ಮಡಿಕೇರಿ: ತಾಲೂಕಿನ ತಲಕಾವೇರಿಯಲ್ಲಿ ಅ.17ರಂದು ಮಧ್ಯಾಹ್ನ 1.44ಕ್ಕೆ ಸಲ್ಲುವ ಮಕರ ಲಗ್ನದಲ್ಲಿ 'ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ' (Cauvery Theerthodbhava 2025) ಆಗಲಿದೆ ಎಂದು ಭಗಂಡೇಶ್ವರ-ತಲಕಾವೇರಿ ದೇವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದಕ್ಕೂ ಮುನ್ನ ಭಾಗಮಂಡಲದ ಭಗಂಡೇಶ್ವರ ದೇಗುಲದಲ್ಲಿ ಸೆ. 26ರಂದು ಬೆಳಗ್ಗೆ 9.31ಕ್ಕೆ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅ. 4ರಂದು ಬೆಳಗ್ಗೆ 8.33ಕ್ಕೆ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ. 14ರಂದು ಬೆಳಗ್ಗೆ 11.45ಕ್ಕೆ ಧನು ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು, ಸಂಜೆ 4.45ಕ್ಕೆ ಮೀನ ಲಗ್ನದಲ್ಲಿ ಕಾಣಿಕೆ ಡಬ್ಬಿ ಇಡುವ ಧಾರ್ಮಿಕ ಕಾರ್ಯಗಳು ನಡೆಯಲಿವೆ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಗೆ ಸೇರಿದ ಭಗಂಡೇಶ್ವರ-ತಲಕಾವೇರಿ ದೇವಾಲಯದ ಪ್ರಕಟಣೆ ತಿಳಿಸಿದೆ.
ಇನ್ನು ಈ ಬಾರಿಯ ಕಾವೇರಿ ತೀರ್ಥೋದ್ಭವ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಅವರ ನೇತೃತ್ವದಲ್ಲಿ ನಡೆದಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ತಲಕಾವೇರಿಯ ಕುಂಡಿಕೆಯಲ್ಲಿ ಮೊಗೆದಷ್ಟು ನೀರು ಉತ್ಪತ್ತಿ!
ಕಾವೇರಿಯ ಉಗಮ ಸ್ಥಾನ ತಲಕಾವೇರಿಯ ಕುಂಡಿಕೆಯಲ್ಲಿ ಮೊಗೆದಷ್ಟು ನೀರು ಉತ್ಪತ್ತಿಯಾಗುತ್ತಿರುವುದು ವಿಸ್ಮಯಕಾರಿಯಾಗಿದ್ದು, ಈ ಜೀವಜಲವನ್ನು ಕೊಡಗಿನವರು ಸೇರಿದಂತೆ ಸಹಸ್ರಾರು ಮಂದಿ ಭಕ್ತಿಯಿಂದ ಪೂಜಿಸುತ್ತಾರೆ. ಜೀವ ನದಿಯನ್ನು ಕಣ್ತುಂಬಿಸಿಕೊಳ್ಳಲು ಸಹಸ್ರಾರು ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಿದ್ಧತೆ ಆರಂಭಿಸಿದೆ.
ಈ ಸುದ್ದಿಯನ್ನೂ ಓದಿ | Mysuru Dasara 2025: ದಸರಾ ದೀಪಾಲಂಕಾರ ಮತ್ತು ಡ್ರೋನ್ ಶೋ ಪೋಸ್ಟರ್, ಟೀಸರ್ ಬಿಡುಗಡೆ ಮಾಡಿದ ಸಚಿವ ಎಚ್.ಸಿ.ಮಹದೇವಪ್ಪ
ತಲಕಾವೇರಿಯಲ್ಲಿನ ಕುಂಡಿಕೆಯಲ್ಲಿ ಪ್ರತಿ ವರ್ಷ ಕಾವೇರಿ ತೀರ್ಥ ರೂಪದಲ್ಲಿ ದರ್ಶನ ನೀಡುತ್ತಾಳೆ ಎನ್ನುವುದು ಪುರಾತನ ಕಾಲದಿಂದಲೂ ಇರುವ ನಂಬಿಕೆ. ಈ ಸಂದರ್ಭ ಸಹಸ್ರಾರು ಭಕ್ತರು ತೀರ್ಥರೂಪಿಣಿ ಕಾವೇರಿ ತಾಯಿಯನ್ನು ಕಣ್ತುಂಬಿಕೊಳ್ಳುತ್ತಾರೆ. ಕೇವಲ ಕೊಡಗು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆ ಹಾಗೂ ತಮಿಳುನಾಡಿನಿಂದಲೂ ಸಾಕಷ್ಟು ಭಕ್ತರು ಆಗಮಿಸಿ ಇಲ್ಲಿಂದ ತೀರ್ಥ ಕೊಂಡೊಯ್ಯುತ್ತಾರೆ. ಇಲ್ಲಿನ ಪುಟ್ಟ ಕುಂಡಿಕೆಯಲ್ಲಿನ ಕಾವೇರಿ ಜಲವನ್ನು ತೀರ್ಥವೆಂದು ನಂಬಿ ಪೂಜಿಸುವುದಲ್ಲದೆ, ಮನೆಗೆ ಕೊಂಡೊಯ್ಯುತ್ತಾರೆ. ಈ ಕುಂಡಿಕೆಯನ್ನು ಭಕ್ತಿ ಭಾವದಿಂದ ಕಾಣುತ್ತಾರೆ. ನಿತ್ಯ ಇಲ್ಲಿ ಪೂಜೆ ನಡೆಯುತ್ತದೆ.