ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru-Mysuru Expressway) ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕು ಸಾಗಣೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಅಪಘಾತ (Mandya Car Accident) ನಡೆದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಮಂಡ್ಯದ ಗುತ್ತಲು ಬಡಾವಣೆಯ ಮಹದೇವು (49) ಹಾಗೂ ತೈಲೂರು ಗ್ರಾಮದ ರಿತ್ವಿಕಾ (8) ಎಂದು ಗುರುತಿಸಲಾಗಿದೆ. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ನಗುವಿನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದಾರೆ. ಬಳಿಕ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಂಜನಗೂಡಿನ ದೇವಸ್ಥಾನಕ್ಕೆ ತೆರಳುತ್ತಿದ್ದ ಕುಟುಂಬದ ಸದಸ್ಯರು ಅಪಘಾತಕ್ಕೂ ಮುನ್ನ ಕಾರಿನಲ್ಲೇ ರೀಲ್ಸ್ ಮಾಡಿದ್ದರು ಎನ್ನಲಾಗಿದೆ. ಈ ವಿಡಿಯೋವನ್ನು ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿಯೂ ಹಂಚಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಕೆಲವೇ ಸಮಯದಲ್ಲಿ ಕುಟುಂಬದ ಪ್ರವಾಸ ದುರಂತದಲ್ಲಿ ಅಂತ್ಯಗೊಂಡಿರುವುದು ಸಂಬಂಧಿಕರು ಹಾಗೂ ಸ್ಥಳೀಯರಲ್ಲಿ ದುಃಖ ಮೂಡಿಸಿದೆ.