ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Laxmi Hebbalkar: ಯಜಮಾನಿಯರಿಗೆ ಗುಡ್‌ನ್ಯೂಸ್‌: ಮಹಿಳೆಯರಿಗೆ ಆರ್ಥಿಕ ಬಲ ತುಂಬಲು ಶೀಘ್ರದಲ್ಲೇ ಗೃಹಲಕ್ಷ್ಮಿ ಸಂಘಗಳ ರಚನೆ

Laxmi Hebbalkar: ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮಹಿಳೆಯರಿಗೆ ಆರ್ಥಿಕ ಬಲ ತುಂಬಲು ಶೀಘ್ರದಲ್ಲೇ ಗೃಹಲಕ್ಷ್ಮಿ ಸಂಘಗಳ ರಚನೆ

Profile Siddalinga Swamy Jul 5, 2025 6:43 PM

ಬೀದರ್: ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar)‌ ಹೇಳಿದರು. ಬೀದರ್ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಕಲಬುರಗಿ ವಿಭಾಗ ಮಟ್ಟದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎರಡನೇ ದಿನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ‌ಈ ವರ್ಷ ಅಂಗನವಾಡಿ ಆರಂಭವಾಗಿ 50 ವರ್ಷ ತುಂಬುತ್ತಿದ್ದು, ಅಕ್ಟೋಬರ್‌ನಲ್ಲಿ ಸುವರ್ಣ ಮಹೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಗೃಹಲಕ್ಷ್ಮಿ ಸಂಘಗಳ ಘೋಷಣೆ ಮಾಡಿ ಇನ್ನಷ್ಟು ಬಲ ತುಂಬಲಾಗುವುದು ಎಂದರು.

ಇಲಾಖೆಯಲ್ಲಿ ಸಾಕಷ್ಟು ಯೋಜನೆಗಳಿದ್ದು, ಜನರಿಗೆ ತಿಳಿವಳಿಕೆ ಮೂಡಿಸಲು ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳಬೇಕು. ನಮ್ಮ ಇಲಾಖೆ ಜನರಿಗೆ, ಜನರ ಬದುಕಿಗೆ ಹತ್ತಿರವಾದ ಇಲಾಖೆ, ಅಧಿಕಾರಿಗಳು ಹೆಚ್ಚು ಕಾಳಜಿಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಬಾಲ್ಯ ವಿವಾಹವನ್ನು ತಡೆಯಲು ಅಧಿಕಾರಿಗಳು ವಿಶೇಷ ಕ್ರಮಕೈಗೊಳ್ಳಬೇಕು, ಸ್ವತಃ ಕರೆ ಮಾಡಿ ತನ್ನ ವಿವಾಹವನ್ನು ತಪ್ಪಿಸುವಂತೆ ಅಧಿಕಾರಿಗಳನ್ನು ಕೋರಿದ್ದ ಜಿಲ್ಲೆಯ ಬಾಲಕಿಯನ್ನು ಕರೆಸಿ ಸನ್ಮಾನಿಸಬೇಕು, ಜತೆಗೆ ಆರ್ಥಿಕ ಸಹಾಯ ಮಾಡಬೇಕು. ಇದರಿಂದ ಬೇರೆಯವರಿಗೂ‌ ಕೂಡ ಸಹಾಯವಾಗುತ್ತದೆ ಎಂದ ಸಚಿವರು, ಎಲ್ಲಾ ಇಲಾಖೆಗಳು ಕೈಜೋಡಿಸಿದಾಗ ಅನಿಷ್ಟ ಪದ್ಧತಿಗಳನ್ನು ತಡೆಯಲು ಸಾಧ್ಯ. ಜಾಗೃತಿ ಮೂಡಿಸುವುದರ ಜತೆಗೆ ಕಠಿಣ ಕ್ರಮದ ಮೂಲಕ ಭಯ ಹುಟ್ಟಿಸಿದರೆ ಅನಿಷ್ಟ ಪದ್ಧತಿ ನಿಲ್ಲಲು ಸಾಧ್ಯ ಎಂದು ತಿಳಿಸಿದರು.

ಕೇಂದ್ರ ಹಾಗೂ ರಾಜ್ಯದಿಂದ ಕಾಲಕಾಲಕ್ಕೆ ನೀಡಲಾಗುವ ಗುರಿಯನ್ನು ತಲುಪಲೇಬೇಕು. ಇಲಾಖೆ ಯೋಜನೆ ಅನುಷ್ಠಾನದಲ್ಲಿ ಹಿಂದೆ ಬಿದ್ದಲ್ಲಿ ಅಧಿಕಾರಿ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು‌.

ಕಲಬುರಗಿ ವಿಭಾಗದಲ್ಲಿ ಗೃಹಲಕ್ಷ್ಮಿ ಯೋಜನೆಗೆ 10 ಸಾವಿರ ಕೋಟಿ

ಈ ಭಾಗಕ್ಕೆ ಗೃಹಲಕ್ಷ್ಮೀ ಯೋಜನೆ ಮೂಲಕ 10 ಸಾವಿರ ಕೋಟಿ ರೂಪಾಯಿ ನೀಡಲಾಗಿದೆ. ಯಾರಿಗೂ ಯೋಜನೆ ಕೈ ತಪ್ಪದಂತೆ ಕ್ರಮ ಕೈಗೊಳ್ಳಬೇಕು. ಗೃಹಲಕ್ಷ್ಮಿ ಹಣದಿಂದ ಮಹಿಳೆಯರು ಸಾಕಷ್ಟು ಕಾರ್ಯಕ್ರಮ ಮಾಡುತ್ತಿದ್ದಾರೆ. ಅವುಗಳನ್ನು ಪ್ರಚಾರ ಮಾಡುವುದರಿಂದ ಇತರರಿಗೂ ಲಾಭವಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚಿಸಿದರು. ಗೃಹಲಕ್ಷ್ಮಿ ಸಂಘಗಳ ಮೂಲಕ ಇನ್ನೂ ಹೆಚ್ಚಿನ ಪ್ರಯೋಜನವಾಗುವಂತೆ ಹೇಗೆ ಮಾಡಬಹುದು ಎನ್ನುವ ಚಿಂತನೆ ಮಾಡುತ್ತಿದ್ದೇವೆ ಎಂದರು‌.

ಅಕ್ಕ ಪಡೆಗೆ ಸಚಿವರ ಶ್ಲಾಘನೆ

ಬೀದರ್ ಜಿಲ್ಲೆಯಲ್ಲಿ 10 ಜನ ಮಹಿಳಾ ಪೊಲೀಸ್ ತಂಡದಿಂದ ಅಕ್ಕ ಪಡೆ ರಚಿಸಿ ಶಾಲಾ- ಕಾಲೇಜು, ಗಾರ್ಡನ್, ಹಾಸ್ಟೆಲ್ ಮೊದಲಾದ ಕಡೆ ನಿರಂತರ ನಿಗಾ ವಹಿಸುವ ಮೂಲಕ ಹೆಣ್ಣು ಮಕ್ಕಳಿಗೆ ವಿಶೇಷ ರಕ್ಷಣೆ ನೀಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಚಿವರು, ಇದೇ ಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಹೆಚ್ಚಿನ ಆದ್ಯತೆ ನೀಡಬೇಕು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅಂಗನವಾಡಿ ಕೇಂದ್ರಗಳಿಗೆ ಆಗಾಗ ಭೇಟಿ ನೀಡುತ್ತಿರಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡಬೇಕು, ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು. ಆಗ ಮಾತ್ರ ಸರ್ಕಾರಕ್ಕೂ ಒಳ್ಳೆ ಹೆಸರು ಬರುತ್ತದೆ. ಸಮಾಜಕ್ಕೂ ಸಹಾಯವಾಗುತ್ತದೆ ಎಂದು ತಿಳಿಸಿದ ಅವರು, ಇಲಾಖೆಯಲ್ಲಿ ಸಾಕಷ್ಟು ಯೋಜನೆಗಳಿವೆ. ಅವುಗಳ ಕುರಿತು ಜನರಿಗೆ ಸರಿಯಾದ ಅರಿವಿಲ್ಲ. ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಮಹಿಳೆಯರಿಗೆ ಸಹಾಯ ಮಾಡಲು ಬೇಕಾದಷ್ಟು ಅವಕಾಶಗಳಿವೆ. ಈ ಮೂಲಕ ಹೆಚ್ಚು ಹೆಚ್ಚು ಜನರನ್ನು ತಲುಪಬೇಕು ಎಂದು ಕರೆ ನೀಡಿದರು.

ಈ ಸುದ್ದಿಯನ್ನೂ ಓದಿ | IBPS Recruitment 2025: 6,215 ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ಈ ವೇಳೆ ಇಲಾಖೆಯ ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್, ಜಿಲ್ಲಾಧಿಕಾರಿ ಶಿಲ್ಪಾ‌ ಶರ್ಮ, ಜಿಲ್ಲಾ ಪಂಚಾಯಿತಿ ಸಿಇಒ ಗಿರೀಶ್ ಬಡೊಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಇಲಾಖೆಯ ನಿರ್ದೇಶಕ ರಾಘವೇಂದ್ರ, ಜಂಟಿ ಕಾರ್ಯದರ್ಶಿ ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್ , ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಸೇರಿದಂತೆ ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.