Karnataka Govt: ರಾಜ್ಯದಲ್ಲಿ ತಯಾರಾಗುವ ಎಲ್ಲ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್ ಕಡ್ಡಾಯ; ಸರ್ಕಾರದಿಂದ ಆದೇಶ
ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಇತರ ಯಾವುದೇ ಭಾಷೆಯಲ್ಲಿ ಇದ್ದರೂ ಅದರ ಜತೆಗೆ ಕನ್ನಡದಲ್ಲಿಯೂ ವಿವರ ಇರಲೇಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಉಮಾದೇವಿ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಸುತ್ತೋಲೆಯ ಪ್ರತಿ ಮತ್ತು ಸಾಂದರ್ಭಿಕ ಚಿತ್ರ.

ಬೆಂಗಳೂರು: ಕನ್ನಡಪರ ಹೋರಾಟಗಾರರ ಬಹುದಿನಗಳ ಬೇಡಿಕೆ ಕೊನೆಗೂ ಈಡೇರಿದೆ. ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ (Karnataka Govt). ಶುಕ್ರವಾರ (ಫೆ. 28) ಈ ಬಗ್ಗೆ ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಇತರ ಯಾವುದೇ ಭಾಷೆಯಲ್ಲಿ ಇದ್ದರೂ ಅದರ ಜತೆಗೆ ಕನ್ನಡದಲ್ಲಿಯೂ ವಿವರ ಇರಲೇಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಉಮಾದೇವಿ (Umadevi) ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಅವಕಾಶ ಕಲ್ಪಿಸುವ ಉದ್ದೇಶದಿಂದ ಸರ್ಕಾರ 2024ರಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022 ಅನ್ನು ಜಾರಿಗೆ ತಂದಿದೆ. ಅದರ ಅಡಿಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ.
ಸುತ್ತೋಲೆಯಲ್ಲಿ ಏನಿದೆ?
ಭಾಷೆಯು ನೆಲದ ಸಂಸ್ಕೃತಿ ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿನಿಧಿಸುತ್ತದೆ. ಒಂದು ಭಾಷೆ ಬೆಳವಣಿಗೆ ಆಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ ಮಾರುಕಟ್ಟೆ ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2020ನ್ನು ದಿನಾಂಕ 2024ರ ಮಾರ್ಚ್ 12ರಿಂದ ಜಾರಿಗೆ ತಂದಿದೆ. ಈ ಅಧಿನಿಯಮದ ಕಲಂ 17 (7)ರಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯ ಜತೆಗೆ ಕನ್ನಡದಲ್ಲಿ ಇರತಕ್ಕಂದು ತಿಳಿಸಲಾಗಿದೆ.
ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸರಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಗಳ ಜತೆಗೆ ಕನ್ನಡದಲ್ಲಿಯೂ ಕಡ್ಡಾಯವಾಗಿ ಮುದ್ರಿಸುವಂತೆ ಈ ಮೂಲಕ ಸೂಚಿಸಲಾಗಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಕಲಂ 9ರಡಿ ಗೊತ್ತುಪಡಿಸಿದ ಜಾರಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಎಲ್ಲ ಕೈಗಾರಿಕಾ ಮತ್ತು ಗ್ರಾಹಕ ವಸ್ತುಗಳ ಉತ್ಪನ್ನದಾರರು ಮೇಲ್ವಿಚಾರಣೆಯನ್ನು ಮಾಡುವಂತೆ ಸೂಚಿಸಲಾಗಿದೆ ಎಂದು ಉಮಾದೇವಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: CM Siddaramaiah: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾಗಿದ್ದ 68,775 ಕೋಟಿ ರೂ. ಕಡಿತವಾಗಿದೆ; ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, “ಖಾಸಗಿ ಅಥವಾ ಸರ್ಕಾರಿ ವಲಯದಿಂದ ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳು ಸಾಮಾನ್ಯವಾಗಿ ಇಂಗ್ಲಿಷ್‌ನಲ್ಲಿ ಮಾತ್ರ ಲೇಬಲ್‌ಗಳನ್ನು ಹೊಂದಿರುತ್ತವೆ. ಭವಿಷ್ಯದಲ್ಲಿ ನಾವು ಕನ್ನಡವನ್ನೂ ಸೇರಿಸುವ ಗುರಿಯನ್ನು ಹೊಂದಿದ್ದೇವೆ” ಎಂದು ಹೇಳಿದ್ದರು. ಅದರಂತೆ ಇದೀಗ ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.