ ಸಿಕ್ಕಿದೆ.
- 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ (Karnataka Budget 2026) ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಲಾಗಿದೆ.
- ಖಾಸಗಿ ಶಾಲೆಗಳ ಮಾನ್ಯತೆ ಪಡೆಯುವ ಹಾಗೂ ನವೀಕರಿಸುವ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕ ಅರ್ಜಿ ಹಾಗೂ ದಾಖಲೆಗಳನ್ನು ಸಲ್ಲಿಸಲು ಅನುಮತಿಸಿ ಸರಳೀಕರಣಗೊಳಿಸಲಾಗಿದೆ.
- 2025–26ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಸವಲತ್ತುಗಳನ್ನು ಮೊದಲ ಬಾರಿಗೆ ನೇರ ನಗದು ವರ್ಗಾವಣೆ (DBT) ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಗ್ರಾಮೀಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರಗಳನ್ನು ಆನ್-ಲೈನ್ ಮೂಲಕ ವಿತರಿಸಲಾಗಿದೆ.
- ʻಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ADB ನೆರವಿನೊಂದಿಗೆ 500 ಶಾಲೆಗಳು, KKRDB ನಿಧಿಯಿಂದ 200 ಶಾಲೆಗಳು ಹಾಗೂ KMERC ನಿಧಿಯಿಂದ 100 ಶಾಲೆಗಳು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದಕ್ಕಾಗಿ ಒಟ್ಟಾರೆ 3,900 ಕೋಟಿ ರೂ.ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ವೆಚ್ಚ ಮಾಡಲಾಗುವುದು.
- ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ (KPS) ಶಿಕ್ಷಕರ ಹುದ್ದೆಗಳನ್ನು ಮಹತ್ವದ ಹುದ್ದೆಗಳೆಂದು ಪರಿಗಣಿಸಿ ಮೊದಲ ಆದ್ಯತೆಯಲ್ಲಿ ಭರ್ತಿ ಮಾಡಲಾಗುವುದು ಹಾಗೂ ಸದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶಿಕ್ಷಕರ ನೇಮಕಾತಿ ಮಾಡಲು ಆದ್ಯತೆ ನೀಡಲಾಗುವುದು.
- ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ವಿಶೇಷವಾಗಿ ದಾಖಲಾತಿ ಪ್ರಮಾಣ ಮತ್ತು ಕಲಿಕೆಯ ಫಲಿತಾಂಶಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ 1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ. 2026-27ನೇ ಸಾಲಿನಿಂದ ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕಗಳನ್ನು, 1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು.
- ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ.ಗಳು, ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ.ಗಳು ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
- ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಸದರಿ ಅನುದಾನವನ್ನು ಶಾಲಾ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ನೇರವಾಗಿ ವರ್ಗಾಯಿಸಲಾಗುವುದು.
- ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಜಾರಿಗೊಳಿಸಲು ಪ್ರಾಥಮಿಕ ಶಾಲಾ ಶಿಕ್ಷಕರ ಸಾಮರ್ಥ್ಯ ವೃದ್ಧಿಗಾಗಿ ಇಂಗ್ಲಿಷ್ ಭಾಷಾ ತರಬೇತಿ ಕಾರ್ಯಕ್ರಮವನ್ನು 24 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.
- IIT ಧಾರವಾಡದ ಸಹಯೋಗದೊಂದಿಗೆ 8 ರಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 12.28 ಲಕ್ಷ ವಿದ್ಯಾರ್ಥಿಗಳಿಗೆ ಅಂದಾಜು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಪ್ರಕ್ರಿಯೆಯಲ್ಲಿ AI ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್ ಸೌಲಭ್ಯವನ್ನು ಒದಗಿಸಲಾಗುವುದು.
- 2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
- ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 BRC ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲಾಗುವುದು.
- ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.
- ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು.
- ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು.
*ಉನ್ನತ ಶಿಕ್ಷಣ*
- ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಪಾಲಿಟೆಕ್ನಿಕ್ಗಳ ಬಲವರ್ಧನೆ, ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ADB ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ʻಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆʼ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ADB ನೆರವಿನೊಂದಿಗೆ 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
- ಹಿಂದಿನ ಸಾಲಿನಲ್ಲಿ ಘೋಷಿಸಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿಕ್ಗಳು ಮತ್ತು ಯುವಿಸಿಇ ವಿಶ್ವವಿದ್ಯಾಲಯದಲ್ಲಿ ಒಟ್ಟಾರೆ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಲಾಗಿದೆ.
- ಸದರಿ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ಮುಂದುವರೆದು, ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತ ಹಂತವಾಗಿ ಭರ್ತಿ ಮಾಡಲಾಗುವುದು.
- ಶೇ.50ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವ 25 ಸರ್ಕಾರಿ ಪದವಿ ಕಾಲೇಜು, ಮೂರು ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ತಲಾ ಒಂದು ಕೋಟಿ ರೂ.ಗಳಂತೆ ಒಟ್ಟು 31 ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅವಶ್ಯವಿರುವ ಮೂಲ ಸೌಲಭ್ಯಗಳನ್ನು ಒದಗಿಸಲಾಗುವುದು.
- 1,000ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಒಟ್ಟು 50 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ ಪೀಠೋಪಕರಣಗಳು ಹಾಗೂ ಕಟ್ಟಡಗಳ ದುರಸ್ತಿ/ನವೀಕರಣ ಕಾಮಗಾರಿಗಳನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಕೈಗೊಳ್ಳಲಾಗುವುದು.
- ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ 75 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, 23 ಪಾಲಿಟೆಕ್ನಿಕ್ ಹಾಗೂ ಐದು ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಒದಗಿಸಲಾಗುವುದು.
- ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ KKRDB macro ಅನುದಾನದಿಂದ ಪ್ರಥಮ ದರ್ಜೆ ಕಾಲೇಜನ್ನು ಸ್ಥಾಪಿಸಲಾಗುವುದು.
- ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕಲಬುರಗಿ ಜಿಲ್ಲೆಯ ನಿಂಬರಗಾ, ಯಾದಗಿರಿ ಜಿಲ್ಲೆಯ ಕಕ್ಕೇರಾ, ರಾಯಚೂರು ಜಿಲ್ಲೆಯ ಅಂಬಾಮಠ ಮತ್ತು ಕೊಪ್ಪಳ ಜಿಲ್ಲೆಯ ಬೇವೂರು ಗ್ರಾಮಗಳಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳನ್ನು ತಲಾ 18 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
- ಸರ್ಕಾರದ 11 ಪಾಲಿಟೆಕ್ನಿಕ್ಗಳಲ್ಲಿ ಹಾಗೂ ಚಿತ್ರದುರ್ಗ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸ್ತುತ ಹೆಚ್ಚಿನ ಬೇಡಿಕೆ ಹಾಗೂ ಉದ್ಯೋಗಾವಕಾಶವಿರುವ ಕೋರ್ಸ್ಗಳಾದ AI, ಮಷಿನ್ ಲರ್ನಿಂಗ್, ಕ್ಲೌಡ್ ಕಂಪ್ಯೂಟಿಂಗ್, ಮೈನಿಂಗ್ ಇಂಜಿನಿಯರಿಂಗ್, ಆಟೋಮೇಷನ್ ಇಂಜಿನಿಯರಿಂಗ್ ಮುಂತಾದ 15 ಹೊಸ ಕೋರ್ಸ್ಗಳನ್ನು ಪ್ರಾರಂಭಿಸಲಾಗುವುದು.
- AnitaB.org India ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯೊಂದಿಗೆ ವೃತ್ತಿ ಜೀವನದ ಆರಂಭಿಕ ಹಂತದಲ್ಲಿರುವ ವಿಜ್ಞಾನ, ತಾಂತ್ರಿಕ, ಗಣಿತ ಮತ್ತು ಇಂಜಿನಿಯರಿಂಗ್ (STEM) ವಿಭಾಗಗಳಲ್ಲಿನ ಆಯ್ದ 3,000 ಮಹಿಳಾ ಪದವೀಧರರಿಗೆ ಕೌಶಲ್ಯಾಭಿವೃದ್ಧಿ/ವೃತ್ತಿನಿರತ ತರಬೇತಿಗಳನ್ನು ಒಟ್ಟು 13.50 ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಲಾಗುವುದು.
- ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು ಐಐಟಿ ಮಾದರಿಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರದ ವತಿಯಿಂದ ಈಗಾಗಲೇ 100 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಪ್ರಸಕ್ತ ವರ್ಷದಲ್ಲಿಯೂ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.
- ಸರ್ಕಾರಿ ಶಾಲಾ ಕಾಲೇಜುಗಳಲ್ಲಿ 10 ಮತ್ತು 12ನೇ ತರಗತಿಗಳನ್ನು ವ್ಯಾಸಂಗ ಮಾಡಿ 2025-26ನೇ ಸಾಲಿನಿಂದ ಉನ್ನತ ಶಿಕ್ಷಣವನ್ನು ಮುಂದುವರೆಸುತ್ತಿರುವ 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ.ಗಳ ವಿದ್ಯಾರ್ಥಿ ವೇತನವನ್ನು ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ ಹಾಗೂ ಉಳಿದ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದ ವತಿಯಿಂದ ʻದೀಪಿಕಾ ವಿದ್ಯಾರ್ಥಿ ವೇತನʼ ಯೋಜನೆಯಡಿ ನೀಡಲಾಗುತ್ತಿದೆ. ಇದನ್ನು ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಲಾಗುವುದು.
- ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು.
- ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ, ಹೆಸರಘಟ್ಟ ಇಲ್ಲಿ ನಡೆಸಲಾಗುತ್ತಿರುವ ಸೌಂಡ್ ರೆಕಾರ್ಡಿಂಗ್ ಮತ್ತು ಇಂಜಿನಿಯರಿಂಗ್ ಹಾಗೂ ಸಿನಿಮಾಟೋಗ್ರಫಿ ಕೋರ್ಸುಗಳಿಗೆ ಅಗತ್ಯವಿರುವ ಆಧುನಿಕ ಉಪಕರಣಗಳನ್ನು ಒದಗಿಸಲಾಗುವುದು.
- ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು.
- ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ನಮ್ಮ ಸರ್ಕಾರವು ಉದ್ದೇಶಿಸಿದೆ.
Karnataka Budget 2026: ಕೃಷಿ, ಹೈನುಗಾರಿಕೆ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ
- ಧಾರವಾಡ ಮತ್ತು ಬೆಂಗಳೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗಾಗಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗುವುದು.
- ಕರ್ನಾಟಕದಲ್ಲಿ NCC ಯನ್ನು ಉತ್ತೇಜಿಸುವ ಸಲುವಾಗಿ ಪ್ರಸ್ತುತ ಇರುವ 96,000 NCC ಕೆಡೆಟ್ಗಳ ಕಾರ್ಯಬಲವನ್ನು ಮುಂದಿನ ಎರಡು ವರ್ಷಗಳಲ್ಲಿ 10,000 ಗಳಷ್ಟು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.
- ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು 25 ಎಕರೆ ಜಮೀನನ್ನು ನೀಡಲಾಗುವುದು.