ಬೆಂಗಳೂರು, ಏ.18: ರಾಜ್ಯದಾದ್ಯಂತ ಬೇಸಿಗೆ (Summer) ಬಿಗಡಾಯಿಸಿದ್ದು, ಉಷ್ಣ ಅಲೆ (heat wave) ಆವರಿಸಿದೆ. ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ (temperature) ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ (Karnataka Weather forecast) ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು (water) ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಕರಾವಳಿಯು ಬಿಸಿಲ ಬೇಗೆಯಲ್ಲಿ ಸುಡುತ್ತಿದೆ. ಉತ್ತರ ಕನ್ನಡದಲ್ಲಿ ಇಂದಿನ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇದ್ದು, ಇದು 42 ಡಿಗ್ರಿಗೂ ಏರಿಕೆಯಾಗಬಹುದು. ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿಯೂ ಹೆಚ್ಚಿನ ತಾಪಮಾನ ದಾಖಲಾಗಿದ್ದು, ಈ ನಡುವೆ ಸಾಧಾರಣ ಮಳೆಯಾಗುವ ಸಂಭವವೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ವಿಜಯಪುರ, ಕಲಬುರ್ಗಿ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಹೀಟ್ ವೇವ್ ಅಲರ್ಟ್ ನೀಡಲಾಗಿದೆ.
ಹೀಟ್ ಸ್ಟ್ರೋಕ್‌ನಿಂದ ರಕ್ಷಿಸಿಕೊಳ್ಳಿ
ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದನ್ನು ತಪ್ಪಿಸುವಂತೆ ಹೇಳಲಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ನಿಯಂತ್ರಿಸುವಂತೆ ಸೂಚಿಸಲಾಗಿದೆ.
ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.
Shashidhara Halady Column: ಬೇಸಿಗೆಯ ಬಿಸಿಲಿನಲ್ಲಿ ಮಕ್ಕಳೇಕೆ ಕಾಡಲ್ಲಿ ಸುತ್ತುತ್ತಿದ್ದರು ?
ಎಲ್ಲೆಲ್ಲಿ ಒಣ ಹವೆ?
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.
ಬೇಸಿಗೆ ಧಗೆ ಹೆಚ್ಚಿದ್ದು ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು: ಜಿಲ್ಲಾಧಿಕಾರಿ ಜಿ. ಪ್ರಭು ತಾಕೀತು