ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಆರೆಸ್ಸೆಸ್‌ ಪಥಸಂಚಲನ: ಕೋರ್ಟ್‌ ಆದೇಶದ ವಿರುದ್ಧ ಮೇಲ್ಮನವಿ: ಸಿಎಂ ಸಿದ್ದರಾಮಯ್ಯ

Karnataka high court: ಸರಕಾರಿ ಸ್ಥಳಗಳಲ್ಲಿ ಖಾಸಗಿ ಸಂಘಸಂಸ್ಥೆಗಳು ಕಾರ್ಯಕ್ರಮ ನಡೆಸುವಂತಿಲ್ಲ. ಪೂರ್ವಾನುಮತಿ ಅಗತ್ಯ ಎಂಬ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ನಿನ್ನೆ ಮಧ್ಯಂತರ ತಡೆ ನೀಡಿದೆ. ಈ ವಿಚಾರವಾಗಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ನಾವು ಹೈಕೋರ್ಟಿಗೆ ಮತ್ತೆ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.

ಹೈಕೋರ್ಟ್‌ ಆದೇಶದ ವಿರುದ್ಧ ಮೇಲ್ಮನವಿ: ಸಿಎಂ ಸಿದ್ದರಾಮಯ್ಯ

-

ಹರೀಶ್‌ ಕೇರ ಹರೀಶ್‌ ಕೇರ Oct 29, 2025 6:56 AM

ಬೆಂಗಳೂರು : ರಾಜ್ಯದಲ್ಲಿ ಆರೆಸ್ಸೆಸ್‌ ಪಥಸಂಚಲನ ನಿರ್ಬಂಧಿಸುವ ಉದ್ದೇಶದಿಂದ ಜಾರಿ ಮಾಡಲಾಗಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ (Karnataka high court) ಪೀಠ ತಡೆಯಾಜ್ಞೆ ನೀಡಿದ್ದು, ಈ ತಡೆಯಾಜ್ಞೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ಆರೆಸ್ಸೆಸ್ ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಇದೀಗ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ. ಬಿಜೆಪಿಯ ಜಗದೀಶ ಶೆಟ್ಟರ್‌ ಅವರ ಅವಧಿಯಲ್ಲಿ ಹೊರಡಿಸಲಾಗಿದ್ದ ಆದೇಶವನ್ನು ಕಾಂಗ್ರೆಸ್‌ ಸರಕಾರ ಇನ್ನಷ್ಟು ಕಠಿಣವಾಗಿ ಜಾರಿಗೆ ತಂದಿತ್ತು.

ಸರಕಾರಿ ಸ್ಥಳಗಳಲ್ಲಿ ಖಾಸಗಿ ಸಂಘಸಂಸ್ಥೆಗಳು ಕಾರ್ಯಕ್ರಮ ನಡೆಸುವಂತಿಲ್ಲ. ಪೂರ್ವಾನುಮತಿ ಅಗತ್ಯ ಎಂಬ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ನಿನ್ನೆ ಮಧ್ಯಂತರ ತಡೆ ನೀಡಿದೆ. ಈ ವಿಚಾರವಾಗಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ನಾವು ಹೈಕೋರ್ಟಿಗೆ ಮತ್ತೆ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.

ಪ್ರಕರಣದ ಹಿನ್ನೆಲೆ

ಸಚಿವ ಪ್ರಿಯಾಂಕ ಖರ್ಗೆ ಅವರು, ರಾಜ್ಯದಲ್ಲಿ ಆರ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಹೇರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ನಿರ್ಣಯಿಸಿ, ಹಳೆಯ ಆದೇಶಕ್ಕೆ ಜೀವ ನೀಡಲಾಗಿತ್ತು. ಇದಕ್ಕೆ ಸಂಬಂಧಪಟ್ಟಂತೆ ಧಾರವಾಡದ ಹೈಕೋರ್ಟ್ ಪೀಠದಲ್ಲಿ ಹುಬ್ಬಳ್ಳಿಯ ಪುನಃಶ್ಚೇತನ ಸೇವಾ ಸಂಸ್ಥೆ ಎನ್‌ಜಿಓ ರಿಟ್ ಅರ್ಜಿ ಸಲ್ಲಿಸಿತ್ತು. ಈ ಆದೇಶ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ. ಆದೇಶದಲ್ಲಿ 10 ಜನಕ್ಕಿಂತ ಹೆಚ್ಚು ಸೇರುವಂತಿಲ್ಲ ಎಂದು ನಿರ್ಬಂಧ ವಿಧಿಸಿದೆ. ಈ ನಿರ್ಬಂಧ ವಿಧಿಸಲು ಕಾನೂನಿನಲ್ಲಿ ಅವಕಾಶ ಇಲ್ಲ. ಇದು ಸಂವಿಧಾನದ ಆರ್ಟಿಕಲ್ 91 (A) ಪ್ರಕಾರ ಜನಗಳು ಸಭೆ ಸಮಾರಂಭ ಸೇರುವ ಹಕ್ಕನ್ನು ಉಲ್ಲಂಘನೆ ಮಾಡುತ್ತಿದೆ. ಇದನ್ನು ನಿಯಂತ್ರಿಸುವ ಸರ್ಕಾರದ ಆದೇಶ ಸಂವಿಧಾನ ಬಾಹಿರ ಎಂದು ಅಶೋಕ್ ಹಾರನಹಳ್ಳಿ ವಾದ ಮಾಡಿದರು.

ಹೈಕೋರ್ಟ್ ಕೂಡ ಈ ವಾದವನ್ನು ಒಪ್ಪಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ, ಇದು ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದ್ದು ಸಂವಿಧಾನ ಕೊಟ್ಟಿರುವ ಮೂಲಭೂತ ಹಕ್ಕನ್ನು ಸರ್ಕಾರದ ಒಂದು ಆದೇಶದ ಮೂಲಕ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಆದೇಶಕ್ಕೆ ಮಧ್ಯಂತರ ತಡೆ ನೀಡಿದರು. ರಾಜ್ಯ ಸರ್ಕಾರದ ಪರ ವಕೀಲರು ವಾದ ಮಾಡಲು ಒಂದು ದಿನದ ಕಾಲಾವಕಾಶ ಕೇಳಿದ್ದು, ಕೋರ್ಟ್ ನಿಮಗೆ ನೋಟಿಸ್ ನೀಡುತ್ತೆ ವಾದ ಮಾಡಿ ಎಂದು ಹೇಳಿ ಹೈಕೋರ್ಟ್ ಆದೇಶ ನೀಡಿತು.