Karnataka Rain: ಮಳೆ ಅನಾಹುತಕ್ಕೆ ನಾಲ್ವರು ಬಲಿ, ಇಂದು 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
ಮುಂಗಾರು ಕರ್ನಾಟಕ ಪ್ರವೇಶಿಸಿದ ಒಂದೇ ದಿನದಲ್ಲಿ ರಾಜ್ಯದ ವಿವಿಧೆಡೆ ಮಳೆ ಆರ್ಭಟ ತೀವ್ರಗೊಂಡಿದೆ. ಕರಾವಳಿ, ಮಲೆನಾಡು ಹಾಗೂ ಕೊಡಗಿನ ವ್ಯಾಪ್ತಿಯಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದೆ. ಬೆಂಗಳೂರು ಮಹಾನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆ ಆಗುತ್ತಿದೆ.


ಬೆಂಗಳೂರು: ರಾಜ್ಯದಲ್ಲಿ ಮುಂಗಾರು (monsoon) ಮಳೆ ಅಬ್ಬರಿಸುತ್ತಿದ್ದು, ಸೋಮವಾರ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ. ಭಾರೀ ಮಳೆ (Karnataka rain news) ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು ಜಿಲ್ಲೆ ಅಂಗನವಾಡಿಗಳಿಗೆ ಇಂದು ರಜೆ (Leave) ಘೋಷಣೆ ಮಾಡಲಾಗಿದೆ.
ಮುಂಗಾರು ಕರ್ನಾಟಕ ಪ್ರವೇಶಿಸಿದ ಒಂದೇ ದಿನದಲ್ಲಿ ರಾಜ್ಯದ ವಿವಿಧೆಡೆ ಮಳೆ ಆರ್ಭಟ ತೀವ್ರಗೊಂಡಿದೆ. ಕರಾವಳಿ, ಮಲೆನಾಡು ಹಾಗೂ ಕೊಡಗಿನ ವ್ಯಾಪ್ತಿಯಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದೆ. ಬೆಂಗಳೂರು ಮಹಾನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆ ಆಗುತ್ತಿದೆ. ಧಾರಾಕಾರ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು ಹಲವರು ಮಹಾಮಳೆಗೆ ಬಲಿಯಾಗಿದ್ದಾರೆ. ಕೆಲವೆಡೆ ಮಳೆಗೆ ನೆನೆದ ಗೋಡೆ ಕುಸಿದು, ಕೆಲವೆಡೆ ಸಿಡಿಲಿನಿಂದ ಮೃತಪಟ್ಟಿದ್ದಾರೆ.
ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಇಂದು ಮತ್ತು ನಾಳೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮೈಸೂರು ಜಿಲ್ಲೆಯಲ್ಲಿ ಸತತವಾಗಿ ಮಳೆ ಇರುವುದರಿಂದ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ಮೇ 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲೆಯ ಶಾಲೆ, ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ. ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ವಿವಿ ವ್ಯಾಪ್ತಿಯ ಎಲ್ಲ ಘಟಕ, ಸರ್ಕಾರಿ, ಸಂಯೋಜಿತ ಮಹಾ ವಿದ್ಯಾಲಯಗಳಿಗೂ ಮೇ 26 – 27 ರಜೆ ಘೋಷಣೆ ಮಾಡಲಾಗಿದೆ.
ಮೀನುಗಾರರಿಗೆ ಎಚ್ಚರಿಕೆ
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು, ಈ ಭಾಗದ ನದಿ-ತೊರೆಗಳಲ್ಲಿ ಒಳಹರಿವು ಹೆಚ್ಚಾಗಲಿದೆ. ಪ್ರವಾಹ ಪರಿಸ್ಥಿತಿ ತಲೆದೋರುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಇನ್ನು ಮೇ 29 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಸಮುದ್ರದ ಅಲೆಗಳು ಉಲ್ಬಣಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: Karnataka Rains: ಇಂದು ಕರಾವಳಿ, ದಕ್ಷಿಣ ಒಳನಾಡಲ್ಲಿ ಭಾರಿ ಮಳೆ ಸಾಧ್ಯತೆ, Red Alert; ನದಿ ಪಾತ್ರಗಳಲ್ಲಿ ಪ್ರವಾಹ ಎಚ್ಚರಿಕೆ