#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Micro Finance: ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ

ಕರ್ನಾಟಕದಲ್ಲಿ ಮಿತಿ ಮೀರಿದ ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ನಡೆದ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು ಯಾವೆಲ್ಲ ಎನ್ನುವ ವಿವರ ಇಲ್ಲಿದೆ.

ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರದಿಂದ ಕ್ರಮ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆ.

Profile Ramesh B Jan 30, 2025 6:23 PM

ಬೆಂಗಳೂರು: ಕರ್ನಾಟಕದಲ್ಲಿ ಮಿತಿ ಮೀರಿದ ಮೈಕ್ರೋ ಫೈನಾನ್ಸ್ (Micro Finance) ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಾಳಲಾರದೆ ಸಾಲ ಪಡೆದುಕೊಂಡುವರು ಆತ್ಮಹತ್ಯೆಯ ಹಾದಿ ಹಿಡಿಯುತ್ತಿರುವ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಮೈಕ್ರೋ ಫೈನಾನ್ಸ್‌ ಅಟ್ಟಹಾಸಕ್ಕೆ ಕಡಿವಾಣ ಹಾಕಲು ಸುಗ್ರೀವಾಜ್ಞೆ ತರಲು ಸಚಿವ ಸಂಪುಟದಲ್ಲಿ ಮಸೂದೆಗೆ ಅನುಮೋದನೆಯನ್ನೂ ನೀಡಲಾಗಿದೆ.

ಗುರುವಾರ (ಜ. 30) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾದ ಉನ್ನತ ಮಟ್ಟದ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು ಯಾವೆಲ್ಲ ಎನ್ನವ ವಿವರ ಇಲ್ಲಿದೆ:

  • ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲು ನಿರ್ಧಾರ. ಈ ಕುರಿತು ಕಾನೂನು ಇಲಾಖೆ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಚನೆ.
  • ಕಾಯ್ದೆ ಸಂಪೂರ್ಣ ಸಂವಿಧಾನಬದ್ಧವಾಗಿದ್ದು, ಯಾವುದೇ ಲೋಪದೋಷಗಳನ್ನು ಹೊಂದಿರಬಾರದು.
  • ಸಾಲಗಾರರು ಎದುರಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಸಾಲ ನೀಡಿದವರು ಬಲವಂತದ ವಸೂಲಿ ಮಾಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಬಲಿಷ್ಠ ಕಾಯ್ದೆ ರಚಿಸಲಾಗುತ್ತಿದೆ.
  • ಕಾಯ್ದೆಯಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಒಂಬುಡ್ಸ್‌ಮೆನ್‌ಗಳ ನೇಮಕ ಮಾಡಲಾಗುತ್ತದೆ. ಅಮಾನವೀಯವಾಗಿ ಬಲವಂತದ ಸಾಲ ವಸೂಲಾತಿ ಮಾಡುವವರಿಗೆ ಜಾಮೀನುರಹಿತ ಪ್ರಕರಣ ದಾಖಲು ಸೇರಿದಂತೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶ ಸಿಗಲಿದೆ.
  • ನೋಂದಣಿಯಾಗದ ಲೇವಾದೇವಿಗಾರರ ಕಿರುಕುಳವನ್ನು ತಪ್ಪಿಸಲು ಕಠಿಣ ಕಾನೂನು ಜಾರಿ ಮಾಡಲಾಗುತ್ತಿದೆ.
  • ಪ್ರಸ್ತುತವಿರುವ ಕಾನೂನಿನಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ನಿಯಂತ್ರಿಸಲು ಹಲವು ಅವಕಾಶಗಳಿದ್ದು, ಅದನ್ನು ಯಾಕೆ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ದೂರು ದಾಖಲು ಮಾಡುವ ತನಕ ಕಾಯದೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು.

ಈ ಸುದ್ದಿಯನ್ನೂ ಓದಿ: Microfinance companies: ಬಲವಂತವಾಗಿ ಸಾಲ ವಸೂಲಿ ಮಾಡಿದ್ರೆ ಕ್ರಿಮಿನಲ್ ಕೇಸ್; ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿಎಂ ವಾರ್ನಿಂಗ್

ಗೃಹ ಸಚಿವ ಜಿ.ಪರಮೇಶ್ವರ್‌, ಕಾನೂನು ಸಚಿವ ಎಚ್.ಕೆ.ಪಾಟೀಲ್ ಮತ್ತು ಸಚಿವರಾದ ಎಚ್.ಸಿ. ಮಹದೇವಪ್ಪ, ರಾಜಣ್ಣ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗೋವಿಂದರಾಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ಐದು ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.‌