ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Karnataka Weather: ಹೆಚ್ಚಾಗಲಿದೆ ರಣಬಿಸಿಲು, ಕರಾವಳಿಯಲ್ಲಿ ಮಳೆ ಸಂಭವ

ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಟ್‌ ಸ್ಟ್ರೋಕ್‌ ಆಗಬಹುದು. ಹೀಗಾಗಿ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದು, ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ನಿಯಂತ್ರಿಸುವಂತೆ ಸೂಚಿಸಲಾಗಿದೆ.

ಹೆಚ್ಚಾಗಲಿದೆ ರಣಬಿಸಿಲು, ಕರಾವಳಿಯಲ್ಲಿ ಮಳೆ ಸಂಭವ

ಸಾಂದರ್ಭಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Apr 22, 2026 8:01 AM

ಬೆಂಗಳೂರು, ಏ.22: ಬೆಂಗಳೂರು (Bengaluru) ಸೇರಿದಂತೆ ಹಲವೆಡೆ ತಾಪಮಾನ (Karnataka Weather) ಹೆಚ್ಚಾಗಿದ್ದು, ಈಗಾಗಲೇ ಕರಾವಳಿ (coast) ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆಗೆ ತತ್ತರಿಸಿದೆ. ಆದರೆ ಇಂದು ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ (rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯ ಜೊತೆಗೆ ಗುಡುಗು ಸಹಿತ ಮಳೆಯೂ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್ 23ರವರೆಗೂ ಇದೇ ವಾತಾವರಣವಿರಲಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆಯಿರಲಿದೆ ಎನ್ನಲಾಗಿದೆ. ಉತ್ತರ ಒಳನಾಡಿನ ವಿಜಯಪುರ, ಬೆಳಗಾವಿ, ಹಾವೇರಿ ಮತ್ತು ಧಾರವಾಡ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಹೀಟ್‌ ಸ್ಟ್ರೋಕ್‌ ಎಚ್ಚರಿಕೆ

ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಟ್‌ ಸ್ಟ್ರೋಕ್‌ ಆಗಬಹುದು. ಹೀಗಾಗಿ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದನ್ನು ತಪ್ಪಿಸುಂತೆ ಹೇಳಲಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ನಿಯಂತ್ರಿಸುವಂತೆ ಸೂಚಿಸಲಾಗಿದೆ.

ತಾಪಮಾನ ಏರಿಕೆಯಾಗುತ್ತಿರುವುದು ಆತಂಕಕಾರಿ ವಿಚಾರ : ನ್ಯಾ.ನೇರಳೆ ವೀರಭದ್ರಯ್ಯ ಭವಾನಿ ಕಳವಳ

ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.