ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
Siddaramaiah: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದ್ದ K.R.ಪೇಟೆ ಕೃಷ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಅವರು ಘೋಷಿಸಿದರು.
ಸಂಗ್ರಹ ಚಿತ್ರ -
ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದ್ದ K.R.ಪೇಟೆ ಕೃಷ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿರುವ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿರುವುದಾಗಿ ಘೋಷಿಸಿದರು.
ಚುನಾವಣಾ ರಾಜಕೀಯದ ನಿವೃತ್ತಿಯ ತೀರ್ಮಾನದ ಬಗ್ಗೆ ಹೈಕಮಾಂಡ್‌ಗೆ ತಿಳಿಸಿದ್ಧೇನೆ ಎಂದು ಅವರು ಹೇಳಿದ್ದಾರೆ. ಈ ವೇಳೆ ಪಕ್ಷದ ಕೆಲ ನಾಯಕರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ನೀವು ರಾಜಕೀಯದಲ್ಲಿ ಇರಬೇಕು ಎಂದು ಒತ್ತಾಯಿಸಿದರೆ. ಆದರೆ ಸಿದ್ದರಾಮಯ್ಯ ಮಾತ್ರ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದರು.
8 ವರ್ಷಗಳ ವರ್ಷಗಳಿಗೂ ಹೆಚ್ಚು ಕಾಲ ಅಧಿಕಾರ ನಡೆಸುವ ಮೂಲಕ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. ಮೊದಲ ಅವಧಿಯಲ್ಲಿ 13 ಮೇ 2013 ರಿಂದ 15 ಮೇ 2018 ರವರೆಗೆ ಅವರು ಸಿಎಂ ಆಗಿ 5 ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರೆ, ಎರಡನೇ ಅವಧಿಯಲ್ಲಿ 20 ಮೇ 2023 ರಿಂದ 3 ಜೂನ್ 2026 ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.
12 ಆಗಸ್ಟ್ 1948 ರಂದು ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿ ಗ್ರಾಮದಲ್ಲಿ ಜನಿಸಿದ ಸಿದ್ದರಾಮಯ್ಯ ಶಾರದಾ ವಿಲಾಸ ಕಾನೂನು ಕಾಲೇಜಿನಿಂದ 1972 ರಲ್ಲಿ ಕಾನೂನು ಪದವಿಯನ್ನು ಪಡೆದುಕೊಂಡಿದ್ದಾರೆ. ವಕೀಲ ವೃತ್ತಿಯಲ್ಲಿದ್ದರೂ ಇವರನ್ನು ಸೆಳೆದಿದ್ದು ಮಾತ್ರ ರಾಜಕೀಯ. ಸಮಾಜವಾದಿ ಚಿಂತಕ ಡಾ. ರಾಮ್ ಮನೋಹರ್ ಲೋಹಿಯಾ ಅವರ ಸಿದ್ಧಾಂತಗಳಿಂದ ಪ್ರೇರಿತರಾಗಿ, ವಕೀಲಿ ವೃತ್ತಿ ಬಿಟ್ಟು ರೈತ ಚಳವಳಿಗಳ ಮೂಲಕ ಸಾರ್ವಜನಿಕ ಜೀವನಕ್ಕೆ ಬಂದರು. 1978 ರಲ್ಲಿ ಮೈಸೂರು ತಾಲೂಕು ಅಭಿವೃದ್ಧಿ ಮಂಡಳಿ ಸದಸ್ಯರಾಗಿ ಮೊದಲ ಬಾರಿಗೆ ಆಯ್ಕೆಯಾದರು.
ಐದು ದಶಕಗಳ ರಾಜಕೀಯ ಜೀವನ
1983 ರಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಭಾರತೀಯ ಲೋಕದಳ ಟಿಕೆಟ್‌ನಿಂದ ಸ್ಪರ್ಧಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು. ನಂತರ ರಾಮಕೃಷ್ಣ ಹೆಗಡೆ ಅವರ ನೇತೃತ್ವದ ಜನತಾ ಪಕ್ಷ ಸೇರಿದರು. ನತಾ ದಳ ಸರ್ಕಾರದ ಅವಧಿಯಲ್ಲಿ ಪಶುಸಂಗೋಪನೆ, ರೇಷ್ಮೆ, ಸಾರಿಗೆ ಮತ್ತು ಹಣಕಾಸು ಸಚಿವರಾಗಿ ಕೆಲಸ ಮಾಡಿದರು. ಜೆ.ಎಚ್. ಪಟೇಲ್ ಅವರ ಸರ್ಕಾರದಲ್ಲಿ (1996) ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾದರು.
ಜೆಡಿಎಸ್‌ನಿಂದ ಉಚ್ಚಾಟನೆ
2005 ರಲ್ಲಿ ದೇವೇಗೌಡರೊಂದಿಗೆ ಭಿನ್ನಾಭಿಪ್ರಾಯ ಉಂಟಾಗಿ ಸಿದ್ದರಾಮಯ್ಯ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಲಾಯಿತು. 2006 ರಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಸೇರಿದರು. ಅದೇ ವರ್ಷ ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಕೇವಲ 257 ಮತಗಳ ಅಂತರದಿಂದ ರೋಮಾಂಚಕ ಗೆಲುವು ಸಾಧಿಸಿದರು.
ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಇದು ದೇಶದ ವಿದ್ಯಾರ್ಥಿ-ಯುವಜನತೆಯ ಗೆಲುವು ಎಂದ ಸಿದ್ದರಾಮಯ್ಯ
2008 ರಿಂದ 2013 ರವರೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದರು. 2013 ರ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದಾಗ ರಾಜ್ಯದ 16 ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಎರಡನೇ ಬಾರಿಗೆ 2023 ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಗೆದ್ದು, ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದಂತೆ ಎರಡನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಸುಮಾರು 12 ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಿ 9 ಬಾರಿ ಜಯಗಳಿಸಿರುವ ಸಿದ್ದರಾಮಯ್ಯ ಅವರು, ಮೇ 28, 2026 ರಂದು ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದೀಗ ಅವರು ಚುನಾವಣಾ ನಿವೃತ್ತಿ ಪಡೆಯುತ್ತಿರುವುದು ಅಭಿಮಾನಿಗಳಲ್ಲಿ ಭಾರಿ ಬೇಸರ ಉಂಟುಮಾಡಿದೆ.