KSRTC Buses: ಇನ್ನು ಮುಂದೆ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಈ ವಸ್ತುಗಳನ್ನು ಕೊಂಡೊಯ್ಯುವುದು ನಿಷೇಧ
Kurnool bus fire: ಬಸ್ಸುಗಳಲ್ಲಿ ಯಾವುದೇ ವಾಣಿಜ್ಯ ಸರಕು/ ಲಗೇಜ್ ಸಾಗಿಸುವ ಸಂದರ್ಭದಲ್ಲಿ ಬೆಂಕಿ ಸ್ಪರ್ಷಕ್ಕೆ ಸರಳವಾಗಿ ಉರಿಯುವ ಅಥವಾ ಇತರೆ ಸ್ಫೋಟಕ ವಸ್ತುಗಳನ್ನು ಸಾಗಿಸದಂತೆ ನಿಗಾವಹಿಸಬೇಕು. ಎಲ್ಲಾ ಎಸಿ ಬಸ್‌ಗಳಲ್ಲಿ ತುರ್ತು ಸಂದರ್ಭಗಳಲ್ಲಿ ಕಿಟಕಿಗಳನ್ನು ಒಡೆಯಲು ಸುತ್ತಿಗೆಗಳು ಕಡ್ಡಾಯವಾಗಿರಬೇಕು ಎಂದು ಆದೇಶಿಸಲಾಗಿದೆ.
-
ಹರೀಶ್ ಕೇರ
Oct 27, 2025 6:54 AM
ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿಯಲ್ಲಿ ಖಾಸಗಿ ಬಸ್ ಅಪಘಾತದ ನಂತರ ಬೆಂಕಿ (Kurnool bus fire) ಹೊತ್ತಿಕೊಂಡು, 20 ಮಂದಿ ಸಜೀವ ದಹನವಾಗಿರುವ ಹಿನ್ನೆಲೆಯಲ್ಲಿ, ಕೆಎಸ್‌ಆರ್‌ಟಿಸಿ (KSRTC buses) ಪ್ರಯಾಣಿಕರ ಸುರಕ್ಷತೆಗಾಗಿ ರಾಜ್ಯ ಸರ್ಕಾರ (karnataka government) ಮಹತ್ವದ ಕ್ರಮ ಕೈಗೊಂಡಿದೆ. ಇನ್ನು ಮುಂದೆ ಸಾರಿಗೆ ಬಸ್ಸುಗಳಲ್ಲಿ ಸ್ಪೋಟಗೊಳ್ಳುವಂತ ವಸ್ತುಗಳನ್ನು ಪ್ರಯಾಣಿಕರು ಕೊಂಡೊಯ್ಯೋದಕ್ಕೆ ನಿಷೇಧ ಹೇರಲಾಗಿದೆ. ಜೊತೆಗೆ ಸುರಕ್ಷತೆಯ ದೃಷ್ಠಿಯಿಂದ ಪ್ರಯಾಣಿಕರ ಪ್ರತಿ ಬ್ಯಾಗ್ ಚೆಕ್ ಮಾಡುವಂತೆಯೂ ರಾಜ್ಯ ಸರ್ಕಾರ ಸೂಚಿಸಿದೆ.
ಈ ಕುರಿತಂತೆ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದು, ಇತ್ತೀಚೆಗೆ ನಡೆದ ಕರ್ನೂಲ್ ಬಸ್ ದುರಂತ ತೀವ್ರ ದುಃಖಕರವಾದ ಸಂಗತಿ. ಆ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿರುವ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಬೇಕು. ಈ ಹಿಂದೆ ನಾನು ಸಾರಿಗೆ ಸಚಿವನಾಗಿದ್ದಾಗ ಹಾವೇರಿ ಬಳಿ ಜಬ್ಬಾರ್ ಟ್ರಾವೆಲ್ಸ್‌ನ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಪ್ರಯಾಣಿಕರು ತಮ್ಮ ಪ್ರಾಣ ಕಳೆದುಕೊಂಡಿದ್ದರು ಎಂದು ಹೇಳಿದ್ದಾರೆ.
ನಾನು ಆ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಸುಮಾರು 50000 ವಾಹನಗಳಲ್ಲಿ ( ಸಾರಿಗೆ ಸಂಸ್ಥೆಗಳ ಬಸ್ಸುಗಳು, ಕಾಂಟ್ರಾಕ್ಟ್ ಕ್ಯಾರೇಜ್ ಬಸ್ಸುಗಳು, ಖಾಸಗಿ ಟೂರಿಸ್ಟ್ ಬಸ್‌ಗಳು, ಟೆಂಪೋ ಟ್ರಾವೆಲರ್ಸ್, ಶಾಲಾ ವಾಹನಗಳು ಸೇರಿ) ತುರ್ತು ನಿರ್ಗಮನ ದ್ವಾರಗಳನ್ನು ಕಡ್ಡಾಯ ಅಳವಡಿಸುವಂತೆ ಮತ್ತು ಸರ್ಮಪಕವಾಗಿ ದ್ವಾರ ಕೆಲಸ ಮಾಡುತ್ತಿರುವ ಬಗ್ಗೆ ಪರಿಶೀಲಿಸಲು ಒಂದು ಅಭಿಯಾನವನ್ನೇ ಕೈಗೆತ್ತಿಕೊಂಡಿದ್ದರಿಂದ, ಹಲವು ಬಸ್ಸುಗಳಲ್ಲಿನ ಲೋಪದೋಷಗಳು ಗಮನಕ್ಕೆ ಬಂದು ತುರ್ತು ನಿರ್ಗಮನ ದ್ವಾರಗಳ ಅಳವಡಿಕೆ ಕಡ್ಡಾಯವಾಯಿತು ಎಂದಿದ್ದಾರೆ.
ಇದನ್ನೂ ಓದಿ: Kurnool Bus Fire: ಕರ್ನೂಲ್ ದುರಂತ; ಬಸ್ ಚಾಲಕನ ಬಂಧನ
ಮುಂದುವರೆದು, ಬಸ್ಸುಗಳಲ್ಲಿ ಯಾವುದೇ ವಾಣಿಜ್ಯ ಸರಕು/ ಲಗೇಜ್ ಸಾಗಿಸುವ ಸಂದರ್ಭದಲ್ಲಿ ಬೆಂಕಿ ಸ್ಪರ್ಷಕ್ಕೆ ಸರಳವಾಗಿ ಉರಿಯುವ ಅಥವಾ ಇತರೆ ಸ್ಫೋಟಕ ವಸ್ತುಗಳನ್ನು ಸಾಗಿಸದಂತೆ ನಿಗಾವಹಿಸಬೇಕು. ಎಲ್ಲಾ ಎಸಿ ಬಸ್‌ಗಳಲ್ಲಿ ತುರ್ತು ಸಂದರ್ಭಗಳಲ್ಲಿ ಕಿಟಕಿಗಳನ್ನು ಒಡೆಯಲು ಸುತ್ತಿಗೆಗಳು ಕಡ್ಡಾಯವಾಗಿರಬೇಕು. ಲಗೇಜ್ ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿ ಮಲಗಲು ಅವಕಾಶ ನೀಡಬಾರದು. ಬಸ್ಸುಗಳ ನವೀಕರಣ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದ್ದಾರೆ.
ಈ ಮೇಲಿನ ಯಾವುದೇ ನೂನ್ಯತೆ ಕಂಡುಬಂದರೂ ನಿರ್ದಾಕ್ಷಿಣ್ಯವಾಗಿ ಸಂಬಂಧಪಟ್ಟವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು. ಪ್ರಯಾಣಿಕರ ಸುರಕ್ಷತೆ ನಮ್ಮ ಪ್ರಥಮ ಆದ್ಯತೆ. ಪ್ರಾಣ ಹಾನಿಗೆ ಯಾವುದೇ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದ್ದರಿಂದ ಈ ಕೂಡಲೇ ಬಸ್ಸುಗಳಲ್ಲಿನ ಸುರಕ್ಷತಾ ಆಡಿಟ್ ಪರಿಶೀಲನೆಗೆ ತಂಡಗಳನ್ನು ರಚಿಸಿ, ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.