Mandya Car Accident: ಮಂಡ್ಯದಲ್ಲಿ ಭೀಕರ ಕಾರು ಅಪಘಾತ; ಮೂವರ ದುರ್ಮರಣ
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿಯಲ್ಲಿ ಭಾನುವಾರ ಅಪಘಾತ ನಡೆದಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕಾರು ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ಬಳಿ ನಡೆದಿರುವ ಕಾರು ಅಪಘಾತ. -
ಮಂಡ್ಯ, ಡಿ.7: ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿಯಲ್ಲಿ ಭೀಕರ ಕಾರು ಅಪಘಾತ (Mandya Car Accident) ನಡೆದಿದ್ದು, ಮೂವರು ದುರ್ಮರಣ ಹೊಂದಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಪಲ್ಟಿಹೊಡೆದಿಂದ ದುರಂತ ಸಂಭವಿಸಿದೆ. ಚಿಕ್ಕಮಗಳೂರು ಮೂಲದ ಚನ್ನೆಗೌಡ (60), ಸರೋಜಮ್ಮ (55), ಜಯಮ್ಮ (70) ಮೃತ ದುರ್ದೈವಿಗಳು.
ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕಾರು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ತಿರುವಿನಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದ್ದೂರು ಬಳಿ ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿಗೆ ಗಾಯ
ಮದ್ದೂರು ಪಟ್ಟಣದ ಹೊರವಲಯದ ಬೆಂಗಳೂರು - ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಭಾನುವಾರ ಸಂಜೆ ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಳವಳ್ಳಿ ತಾಲೂಕಿನ ಶಿಂಷಾ ಮಾರಮ್ಮ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಹೆದ್ದಾರಿಯ ತೈಲೂರು ಕೆರೆಯ ಬಳಿ ಸರ್ವಿಸ್ ರಸ್ತೆ ವಿಭಜಕದ ಸಿಮೆಂಟ್ ಬ್ಲಾಕ್‌ಗೆ ಬಸ್ ಡಿಕ್ಕಿ ಹೊಡೆದು ಅಕ್ಸೆಲ್ ತುಂಡರಿಸಿ ಉರುಳಿ ಬಿದ್ದಿದೆ. ಗಾಯಾಳುಗಳನ್ನು ತಕ್ಷಣ ಪಟ್ಟಣದ ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ. ಬಸ್ ಅನ್ನು ಕ್ರೇನ್ ಮೂಲಕ ತೆರವುಗೊಳಿಸಿ ಸಾರ್ವಜನಿಕ ಓಡಾಟಕ್ಕೆ ಅನುವು ಮಾಡಿಕೊಡಲಾಗಿದೆ.
ಆಘಾತ ವ್ಯಕ್ತಪಡಿಸಿದ ಎಚ್.ಡಿ.ಕುಮಾರಸ್ವಾಮಿ
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿನ ಅಗರಲಿಂಗನದೊಡ್ಡಿ ಗ್ರಾಮದ ಬಳಿ ಸಂಭವಿಸಿದ ಖಾಸಗಿ ಬಸ್ಸಿನ ಅಪಘಾತದಲ್ಲಿ 21ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ವಿಷಯ ತಿಳಿದ ಕೂಡಲೇ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯ…
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 7, 2025
ಕಾರು ಅಪಘಾತದಲ್ಲಿ ಸಜೀವ ದಹನಗೊಂಡ ಸಿಪಿಐ ಸಾಲಿಮಠ: ಕಾರು ಅಪಘಾತ ಸಂಭವಿಸಿದ್ದು ಹೇಗೆ?
ಅಪಘಾತದ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದು, ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿನ ಅಗರಲಿಂಗನದೊಡ್ಡಿ ಗ್ರಾಮದ ಬಳಿ ಸಂಭವಿಸಿದ ಖಾಸಗಿ ಬಸ್ಸಿನ ಅಪಘಾತದಲ್ಲಿ 21ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ವಿಷಯ ತಿಳಿದ ಕೂಡಲೇ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದ್ದೇನೆ. ಗಾಯಾಳುಗಳೆಲ್ಲರೂ ಶೀಘ್ರವೇ ಚೇತರಿಸಿಕೊಳ್ಳಲಿ. ಯಾರ ಪ್ರಾಣಕ್ಕೂ ಹಾನಿ ಆಗದೇ ಎಲ್ಲರೂ ಗುಣಮುಖರಾಗಿ ಮನೆಗಳಿಗೆ ಮರಳಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.