ಮಂಡ್ಯ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ 9ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ (heart attack) ಮೃತಪಟ್ಟಿರುವ ಘಟನೆ (Mandya Student Death) ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ವೀರಮಣಿ (14) ಮೃತ ದುರ್ದೈವಿ.
ಮಧ್ಯಾಹ್ನ ಶಾಲೆಯಲ್ಲಿ ಎಂದಿನಂತೆ ಇತರ ಮಕ್ಕಳೊಂದಿಗೆ ಬಿಸಿಯೂಟ ಮಾಡುತ್ತಿದ್ದಾಗ ವೀರಮಣಿ ಏಕಾಏಕಿ ಮೂರ್ಛೆಹೋಗಿ ಕೆಳಗೆ ಬಿದ್ದಿದ್ದಾನೆ. ತಕ್ಷಣ ಎಚ್ಚೆತ್ತ ಶಿಕ್ಷಕರು ಆತನನ್ನು ಸ್ಥಳೀಯ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆದರೆ, ಬಾಲಕನ ಸ್ಥಿತಿ ಗಂಭೀರವಾಗಿದ್ದ ಕಾರಣ, ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ದುರದೃಷ್ಟವಶಾತ್, ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ.
ತಪಾಸಣೆ ನಡೆಸಿದ ವೈದ್ಯರು, ಬಾಲಕ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ಶಾಲಾ ಬಾಲಕ ಹೃದಯಾಘಾತಕ್ಕೆ ಬಲಿಯಾಗಿರುವುದು ಗ್ರಾಮಸ್ಥರಲ್ಲಿ ಆಘಾತ ಮೂಡಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಚಿಕ್ಕಬಳ್ಳಾಪುರದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವುದು ಚಿಕ್ಕಬಳ್ಳಾಪುರ ನಗರದ ಪ್ರಶಾಂತನಗರದಲ್ಲಿ ನಡೆದಿದೆ. 17 ವರ್ಷದ ಶ್ರೇಯಾ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಶ್ರೇಯಾ ಮೂಡಬಿದ್ರೆಯ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಚಿಕ್ಕಬಳ್ಳಾಪುರದಲ್ಲಿರುವ ಮನೆಗೆ ಬಂದಿದ್ದಳು. ಮನೆಯಲ್ಲಿದ್ದವರು ಹೊರಗಡೆ ತೆರಳಿದ್ದ ವೇಳೆ ಶ್ರೇಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಬಾಗಲಕೋಟೆಯ ಸರ್ಕಾರಿ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದಾಗಲೇ ಮೇಲ್ಚಾವಣಿ ಕುಸಿತ; ಹಲವು ಮಕ್ಕಳಿಗೆ ಗಾಯ!
ಮಗಳ ಸಾವಿನ ಸುದ್ದಿ ತಿಳಿದು ತಾಯಿ ನಾಗಲಕ್ಷ್ಮಿ ಆಘಾತಕ್ಕೊಳಗಾಗಿದ್ದಾರೆ. ನಾಗಲಕ್ಷ್ಮಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದಾರೆ. ತಂದೆ ಪಿಡಿಒ ಆಗಿದ್ದು ಅನಾರೋಗ್ಯಕ್ಕೆ ಓಳಗಾಗಿದ್ದಾರೆ. ಈಗ ಮಗಳ ಸಾವಿನ ಸುದ್ದಿ ತಂದೆ-ತಾಯಿಗೆ ಬರ ಸಿಡಿಲು ಬಡಿದಂತಾಗಿದೆ. ಘಟನೆ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.