ಬೆಂಗಳೂರು: ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ (K.Y.Nanjegowda) ಅವರು ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹೊಸದಾಗಿ ಮರು ಮತ ಎಣಿಕೆ ನಡೆಸಲು ಕೋರ್ಟ್ ಸೂಚನೆ ನೀಡಿದೆ. ಮರು ಮತ ಎಣಿಕೆಯ ನಂತರ ಹೊಸದಾಗಿ ಫಲಿತಾಂಶ ಘೋಷಿಸಲು ನ್ಯಾ.ಆರ್ ದೇವದಾಸ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.
ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಮಂಜುನಾಥಗೌಡ ಅರ್ಜಿ ಸಲ್ಲಿಸಿದ್ದರು. ವಿಧಾನಸಭೆ ಚುನಾವಣೆ ಮತ ಎಣಿಕೆ ವೇಳೆ ಲೋಪವಾಗಿದೆ. ಹೀಗಾಗಿ ಶಾಸಕರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿದ್ದರು. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್, ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ, 4 ವಾರಗಳಲ್ಲಿ ಹೈಕೋರ್ಟ್ ಮರು ಮತ ಎಣಿಕೆ ನಡೆಸಲು ಆದೇಶ ನೀಡಿದೆ.
ಇದೇ ವೇಳೆ ಜಿಲ್ಲಾ ಚುನಾವಣಾ ಅಧಿಕಾರಿ ಮತ ಎಣಿಕೆಯ ವಿಡಿಯೋ ಸಲ್ಲಿಸಿಲ್ಲ, ಹಾಗಾಗಿ ಅವರ ವಿರುದ್ಧ ಸಹ ಕ್ರಮಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಅವರ ವಿರುದ್ಧ ಕೇವಲ 248 ಮತಗಳ ಅಂತರದಿಂದ ಗೆದ್ದಿದ್ದರು. ಹೀಗಾಗಿ ಮತ ಎಣಿಕೆ ವೇಳೆ ಲೋಪವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಆರೋಪಿಸಿದ್ದರು.
ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅವಕಾಶ
ಶಾಸಕ ಕೆ.ವೈ. ನಂಜೆಗೌಡ ಪರ ಹಿರಿಯ ವಕೀಲೆ ನಳಿನಾ ಮಾಯಾಗೌಡ ಅವರು ಹೈಕೋರ್ಟ್ ತೀರ್ಪಿಗೆ ಮಧ್ಯಂತರ ತಡೆ ನೀಡುವಂತೆ ಮನವಿ ಮಾಡಿದ್ದಾರೆ. ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸುವವರೆಗೆ 30 ದಿನಗಳ ವರೆಗೆ ತಡೆ ನೀಡಲು ನಂಜೇಗೌಡ ಪರ ವಕೀಲರು ಮನವಿ ಮಾಡಿದ್ದಾರೆ. ಇದರಿಂದ ಶಾಸಕ ನಂಜೇಗೌಡಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಹೈಕೋರ್ಟ್ ತನ್ನದೇ ತೀರ್ಪಿಗೆ ತಡೆ 30 ದಿನ ತಡೆ ನೀಡಿದ್ದು, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ.