ಡಿಸೆಂಬರ್ 16ರಂದು ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ; ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿಯಲ್ಲಿ ಭಾಗಿ
Droupadi Murmu: ರಾಷ್ಟ್ರಪತಿ ದ್ರೌಪದಿ ಮರ್ಮು ಡಿಸೆಂಬರ್ 16ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ರಾಷ್ಟ್ರಪತಿ ದ್ರೌಪದಿ ಮರ್ಮು -
ಮಂಡ್ಯ, ಡಿ. 12: ಸೆಪ್ಟೆಂಬರ್ 1ರಂದು ಮೈಸೂರಿಗೆ ಆಗಮಿಸಿದ್ದ ರಾಷ್ಟ್ರಪತಿ ದ್ರೌಪದಿ ಮರ್ಮು (Droupadi Murmu) 3 ತಿಂಗಳ ಬಳಿಕ ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 16ರಂದು ಅವರು ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮಳವಳ್ಳಿಯಲ್ಲಿ ಡಿಸೆಂಬರ್ 16ರಿಂದ 21ರವರೆಗೆ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿ ಮಹೋತ್ಸವವನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಳವಳ್ಳಿಯ ಮುನ್ಸಿಪಲ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡಿಸೆಂಬರ್ 16ರ ಮಧ್ಯಾಹ್ನ 2.10ಕ್ಕೆ ಮೈಸೂರಿನ ಏರ್ಪೋರ್ಟ್ಗೆ ಆಗಮಿಸಲಿರುವ ದ್ರೌಪದಿ ಮುರ್ಮು, ಬಳಿಕ ಹೆಲಿಕಾಪ್ಟರ್ನಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿಗೆ ತೆರಳಲಿದ್ದಾರೆ. ಬಳಿಕ ಮಳವಳ್ಳಿಯಲ್ಲಿ ನಡೆಯುವ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5.25ಕ್ಕೆ ಮಳವಳ್ಳಿಯಿಂದ ಮೈಸೂರಿಗೆ ಹಿಂದಿರುಗುವ ರಾಷ್ಟ್ರಪತಿ ರಾತ್ರಿ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಡಿಸೆಂಬರ್ 17ರ ಬೆಳಗ್ಗೆ 9.25ಕ್ಕೆ ಮೈಸೂರಿನಿಂದ ತಿರುಪತಿಗೆ ಹಿಂದಿರುಗಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಡ್ಯ ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ್ ಅಧಿಕಾರಿಗಳೊಂದಿಗೆ ಸಭೆ ಮಾಡಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಸಮರೋಪಾದಿಯಲ್ಲಿ ಕಾಮಗಾರಿ ನಡೆಸಲಾಗುತ್ತಿದೆ.
ಎಸ್.ಎಲ್. ಭೈರಪ್ಪ ಯುವ ತಲೆಮಾರಿಗೆ ಸ್ಫೂರ್ತಿ; ರಾಷ್ಟ್ರಪತಿ ದ್ರೌಪದಿ ಮುರ್ಮು ಬಣ್ಣನೆ
ಮೈಸೂರಿಗೆ ಭೇಟಿ ನೀಡಿದ್ದ ರಾಷ್ಟ್ರಪತಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಸೆಪ್ಟೆಂಬರ್ 1ರಂದು ಮೈಸೂರಿಗೆ ಆಗಮಿಸಿದ್ದರು. ವಿವಿಧ ಕಾರ್ಯಕ್ರಮಗಳ ನಿಮಿತ್ತ ಮೈಸೂರಿಗೆ 2 ದಿನಗಳ ಪ್ರವಾಸವನ್ನು ಕೈಗೊಂಡಿದ್ದ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೂಗುಚ್ಚ ನೀಡಿ ಸ್ವಾಗತಿಸಿದರು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸಿಎಂ ಆತ್ಮೀಯವಾಗಿ ಸ್ವಾಗತಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು.
ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್)ಯಲ್ಲಿ ನಡೆದ 60ನೇ ವರ್ಷದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ದ್ರೌಪದಿ ಮುರ್ಮು ಭಾಗಿಯಾಗಿದ್ದರು. ಸೆಪ್ಟೆಂಬರ್ 1ರಂದು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ಅವರು ಸಂಜೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದರು. ಇದೇ ವೇಳೆ ದ್ರೌಪದಿ ಮುರ್ಮು ಮೈಸೂರು ಅರಮನೆಗೆ ಭೇಟಿ ನೀಡಿದ್ದರು.