ಮೈಸೂರು, ಅಕ್ಟೋಬರ್ 15: ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ್ ಖರ್ಗೆಯವರು ಖುದ್ದು ತಿಳಿಸಿದ್ದಾರೆ. ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು, ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥ ಬೆದರಿಕೆಗಳಿಗೆ ಹೆದರುವುದಿಲ್ಲ. ಪ್ರಿಯಾಂಕ್ ಖರ್ಗೆಯವರಿಗೆ ರಕ್ಷಣೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು, ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಮೈಸೂರು ಏರ್‌ಪೋರ್ಟ್‌ನಲ್ಲಿ ಮಾಧ್ಯಮದವರೊಂದಿಗೆ ಬುಧವಾರ ಸಿಎಂ ಮಾತನಾಡಿದರು.
ತಮಿಳುನಾಡಿನಲ್ಲಿ ಆರ್‌ಎಸ್‌ಎಸ್‌ಗೆ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು. ಪ್ರಿಯಾಂಕ ಖರ್ಗೆಯವರಿಗೆ ರಕ್ಷಣೆ ಒದಗಿಸಲಾಗುವುದು. ದುಷ್ಟ ಶಕ್ತಿಗಳು ಯಾವಾಗಲೂ ಇಂಥದ್ದೇ ಕೆಲಸ ಮಾಡುವುದು. ಬೆದರಿಕೆಗಳಿಗೆ ಪ್ರಿಯಾಂಕ್ ಅವರು ಹೆದರುವುದಿಲ್ಲ. ನಾನೂ ಹೆದರುವುದಿಲ್ಲ ಎಂದರು.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ತಡವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬೆಂಗಳೂರು ನಗರ ಬಿಟ್ಟರೆ ಬೇರೆಲ್ಲಿಯೂ ಶೇಕಡಾವಾರು ಪ್ರಮಾಣದಲ್ಲಿ ಕಡಿಮೆಯಾಗಿಲ್ಲ ಎಂದರು.
ಎಲ್ಲ ಶಾಸಕರಿಗೂ ಅನುದಾನ
ಶಾಸಕರಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಉಚ್ಚ ನ್ಯಾಯಾಲಯಕ್ಕೆ ಶ್ರೀನಿವಾಸಪುರ ಶಾಸಕರು ಮೊರೆ ಹೋಗಿರುವ ಬಗ್ಗೆ ಮಾತನಾಡಿ ಜೆಡಿಎಸ್‌ನವರು ನಮ್ಮ ಶಾಸಕರಿಗೆ ಅನುದಾನ ನೀಡಿದ್ದರೇ? ಎಂದು ಪ್ರಶ್ನಿಸಿದರು. ರಾಜ್ಯದ ಸರ್ವತೋಮುಖ ಅಭಿವೃದ್ಧಿಯಾಗಬೇಕಿದ್ದು, ಎಲ್ಲರಿಗೂ ಅನುದಾನ ಒದಗಿಸಲಾಗುತ್ತಿದೆ ಎಂದರು. ಇನ್ನು ಮೈಸೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸುದ್ದಿಯನ್ನೂ ಓದಿ | CM Siddaramaiah: ಬೆಂಗಳೂರಿಗರಿಗೆ ಗುಡ್‌ನ್ಯೂಸ್; ಟ್ರಾಫಿಕ್ ಕಿರಿಕಿರಿಗೆ ಶೀಘ್ರದಲ್ಲೇ ಸಿಗಲಿದೆ ಮುಕ್ತಿ
ಬಿಜೆಪಿಯವರು ತಾಕತ್ತಿದ್ದರೆ ಆರ್‌ಎಸ್ಎಸ್ ಮೇಲೆ ನಿಷೇಧ ಹೇರಲಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಚುನಾವಣಾ ಸಂದರ್ಭದಲ್ಲಿಯೂ ಬಿಜೆಪಿಯವರು ತಾಕತ್ತಿದ್ದರೆ ಬನ್ನಿ ಎಂದಿದ್ದರು. ಆದರೆ ಸೋತು ಹೋದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.