ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Karnataka By Elections: ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಉಪಚುನಾವಣೆ ಮತದಾನ ಆರಂಭ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮುಂಜಾನೆ ಮತದಾನ ಆರಂಭವಾಗಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಉಪಚುನಾವಣೆ ಮತದಾನ ಆರಂಭ

ಉಪಚುನಾವಣೆ -

ಹರೀಶ್‌ ಕೇರ
ಹರೀಶ್‌ ಕೇರ Apr 9, 2026 7:40 AM

ದಾವಣಗೆರೆ, ಬಾಗಲಕೋಟೆ, ಏ. 9: ಕರ್ನಾಟಕದ (Karnataka By Elections) ವಿಧಾನಸಭೆ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ (Assembly ByPolls) ನಡೆಯುತ್ತಿದೆ. ಮತದಾನ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ. ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದ್ದು ಎರಡೂ ಕ್ಷೇತ್ರಗಳಿಂದ ಒಟ್ಟು 34 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಸುಗಮ ಮತದಾನಕ್ಕಾಗಿ ಎರಡೂ ಕ್ಷೇತ್ರಗಳಲ್ಲಿ ಸುಮಾರು 2,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಉಪಚುನಾವಣೆಯ ಫಲಿತಾಂಶವು ಮೇ 4 ಸೋಮವಾರ ಪ್ರಕಟವಾಗಲಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಮತ್ತು ಬಿಜೆಪಿಯಿಂದ ಶ್ರೀನಿವಾಸ್ ಟಿ. ದಾಸಕರಿಯಪ್ಪ ಸೇರಿದಂತೆ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಉಮೇಶ್ ಮೇಟಿ ಮತ್ತು ಬಿಜೆಪಿಯ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 20 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ ನಡೆಯುತ್ತಿದೆ.

Karnataka bypolls: ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ; ಏಪ್ರಿಲ್‌ 9ಕ್ಕೆ ಸರ್ಕಾರಿ ನೌಕರರಿಗೆ ರಜೆ ಘೋಷಣೆ

ಸಿಬ್ಬಂದಿ ಮತ್ತು ಭದ್ರತೆ

ಚುನಾವಣಾ ಕರ್ತವ್ಯಕ್ಕಾಗಿ 1,430ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೃದಯಾಘಾತ ಮತ್ತು ಬಿಪಿ ಸಮಸ್ಯೆ ಇರುವ ಸಿಬ್ಬಂದಿಗಾಗಿ ಪ್ರತಿ ಕೇಂದ್ರದಲ್ಲೂ ಹೆಲ್ತ್ ಚೆಕಪ್ ವ್ಯವಸ್ಥೆ ಮಾಡಲಾಗಿದೆ ಎರಡೂ ಕ್ಷೇತ್ರಗಳಾದ್ಯಂತ ವ್ಯಾಪಕ ಬಂದೋಬಸ್ತ್ ನಡುವೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮತದಾನದ ಸಮಯ ಮತ್ತು ಸೌಲಭ್ಯ

ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಿರಿಯ ನಾಗರಿಕರು ಮತ್ತು ಅಂಗವಿಕಲರನ್ನು ಮತಗಟ್ಟೆಗೆ ಕರೆತರಲು ಜಿಲ್ಲಾಡಳಿತವು ಉಚಿತ ವಾಹನ ಸೌಲಭ್ಯವನ್ನು ಒದಗಿಸಿದೆ. ಸುಡು ಬಿಸಿಲಿನ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಮಾಡಲಾಗಿದೆ. ಇಂದು ದಾಖಲಾಗುವ ಮತಗಳ ಎಣಿಕೆಯು ಮೇ 4ರಂದು ನಡೆಯಲಿದ್ದು, ಅಂದು ಫಲಿತಾಂಶ ಪ್ರಕಟವಾಗಲಿದೆ.

Karnataka Bypolls: ಉಪಚುನಾವಣೆ; ಎರಡೂ ಕ್ಷೇತ್ರದಲ್ಲೂ ಗೆದ್ದು ತೋರಿಸ್ತೀವಿ ಎಂದ ಸಿಎಂ

ನಡೆದಿತ್ತು ಭರ್ಜರಿ ಪ್ರಚಾರ

ಈ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಪುಟ ಸಚಿವರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಬಾಗಲಕೋಟೆಯಲ್ಲಂತೂ ಸಿದ್ದರಾಮಯ್ಯನವರೇ ಖುದ್ದು ನಾಲ್ಕೈದು ದಿನ ಪ್ರಚಾರ ನಡೆಸಿದ್ದಾರೆ. ಅತ್ತ ಪ್ರತಿಪಕ್ಷ ಬಿಜೆಪಿಯಿಂದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಪ್ರಚಾರದ ಮುಂಚೂಣಿಯಲ್ಲಿದ್ದರು.