#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Lakshmi Hebbalkar : ಲಕ್ಷ್ಮೀ ಹೆಬ್ಬಾಳ್ಕರ್‌ ವರ್ಕ್‌ ಫ್ರಮ್‌ ಹೋಮ್:‌ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಭಾಗಿ!

ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಮಧ್ಯೆ ಮನೆಯಿಂದಲೇ ಕಾರ್ಯ ನಿರ್ವಹಣೆ ಮಾಡುತ್ತಿರುವ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಸಿಎಂಗೆ ವರದಿ ಒಪ್ಪಿಸಿದ್ದಾರೆ.

ಮನೆಯಿಂದಲೇ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಭಾಗಿಯಾದ ಹೆಬ್ಬಾಳ್ಕರ್!

Lakshmi Hebbalkar

Profile Deekshith Nair Feb 11, 2025 11:14 AM

ಬೆಳಗಾವಿ: ಅಪಘಾತವೊಂದರಲ್ಲಿ(Accident) ಗಂಭೀರವಾಗಿ ಗಾಯಗೊಂಡಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌(Lakshmi Hebbalkar) ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಮಧ್ಯೆ ಮನೆಯಿಂದಲೇ ಕಾರ್ಯ ನಿರ್ವಹಣೆ ಮಾಡುತ್ತಿರುವ ಅವರು ನಿನ್ನೆ(ಫೆ.10) ವಿಡಿಯೊ ಕಾನ್ಫರೆನ್ಸ್‌(Video Conference) ಮೂಲಕ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ(Budget Meeting) ಭಾಗಿಯಾಗಿದ್ದಾರೆ. ಅಧಿಕಾರಿಗಳಿಂದ‌ ಅಗತ್ಯ ಮಾಹಿತಿ ಪಡೆದು ಮುಖ್ಯಮಂತ್ರಿಗೆ ವರದಿ ಒಪ್ಪಿಸಿದ್ದಾರೆ. ವಿಶ್ರಾಂತಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಹೆಬ್ಬಾಳ್ಕರ್‌ ಕಳೆದ ಕೆಲವು ದಿನಗಳಿಂದ ಬೆಳಗಾವಿಯ ಕುವೆಂಪು ನಗರದಲ್ಲಿರುವ ತಮ್ಮ ಗೃಹ ಕಚೇರಿಯಿಂದಲೇ ಇಲಾಖೆಯ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇತ್ತೀಚೆಗಷ್ಟೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಅದೃಷ್ಟವಶಾತ್‌ ಹೆಬ್ಬಾಳ್ಕರ್‌ ಪ್ರಾಣಾಪಾಯದಿಂದ ಪಾರಾಗಿದ್ದರು. ಅಪಘಾತದಿಂದಾಗಿ ಸಚಿವೆಯ ಬೆನ್ನು ಮತ್ತು ಕುತ್ತಿಗೆಗೆ ಗಂಭೀರವಾಗಿ ಗಾಯವಾಗಿತ್ತು. ವೈದ್ಯರ ಸಲಹೆಯಂತೆ ಹೆಬ್ಬಾಳ್ಕರ್‌ ತಮ್ಮ ಮನೆಯಲ್ಲಿ ಸುಧಾರಿಸಿಕೊಳ್ಳುತ್ತಿದ್ದಾರೆ. ವಿಶ್ರಾಂತಿ ನಡುವೆಯೂ ತಮ್ಮ ಇಲಾಖೆಗೆ ಸಂಬಂಧಪಟ್ಟ ಕೆಲಸಗಳನ್ನು ಗೃಹ ಕಚೇರಿಯಿಂದಲೇ ನಿರ್ವಹಿಸುತ್ತಿದ್ದಾರೆ. ಬಜೆಟ್‌ ಅಧಿವೇಶನದ ಹಿನ್ನೆಲೆ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಒಪ್ಪಿಸಿದ್ದಾರೆ. ವಿಡಿಯೊ ಕಾನ್ಫರೆನ್ಸ್‌ ಮೂಲಕ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಿಎಂ ಜತೆಗೆ ಮಹತ್ವದ ಮಾತುಕತೆ ನಡೆಸಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಸಂಬಂಧಿಸಿದ ಬೇಡಿಕೆಗಳನ್ನು ಪ್ರಸ್ತಾಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನೂ ಓದಿ:Union Budget 2025: ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ ಕೇಂದ್ರ ಬಜೆಟ್: ಸಚಿವೆ ಹೆಬ್ಬಾಳ್ಕರ್ ಕಿಡಿ

ಹೆಬ್ಬಾಳ್ಕರ್‌ ಬೇಗ ಗುಣಮುಖರಾಗಲಿ: ಸಿಟಿ ರವಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಬೇಗ ಗುಣಮುಖರಾಗಲಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಪ್ರಾರ್ಥಿಸಿದ್ದರು. ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದ ಸಿ.ಟಿ ರವಿ ಅವರು, ಕಿತ್ತೂರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್, ಅವರ ಸಹೋದರ ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲ ಅಧಿವೇಶನ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಮತ್ತು ಸಿ.ಟಿ ರವಿ ಮಧ್ಯೆ ನಡೆದ ಜಟಾಪಟಿ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಮುಗಿಸಿ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿ ಪ್ರಯಾಣಿಸುತ್ತಿದ್ದ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರ ಕಾರು ಬೆಳಗಿನ ಜಾವ 5 ಗಂಟೆಗೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅಪಘಾತಗೊಂಡಿತ್ತು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಲಕ್ಷ್ಮೀ ಹೆಬ್ಬಾಳ್ಳರ್ ಮತ್ತು ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ಬೆಳಗಾವಿಗೆ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಗೆ ಬಂದು ಮರಕ್ಕೆ ಡಿಕ್ಕಿಯಾಗಿತ್ತು. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿತ್ತು.