Karnataka Weather: ಡಿ.12, 13 ರಂದು ರಾಜ್ಯದ ಹಲವೆಡೆ ಭಾರಿ ಮಳೆ ನಿರೀಕ್ಷೆ
Karnataka Weather: ಡಿ.11ರಂದು ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
Prabhakara R
December 10, 2024
ಬೆಂಗಳೂರು: ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪೂರ್ವ ಹಿಂದೂ ಮಹಾಸಾಗರ ವಲಯಗಳಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಮುಂದಿನ ಐದು ದಿನ ರಾಜ್ಯದ ದಕ್ಷಿಣ ಒಳನಾಡು ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಡಿಸೆಂಬರ್ 12 ಮತ್ತು 13 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮುಂಜಾನೆ ಮಂಜು ಆವರಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿ.11ರಂದು ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಮಂಜು ದಟ್ಟ ಮಂಜು ಕವಿಯಲಿದೆ.
ಇನ್ನು ಡಿ.12ರಂದು ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು, ರಾಮನಗರ, ಚಿತ್ರದುರ್ಗ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಕೊಪ್ಪಳ, ಗದಗ, ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಡಿ.13 ಡಿಸೆಂಬರ್ 2024): ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಡಿ.14ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಡಿ.12ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಸಮಯದಲ್ಲಿ ಆಳದಿಂದ ಮಧ್ಯಮ ಮಂಜಿನ ಸಾಧ್ಯತೆ ಇರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29°C ಮತ್ತು 19°C ಆಗಿರಬಹುದು.
ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29°C ಮತ್ತು 19°C ಆಗಿರಬಹುದು.
ಈ ಸುದ್ದಿಯನ್ನೂ ಓದಿ | Namma Metro: ಬೊಮ್ಮಸಂದ್ರ ಮೆಟ್ರೋ ನಿಲ್ದಾಣಕ್ಕೆ ತೈವಾನ್ ಕಂಪನಿ ಹೆಸರು; 65 ಕೋಟಿ ರೂ. ಪಡೆದ ಬಿಎಂಆರ್‌ಸಿಎಲ್