ಹುಬ್ಬಳ್ಳಿ: ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಗಣೇಶೋತ್ಸವ ಶಾಂತಿ ಸಭೆಯ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರು ಗಣೇಶ ಸಮಿತಿಯ ಯುವಕರಿಗೆ ಸಾರ್ವಜನಿಕವಾಗಿ ಎಚ್ಚರಿಕೆ ನೀಡಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಇನ್ಸ್‌ಪೆಕ್ಟರ್ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹಾಗೂ ಬಿಜೆಪಿ ನಾಯಕರು ಸರ್ಕಾರವನ್ನು ತೀವ್ರವಾಗಿ ಒತ್ತಾಯಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಪ್ರಲ್ಹಾದ್ ಜೋಶಿ, ನಮ್ಮದೇ ದೇಶದಲ್ಲಿ, ನಮ್ಮದೇ ನೆಲದಲ್ಲಿ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸಲು ಹಿಂದೂಗಳು ಗೋಗರೆಯಬೇಕಾದ ಪರಿಸ್ಥಿತಿ ರಾಜ್ಯದಲ್ಲಿದೆ ಎಂದರೆ ಇದಕ್ಕಿಂತ ದುರ್ದೈವದ ಸಂಗತಿ ಇನ್ನೊಂದಿಲ್ಲ!
ಮೈಸೂರಿನ ಟಿ. ನರಸೀಪುರದ ಇನ್ಸ್‌ಪೆಕ್ಟರ್, ಗಣೇಶ ಸಮಿತಿಯ ಯುವಕರಿಗೆ ಸಾರ್ವಜನಿಕವಾಗಿ ಧಮ್ಕಿ ಹಾಕುವಷ್ಟು ಧೈರ್ಯ ನೀಡಿದವರು ಯಾರು? ಇದು ಪೊಲೀಸ್ ಇಲಾಖೆಗೆ ಗೃಹ ಸಚಿವರು ನೀಡಿದ ಅಧಿಕಾರವೋ ಅಥವಾ ಡಿ.ಕೆ. ಶಿವಕುಮಾರ್ ಅವರ ಕಾಂಗ್ರೆಸ್ ಸರ್ಕಾರದ ತುಷ್ಟಿಕರಣ ರಾಜಕಾರಣದ ಫರ್ಮಾನಾ? ಸುವ್ಯವಸ್ಥೆ ಕಾಪಾಡಬೇಕಾದ ಅಧಿಕಾರಿಯೇ ಒಂದು ಸಮುದಾಯದ ಏಜೆಂಟ್‌ನಂತೆ ವರ್ತಿಸಿ, ಬೆದರಿಸುತ್ತಿರುವುದು ಅಕ್ಷಮ್ಯ ಅಪರಾಧ. ಭಕ್ತಿಭಾವದಿಂದ ಹಬ್ಬ ಆಚರಿಸಲು ಬಂದ ಯುವಕರಿಗೆ ಬೆದರಿಕೆ ಹಾಕಿರುವ ಇನ್ಸ್‌ಪೆಕ್ಟರ್ ಧನಂಜಯ್ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಜೋಶಿ ಹೇಳಿದರು.
ಕಾನೂನು ಮತ್ತು ಸುವ್ಯವಸ್ಥೆಯ ನೆಪವೊಡ್ಡಿ ಹಿಂದೂ ಹಬ್ಬಗಳ ಆಚರಣೆಯನ್ನೇ ಹತೋಟಿ ಮಾಡಲು ಹೊರಟಿರುವುದು ಈ ಸರ್ಕಾರದ ಹಿಂದೂ ವಿರೋಧಿ ಧೋರಣೆಗೆ ಹಿಡಿದ ಕನ್ನಡಿ. ನಮ್ಮ ಸನಾತನ ಸಂಸ್ಕೃತಿ, ಆಚರಣೆ ಹಾಗೂ ಭಕ್ತಿಭಾವದ ಮೇಲೆ ಧಕ್ಕೆ ತರಲು ಯತ್ನಿಸಿದರೆ ಅದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಅವರು ಕಿಡಿ ಕಾರಿದ್ದಾರೆ. ಮೈಸೂರು ಸಂಸದ ಯದುವೀರ್ ಒಡೆಯರ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಮುಖಂಡರು ಇನ್ಸ್‌ಪೆಕ್ಟರ್ ವರ್ತನೆಯನ್ನು ತೀವ್ರವಾಗಿ ಖಂಡಿಸಿದ್ದು, ರಾಜ್ಯದಲ್ಲಿ ಗಣೇಶ ಹಬ್ಬದ ಆಚರಣೆಗೆ ಅನಗತ್ಯ ನಿರ್ಬಂಧ ಹೇರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.